ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಹಾಗೂ ಶಕ್ತಿದೇವತೆ ಹಾಸನಾಂಬ ದೇವಿಯ ಜಾತ್ರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ದೊರೆತಿದೆ. ಆಶ್ವಯುಜ ಮಾಸದ ಹುಣ್ಣಿಮೆಯ ಬಳಿಕ ಬರುವ ಗುರುವಾರದಂದು ಸಂಪ್ರದಾಯದಂತೆ ಹಾಸನಾಂಬ ದೇವಾಲಯದ ಗರ್ಭಗುಡಿಯ ಬಾಗಿಲನ್ನು ಇಂದು ಮಧ್ಯಾಹ್ನ 12:28ಕ್ಕೆ ಶಾಸ್ತ್ರೋಕ್ತ ವಿಧಿವಿಧಾನಗಳೊಂದಿಗೆ ತೆರೆಯಲಾಯಿತು.
ಅರಸು ವಂಶಸ್ಥ ನಂಜರಾಜೇ ಅರಸ್ ಅವರು ಗೊನೆಯುಳ್ಳ ಬಾಳೆಕಂಬವನ್ನು ಕಡಿದ ಬಳಿಕ ಗರ್ಭಗುಡಿಯ ಬಾಗಿಲು ತೆರೆಯುವ ಮೂಲಕ ದೇವಿಯ ದರ್ಶನಕ್ಕೆ ಜಾತ್ರಾ ಮಹೋತ್ಸವದ ಧಾರ್ಮಿಕ ವಿಧಿವಿಧಾನಗಳಿಗೆ ಚಾಲನೆ ನೀಡಲಾಯಿತು. ಈ ವೇಳೆ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ. ಶಿವಲಿಂಗೇಗೌಡ, ಮುಜರಾಯಿ ಸಚಿವ ಬಸವಂತಪ್ಪ, ಶಾಸಕ ಹೆಚ್.ಪಿ. ಸ್ವರೂಪ್ ಪ್ರಕಾಶ್, ಸಂಸದ ಶ್ರೇಯಸ್ ಪಟೇಲ್, ದಕ್ಷಿಣ ವಲಯ ಐಜಿಪಿ ಬೋರಲಿಂಗಯ್ಯ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶುಭನ್ವಿತಾ ಹಾಗೂ ಆಡಳಿತಾಧಿಕಾರಿ ಜಗದೀಶ್ ಗಂಗಣ್ಣನವರ್ ಸೇರಿದಂತೆ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳು ಸಹ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನಾಳೆಯಿಂದ ಸಾರ್ವಜನಿಕರಿಗೆ ದರ್ಶನ
ಇಂದು ಗರ್ಭಗುಡಿಯ ಬಾಗಿಲು ತೆರೆಯುವ ವೇಳೆ ಸಾರ್ವಜನಿಕರಿಗೆ ದೇವಿಯ ದರ್ಶನಕ್ಕೆ ಅವಕಾಶ ಇರುವುದಿಲ್ಲ. ಅಕ್ಟೋಬರ್ 30ರ ಬೆಳಗ್ಗೆ 6 ಗಂಟೆಯಿಂದ ನವೆಂಬರ್ 10ರವರೆಗೆ ಭಕ್ತರಿಗೆ ಹಾಸನಾಂಬ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಭಕ್ತರ ಅನುಕೂಲಕ್ಕಾಗಿ ಜಿಲ್ಲಾಡಳಿತವು ₹1,000 ಹಾಗೂ ₹300 ಮೌಲ್ಯದ ವಿಶೇಷ ದರ್ಶನದ ಟಿಕೆಟ್ ವ್ಯವಸ್ಥೆ ಮಾಡಿದೆ.
ಜಾತ್ರಾ ಮಹೋತ್ಸವಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಹೀಗಾಗಿ ಯಾವುದೇ ಅಹಿತಕರ ಘಟನೆ ನಡೆಯದಂತೆ ವ್ಯಾಪಕ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ. ಮೂರು ಪಾಳಿಗಳಲ್ಲಿ 2,000ಕ್ಕೂ ಅಧಿಕ ಪೊಲೀಸರು ಮತ್ತು ಹೋಂಗಾರ್ಡ್‌ಗಳನ್ನು ನಿಯೋಜಿಸಲಾಗಿದೆ. ಧರ್ಮದರ್ಶನದ ಸರತಿ ಸಾಲಿನಲ್ಲಿ ನೂಕುನುಗ್ಗಲು ಉಂಟಾಗದಂತೆ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ದೇವಾಲಯದ ಸುತ್ತಮುತ್ತ ಸಿಸಿಟಿವಿ ಕ್ಯಾಮರಾಗಳ ಮೂಲಕ ನಿರಂತರ ನಿಗಾ ವಹಿಸಲಾಗುತ್ತಿದೆ.
ಜಾತ್ರೆಯಲ್ಲಿ ಕ್ರೀಡೆ, ಸಾಂಸ್ಕೃತಿಕ ಕಾರ್ಯಕ್ರಮ
ಹಾಸನಾಂಬ ಜಾತ್ರಾ ಮಹೋತ್ಸವದ ಅಂಗವಾಗಿ ವಿವಿಧ ಕ್ರೀಡಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ನಗರಸಭೆಯ ವಸ್ತುಪ್ರದರ್ಶನದ ಆವರಣದಲ್ಲಿ ಕುಸ್ತಿ, ವಾಲಿಬಾಲ್ ಮತ್ತು ಕಬಡ್ಡಿ ಪಂದ್ಯಾವಳಿಗಳು ನಡೆಯಲಿವೆ. ಇದರ ಜೊತೆಗೆ ರಂಗೋಲಿ ಸ್ಪರ್ಧೆಯನ್ನೂ ಆಯೋಜಿಸಲಾಗಿದೆ.
ಜಾತ್ರೆಯ ಮತ್ತೊಂದು ಆಕರ್ಷಣೆಯಾಗಿ ಹಳ್ಳಿಕಾರ್ ಮತ್ತು ಅಮೃತ್‌ಮಹಲ್ ತಳಿಯ ಜಾನುವಾರುಗಳ ಪ್ರದರ್ಶನ ನಡೆಯಲಿದೆ. ಶ್ವಾನ, ಬೆಕ್ಕು ಹಾಗೂ ಟಗರುಗಳ ಪ್ರದರ್ಶನಕ್ಕೂ ವ್ಯವಸ್ಥೆ ಮಾಡಲಾಗಿದೆ.
ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ದೇವಾಲಯಗಳನ್ನು ವಿವಿಧ ಬಣ್ಣಬಣ್ಣದ ಹೂವುಗಳಿಂದ ಅಲಂಕರಿಸಲಾಗಿದ್ದು, ಜಾತ್ರೆಗೆ ಸಂಬಂಧಿಸಿದ ಎಲ್ಲ ಸಿದ್ಧತೆಗಳನ್ನು ಜಿಲ್ಲಾಡಳಿತ ಪೂರ್ಣಗೊಳಿಸಿದೆ. ಅಕ್ಟೋಬರ್ 29ರಿಂದ ನವೆಂಬರ್ 11ರವರೆಗೆ ನಡೆಯಲಿರುವ ಹಾಸನಾಂಬ ಹಾಗೂ ಸಿದ್ದೇಶ್ವರಸ್ವಾಮಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಹಾಸನ ನಗರದಲ್ಲಿ ಈಗಾಗಲೇ ಹಬ್ಬದ ಸಂಭ್ರಮ ಮನೆಮಾಡಿದೆ. ಭಕ್ತರ ಸುಗಮ ದರ್ಶನ ಮತ್ತು ಸುರಕ್ಷತೆಗಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ದೇವಿಯ ದರ್ಶನಕ್ಕಾಗಿ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸುವ ಭಕ್ತರನ್ನು ಸ್ವಾಗತಿಸಲು ಹಾಸನ ನಗರ ಸಜ್ಜಾಗಿದೆ.





