ಕಬ್ಬಿಗೆ ಬೆಂಬಲ ಬೆಲೆ ನಿಗದಿ ಮಾಡಿ; ಹುಬ್ಬಳ್ಳಿಯಲ್ಲಿ ರೈತರ ಬೃಹತ್ ಪ್ರತಿಭಟನೆ

Your paragraph text (54)

ಡಾ. ಎಂ.ಎಸ್. ಸ್ವಾಮಿನಾಥನ್ ಆಯೋಗದ ಶಿಫಾರಸುಗಳನ್ನು ಜಾರಿಗೊಳಿಸಬೇಕು, ರೈತರು ಬೆಳೆಯುವ ಬೆಳೆಗಳಿಗೆ ವೈಜ್ಞಾನಿಕ ಹಾಗೂ ಯೋಗ್ಯ ಬೆಲೆ ನಿಗದಿಪಡಿಸಬೇಕು ಮತ್ತು ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ಹುಬ್ಬಳ್ಳಿಯಲ್ಲಿ ಮಂಗಳವಾರ ಬೃಹತ್ ಪ್ರತಿಭಟನೆ ನಡೆಯಿತು.

ನಗರದ ಕಿತ್ತೂರು ರಾಣಿ ಚೆನ್ನಮ್ಮ ವೃತ್ತದಲ್ಲಿ ಸಾವಿರಾರು ರೈತರು ಜಮಾಯಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿ ನಗರದಲ್ಲಿ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿತ್ತು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರ ಕಚೇರಿ ಹಾಗೂ ನಿವಾಸದ ಸುತ್ತಮುತ್ತ ಬ್ಯಾರಿಕೇಡ್ ಅಳವಡಿಸಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗಿತ್ತು. ಪ್ರತಿಭಟನಾ ಸ್ಥಳ ಮತ್ತು ನೆಹರು ಮೈದಾನ ಸುತ್ತಮುತ್ತಲೂ ಭದ್ರತೆ ಕೈಗೊಳ್ಳಲಾಗಿತ್ತು.

ಪ್ರತಿಭಟನಾಕಾರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಹೋರಾಟ ತೀವ್ರಗೊಳಿಸುವ ಎಚ್ಚರಿಕೆ ನೀಡಿದರು. ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಅಹೋರಾತ್ರಿ ಪ್ರತಿಭಟನೆ ನಡೆಸುವುದಾಗಿಯೂ ರೈತ ಮುಖಂಡರು ತಿಳಿಸಿದ್ದಾರೆ.

ಪ್ರತಿಭಟನೆಯ ಪ್ರಮುಖ ಬೇಡಿಕೆಗಳಲ್ಲಿ ಪ್ರಸಕ್ತ ಹಂಗಾಮಿನಲ್ಲಿ ಕಬ್ಬಿಗೆ ಪ್ರತಿ ಟನ್‌ಗೆ ₹5,500 ದರ ನಿಗದಿ ಮಾಡುವುದು ಪ್ರಮುಖವಾಗಿದೆ. ಇದರ ಜೊತೆಗೆ ಸ್ವಾಮಿನಾಥನ್ ಆಯೋಗದ ಶಿಫಾರಸುಗಳ ಜಾರಿ, ಎಲ್ಲಾ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ, ಸಕ್ಕರೆಯ ಕನಿಷ್ಠ ಮಾರಾಟ ಬೆಲೆ ಹೆಚ್ಚಳ ಹಾಗೂ ಎಥೆನಾಲ್ ಖರೀದಿ ಸೇರಿದಂತೆ ಹಲವು ಬೇಡಿಕೆಗಳನ್ನು ರೈತ ಸಂಘ ಮುಂದಿಟ್ಟಿದೆ.

ರೈತ ಮುಖಂಡ ಚುನ್ನಪ್ಪ ಪೂಜೇರಿ ಮಾತನಾಡಿ, ಕಬ್ಬು ಬೆಳೆಯುವ ವೆಚ್ಚ ಹಲವು ವರ್ಷಗಳಲ್ಲಿ ಗಣನೀಯವಾಗಿ ಏರಿಕೆಯಾಗಿದೆ. ಹೀಗಾಗಿ ರೈತರ ಉತ್ಪಾದನಾ ವೆಚ್ಚವನ್ನು ಪರಿಗಣಿಸಿ ಕಬ್ಬಿಗೆ ನ್ಯಾಯಯುತ ದರ ನಿಗದಿಪಡಿಸಬೇಕು ಎಂದು ಆಗ್ರಹಿಸಿದರು. ಸಕ್ಕರೆಯ ಕನಿಷ್ಠ ಮಾರಾಟ ಬೆಲೆಯನ್ನು ₹60ಕ್ಕೆ ಹೆಚ್ಚಿಸುವುದರಿಂದ ಕಬ್ಬು ಬೆಳೆಗಾರರಿಗೆ ₹5,500 ದರ ನೀಡಲು ಸಾಧ್ಯವಾಗಲಿದೆ ಎಂಬುದು ಸಂಘಟನೆಯ ವಾದವಾಗಿದೆ.

ಇದರ ಜೊತೆಗೆ ಕರ್ನಾಟಕದ ಮಹದಾಯಿ ನೀರಾವರಿ ಯೋಜನೆಗೆ ಅಗತ್ಯ ಅನುಮತಿಗಳನ್ನು ತ್ವರಿತವಾಗಿ ಪಡೆದು ಕಾಮಗಾರಿ ಆರಂಭಿಸಬೇಕು ಎಂಬ ಬೇಡಿಕೆಯನ್ನೂ ರೈತ ಮುಖಂಡರು ಮುಂದಿಟ್ಟಿದ್ದಾರೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ಶಶಿಕಾಂತ ಗೂರೂಜಿ ಮಾತನಾಡಿ, ರೈತರ ಬೇಡಿಕೆಗಳನ್ನು ನಿರ್ಲಕ್ಷಿಸದೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಎಂದು ಆಗ್ರಹಿಸಿದರು. ಎಫ್‌ಆರ್‌ಪಿ ದರವನ್ನು ವೈಜ್ಞಾನಿಕವಾಗಿ ನಿಗದಿಪಡಿಸಬೇಕು, ರಾಜ್ಯದ ಎಥೆನಾಲ್ ಉತ್ಪಾದನೆಯನ್ನು ಸರ್ಕಾರವೇ ಸಂಪೂರ್ಣವಾಗಿ ಖರೀದಿಸಬೇಕು ಮತ್ತು ಎಲ್ಲ ಬೆಳೆಗಳಿಗೂ ಬೆಂಬಲ ಬೆಲೆ ಘೋಷಿಸಬೇಕು ಎಂದು ಒತ್ತಾಯಿಸಿದರು.

Exit mobile version