ಹಾಸನ, ನ.16: ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು, ಕಾಡಾನೆ ದಾಳಿಗೆ ಮತ್ತೊಬ್ಬ ಕಾರ್ಮಿಕ ಬಲಿಯಾಗಿದ್ದಾರೆ. ಬೇಲೂರು ತಾಲ್ಲೂಕಿನ ನಾಗೇನಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಫೀಜುರ್ ರೆಹಮಾನ್ (57) ಎಂಬುವವರು ಕಾಡಾನೆ ದಾಳಿಗೆ ಸಿಲುಕಿ ಮೃತಪಟ್ಟಿದ್ದಾರೆ.
ಕೇವಲ ಮೂರು ದಿನಗಳ ಅಂತರದಲ್ಲಿ ಇಬ್ಬರು ಕಾಡಾನೆ ದಾಳಿಗೆ ಬಲಿಯಾಗಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಘಟನೆಯ ಬೆನ್ನಲ್ಲೇ ಬೇಲೂರು ತಾಲ್ಲೂಕಿನಲ್ಲಿ ಪ್ರತಿಭಟನೆ ತೀವ್ರಗೊಂಡಿದ್ದು, ಪರಿಸ್ಥಿತಿ ನಿಯಂತ್ರಿಸಲು ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.
ಮೂರು ದಿನದಲ್ಲಿ ಇಬ್ಬರ ಬಲಿ: ಕಾಡಾನೆಗಳ ಅಟ್ಟಹಾಸಕ್ಕೆ ಜನರು ಕಂಗಾಲು!
ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನಲ್ಲಿ ಕಾಡಾನೆಗಳ ಉಪಟಳ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕಾಡಾನೆಗಳ ದಾಳಿಯಿಂದಾಗಿ ಗ್ರಾಮೀಣ ಭಾಗದ ಜನರು ಹಾಗೂ ತೋಟದ ಕಾರ್ಮಿಕರು ಆತಂಕದಲ್ಲೇ ಜೀವನ ನಡೆಸುವಂತಾಗಿದೆ. ಇದೀಗ ನಾಗೇನಹಳ್ಳಿ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ಹಫೀಜುರ್ ರೆಹಮಾನ್ ಅವರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಇದಕ್ಕೂ ಮೊದಲು ಕಳೆದ ಶನಿವಾರ ಚೌಡನಹಳ್ಳಿ ಸಮೀಪ ಜಯಮ್ಮ ಎಂಬುವವರು ಕಾಡಾನೆ ದಾಳಿಗೆ ಬಲಿಯಾಗಿದ್ದರು. ಈ ಘಟನೆ ಮಾಸುವ ಮುನ್ನವೇ ಮತ್ತೊಂದು ಸಾವು ಸಂಭವಿಸಿರುವುದು ಬೇಲೂರು ತಾಲ್ಲೂಕಿನ ಜನರನ್ನು ಬೆಚ್ಚಿಬೀಳಿಸಿದೆ. ಮೂರು ದಿನಗಳ ಅಂತರದಲ್ಲಿ ಇಬ್ಬರು ಮೃತಪಟ್ಟಿರುವುದರಿಂದ ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರ ಆಕ್ರೋಶ ಭುಗಿಲೆದ್ದಿದೆ.
ಬೇಲೂರಿನಲ್ಲಿ ಮೂರು ದಿನ ಮದ್ಯ ನಿಷೇಧ!
ಎರಡು ಪ್ರತ್ಯೇಕ ಕಾಡಾನೆ ದಾಳಿ ಪ್ರಕರಣಗಳಿಂದ ತಾಲ್ಲೂಕಿನಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಮೃತರ ಕುಟುಂಬಸ್ಥರು, ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಡಳಿತ ಮಹತ್ವದ ನಿರ್ಧಾರ ಕೈಗೊಂಡಿದೆ.
ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ಅವರು ಬೇಲೂರು ತಾಲ್ಲೂಕಿನಾದ್ಯಂತ ಮೂರು ದಿನಗಳ ಕಾಲ ಮದ್ಯ ಮಾರಾಟ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ನವೆಂಬರ್ 16ರಿಂದ ನವೆಂಬರ್ 18ರ ಮಧ್ಯರಾತ್ರಿವರೆಗೆ ಎಲ್ಲಾ ರೀತಿಯ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸುವುದು ಈ ಆದೇಶದ ಉದ್ದೇಶವಾಗಿದೆ.
ಇದರ ಜೊತೆಗೆ ಬೇಲೂರು ಪಟ್ಟಣದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
ರಸ್ತೆಯಲ್ಲೇ ಶಾಮಿಯಾನ ಹಾಕಿ ಮೃತದೇಹವಿಟ್ಟು ಪ್ರತಿಭಟನೆ!
ಹಫೀಜುರ್ ರೆಹಮಾನ್ ಅವರ ಸಾವಿನ ಸುದ್ದಿ ತಿಳಿಯುತ್ತಿದ್ದಂತೆ ಕುಟುಂಬಸ್ಥರು, ಗ್ರಾಮಸ್ಥರು, ರೈತ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನೆ ಆರಂಭಿಸಿದ್ದಾರೆ. ಬೇಲೂರು ತಾಲ್ಲೂಕು ಆಸ್ಪತ್ರೆಯ ಎದುರಿನ ಮುಖ್ಯ ರಸ್ತೆಯಲ್ಲೇ ಶಾಮಿಯಾನ ಹಾಕಿ ಮೃತದೇಹವನ್ನು ಇರಿಸಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾಡಾನೆಗಳ ದಾಳಿಗೆ ಪದೇಪದೆ ಅಮಾಯಕರು ಬಲಿಯಾಗುತ್ತಿದ್ದರೂ ಅರಣ್ಯ ಇಲಾಖೆ ಸೂಕ್ತ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು. ಜನವಸತಿ ಪ್ರದೇಶಗಳಲ್ಲಿ ಸಂಚರಿಸುತ್ತಿರುವ ಪುಂಡಾನೆಗಳನ್ನು ತಕ್ಷಣವೇ ಸ್ಥಳಾಂತರಿಸಬೇಕು ಎಂದು ಆಗ್ರಹಿಸಿದ್ದಾರೆ.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿದ ಪ್ರತಿಭಟನಾಕಾರರು, ಕಾಡಾನೆ ಸಮಸ್ಯೆಗೆ ತಾತ್ಕಾಲಿಕ ಪರಿಹಾರವಲ್ಲ, ಶಾಶ್ವತ ಪರಿಹಾರ ಬೇಕು ಎಂದು ಒತ್ತಾಯಿಸಿದ್ದಾರೆ.
ಇನ್ನು ಜಿಲ್ಲಾ ಉಸ್ತುವಾರಿ ಸಚಿವರು ಖುದ್ದಾಗಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ ಜನರ ಸಮಸ್ಯೆ ಆಲಿಸಬೇಕು. ಕಾಡಾನೆಗಳ ಹಾವಳಿ ನಿಯಂತ್ರಣಕ್ಕೆ ಸ್ಪಷ್ಟ ಭರವಸೆ ನೀಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಸಚಿವರು ಸ್ಥಳಕ್ಕೆ ಬಂದು ಭರವಸೆ ನೀಡುವವರೆಗೂ ಮೃತದೇಹವನ್ನು ಸ್ಥಳದಿಂದ ತೆರವುಗೊಳಿಸುವುದಿಲ್ಲ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದ್ದಾರೆ.
