ಬಾಗಲಕೋಟೆ ಶಾಸಕ, ಮಾಜಿ ಸಚಿವ ಹೆಚ್.ವೈ ಮೇಟಿ ಇನ್ನಿಲ್ಲ

Untitled design 2025 11 04t123823.637

ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಶಾಸಕರೂ, ಮಾಜಿ ಸಚಿವರೂ ಆದ ಹೆಚ್.ವೈ.ಮೇಟಿ (H.Y. Meti) ಅವರು ನಿಧನರಾಗಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ತೀವ್ರ ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.

ಎಚ್.ವೈ. ಮೇಟಿ ಅವರು ಶ್ವಾಸಕೋಶ ಸಂಬಂಧಿತ ಸಮಸ್ಯೆಗಳು ಮತ್ತು ದಮ್ಮು (ಅಸ್ತಮಾ) ರೋಗದಿಂದ ಬಳಲುತ್ತಿದ್ದರು. ಇತ್ತೀಚೆಗೆ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಬೆಂಗಳೂರಿನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮೊನ್ನೆಯಷ್ಟೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಚಿವ ರಾಮಲಿಂಗಾ ರೆಡ್ಡಿ ಮತ್ತು ಇತರರೊಂದಿಗೆ ಆಸ್ಪತ್ರೆಗೆ ತೆರಳಿ, ಮೇಟಿ ಅವರ ಆರೋಗ್ಯದ ಬಗ್ಗೆ ವೈದ್ಯರೊಂದಿಗೆ ಚರ್ಚಿಸಿ, ಅವರ ಯೋಗಕ್ಷೇಮ ವಿಚಾರಿಸಿದ್ದರು. ಆದರೆ, ತೀವ್ರ ಅನಾರೋಗ್ಯದಿಂದಾಗಿ ಚಿಕಿತ್ಸೆ ಯಶಸ್ವಿಯಾಗದೇ ಅವರು ಇಂದು ನಿಧನರಾಗಿದ್ದಾರೆ.

ಹುಲ್ಲಪ್ಪ ಯಮನಪ್ಪ ಮೇಟಿ ಅವರು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಹಿರಿಯ ಸದಸ್ಯರಾಗಿ, ಕರ್ನಾಟಕ ರಾಜಕಾರಣದಲ್ಲಿ ಅಚ್ಚಳಿಯದ ಛಾಪು ಮೂಡಿಸಿದ್ದರು. ಅವರು 1989 ರಿಂದ 1999 ರವರೆಗೆ ಮತ್ತು 2004 ರಿಂದ 2007 ರವರೆಗೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು.

2013 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮೇಟಿ ಅವರು ಬಾಗಲಕೋಟೆ ಕ್ಷೇತ್ರದಿಂದ ಭರ್ಜರಿ ಗೆಲುವು ಸಾಧಿಸಿದ್ದರು. ಅಲ್ಲಿ ಅವರು 68,216 ಮತಗಳನ್ನು ಪಡೆದು ಪ್ರತಿಸ್ಪರ್ಧಿಗಳನ್ನು ಹಿಂದಕ್ಕಿಟ್ಟಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಅವರು ಮಾಜಿ ಸಚಿವರಾಗಿ ಸೇವೆ ಸಲ್ಲಿಸಿದ್ದರು. ರಾಜ್ಯ ಸರ್ಕಾರದಲ್ಲಿ ಎರಡು ಬಾರಿ ಸಚಿವ ಸ್ಥಾನವನ್ನು ಅಲಂಕರಿಸಿದ್ದ ಅವರು, ಸಿದ್ದರಾಮಯ್ಯ ಅವರ ಆಪ್ತ ಬಳಗದಲ್ಲಿ ಪ್ರಮುಖ ಸ್ಥಾನ ಪಡೆದಿದ್ದರು.

Exit mobile version