ಭೀಕರ ರಸ್ತೆ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೆ ಸಾವು

Untitled design 2025 07 28t233914.721

ಬಳ್ಳಾರಿ, ಜುಲೈ 28: ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಪ್ರಾಣ ಕಳೆದುಕೊಂಡಿರುವ ಘಟನೆ ಬಳ್ಳಾರಿಯ ದೇವಿನಗರ ಕ್ಯಾಂಪ್ ಬಳಿ ನಡೆದಿದೆ. ಬಳ್ಳಾರಿ-ಸಿಂಧನೂರು ಮುಖ್ಯ ರಸ್ತೆಯಲ್ಲಿ ಸಿಂಧನೂರು ಕಡೆಗೆ ತೆರಳುತ್ತಿದ್ದ ಕಾರು ಮತ್ತು ಬಳ್ಳಾರಿ ಕಡೆಯಿಂದ ಬರುತ್ತಿದ್ದ ಟಿಪ್ಪರ್ ಲಾರಿಯ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಈ ಘಟನೆಯಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಐವರ ಪೈಕಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಉಳಿದ ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣವಾಗಿ ಛಿದ್ರಗೊಂಡು ನಜ್ಜುಗುಜ್ಜಾಗಿದೆ. ಈ ದುರ್ಘಟನೆಯಲ್ಲಿ ಕಾರಿನ ಚಾಲಕ ಜಿ. ಬಸವರಾಜ್ ಮತ್ತು ಶೇಖರಗೌಡ ಎಂಬವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕಾರಿನ ಹಿಂಭಾಗದ ಸೀಟಿನಲ್ಲಿ ಕುಳಿತಿದ್ದ ದ್ಯಾವಪ್ಪ, ಜಲಾಲಮ್ಮ ಮತ್ತು ಶಂಬುಲಿಂಗ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಬಳ್ಳಾರಿಯ ಬಿಮ್ಸ್ (BIMS) ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳ ಸ್ಥಿತಿ ಚಿಂತಾಜನಕವಾಗಿದ್ದು, ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಘಟನೆ ಜುಲೈ 28ರಂದು ಸಂಜೆ ಸಂಭವಿಸಿದ್ದು, ಸ್ಥಳೀಯರು ಮತ್ತು ರಸ್ತೆಯಲ್ಲಿ ಸಂಚರಿಸುತ್ತಿದ್ದವರು ಕೂಡಲೇ ಗಾಯಾಳುಗಳ ರಕ್ಷಣೆಗೆ ಧಾವಿಸಿದ್ದಾರೆ. ಸ್ಥಳೀಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಟಿಪ್ಪರ್ ಲಾರಿಯ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Exit mobile version