ಬೆಂಗಳೂರು, ನವೆಂಬರ್ 5: ರಾಜ್ಯದಲ್ಲಿ ಮಳೆಯ ಆರ್ಭಟ ಮತ್ತೆ ಮುಂದುವರಿದಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಹವಾಮಾನ ಬದಲಾವಣೆಗಳ ಪರಿಣಾಮ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯ ವಾತಾವರಣ ನಿರ್ಮಾಣವಾಗಿದೆ. ಅದರಲ್ಲೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದ್ದು, ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆಯ ಪ್ರಕಾರ, ನವೆಂಬರ್ 5ರಂದು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಸಾಧಾರಣ ಮಳೆಯಾಗಬಹುದು. ಹೀಗಾಗಿ ಮಳೆ ಮುಂದುವರಿಯುವ ಹಿನ್ನೆಲೆ ಸಾರ್ವಜನಿಕರು ಎಚ್ಚರಿಕೆ ವಹಿಸುವುದು ಅಗತ್ಯವಾಗಿದೆ.
ಮೈಸೂರು, ಕೊಡಗು, ಚಾಮರಾಜನಗರಕ್ಕೆ ಭಾರೀ ಮಳೆ ಮುನ್ಸೂಚನೆ
ದಕ್ಷಿಣ ಒಳನಾಡಿನ ಮೈಸೂರು, ಕೊಡಗು ಮತ್ತು ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ಈ ಭಾಗಗಳಲ್ಲಿ ಉತ್ತಮ ಮಳೆಯಾಗಿದ್ದು, ಮುಂದಿನ ದಿನಗಳಲ್ಲಿಯೂ ಮಳೆ ಮುಂದುವರಿಯುವ ಮುನ್ಸೂಚನೆ ಇದೆ.
ಇನ್ನು ಮಂಡ್ಯ, ರಾಮನಗರ, ಹಾಸನ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೋಲಾರ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ ವೇಗದ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದ ಜೊತೆಗೆ ಆಗಾಗ್ಗೆ ಗುಡುಗು, ಮಿಂಚು ಸಹಿತ ಮಳೆಯಾಗಬಹುದು. ವಾಹನ ಸವಾರರು ಮಳೆಯ ಸಂದರ್ಭದಲ್ಲಿ ಎಚ್ಚರಿಕೆಯಿಂದ ಸಂಚರಿಸಬೇಕಿದೆ.
ಕರಾವಳಿ ಜಿಲ್ಲೆಗಳಲ್ಲೂ ವರ್ಷಧಾರೆ ಸಾಧ್ಯತೆ
ಕರ್ನಾಟಕದ ಕರಾವಳಿ ಭಾಗದಲ್ಲಿಯೂ ಮಳೆಯ ವಾತಾವರಣ ಮುಂದುವರಿಯುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಳೆಯೂ ಸಂಭವಿಸಬಹುದು ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಎಲ್ಲೆಲ್ಲಿ ಮಳೆ?
ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ತುಸು ಕಡಿಮೆ ಇರಲಿದೆ. ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ. ಗದಗ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಬಹುದು.
ಆದರೆ ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಬಹುತೇಕ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ. ಅದೇ ರೀತಿ ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಮುಖ್ಯವಾಗಿ ಒಣಹವೆ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.
ನವೆಂಬರ್ 6ರವರೆಗೂ ಗಾಳಿ, ಗುಡುಗು ಎಚ್ಚರಿಕೆ
ದಕ್ಷಿಣ ಒಳನಾಡಿನ ಕರ್ನಾಟಕದಲ್ಲಿ ನವೆಂಬರ್ 6ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆಯೂ ಇದೆ.
ಮೈಸೂರು, ಸುಳ್ಯದಲ್ಲಿ 7 ಸೆಂ.ಮೀ ಮಳೆ ದಾಖಲು
ಇನ್ನು ಬುಧವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ 7 ಸೆಂ.ಮೀ ಮಳೆಯಾಗಿದ್ದರೆ, ಮೈಸೂರು ಜಿಲ್ಲೆಯ ಸರಗೂರು ಮತ್ತು ಮಿರ್ಲೆಯಲ್ಲಿ ತಲಾ 7 ಸೆಂ.ಮೀ ಮಳೆ ದಾಖಲಾಗಿದೆ.
ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯಲ್ಲಿ 6 ಸೆಂ.ಮೀ ಮಳೆಯಾಗಿದೆ. ಹಾಸನ ಜಿಲ್ಲೆಯ ಸಕಲೇಶಪುರ ಹಾಗೂ ಮೈಸೂರು ಪಿಟಿಒ ಪ್ರದೇಶದಲ್ಲಿ ತಲಾ 4 ಸೆಂ.ಮೀ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಶಕ್ತಿನಗರ ಮತ್ತು ಉಡುಪಿ ಜಿಲ್ಲೆಯ ಸಿದ್ದಾಪುರದಲ್ಲಿ ತಲಾ 3 ಸೆಂ.ಮೀ ಮಳೆಯಾಗಿದೆ.





