ಅಂತರ್ಜಾತಿ ವಿವಾಹಕ್ಕೆ ಪೋಷಕರ ವಿರೋಧ: ಅಂಬೇಡ್ಕರ್ ಪ್ರತಿಮೆ ಎದುರು ವಿವಾಹವಾದ ಜೋಡಿ

Untitled design 2026 05 16T131720.203

ಹಾಸನ: ಅಂತರ್ಜಾತಿ ವಿವಾಹಕ್ಕೆ ಪೋಷಕರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಪ್ರೇಮಿಗಳಿಬ್ಬರು ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಯ ಸಾಕ್ಷಿಯಾಗಿ ವಿವಾಹವಾಗಿರುವ ಅಪರೂಪದ ಘಟನೆ ನಡೆದಿದೆ.

ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದ 22 ವರ್ಷದ ಮನೋಜ್ ಹಾಗೂ ಮೂಕಲಿ ಗ್ರಾಮದ 19 ವರ್ಷದ ಪ್ರೀತಿ ಕಳೆದ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಇಬ್ಬರೂ ಬೇರೆ ಬೇರೆ ಜಾತಿಗೆ ಸೇರಿದವರಾಗಿದ್ದು, ಅವರ ಪ್ರೀತಿಗೆ ಎರಡೂ ಕುಟುಂಬಗಳ ಪೋಷಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

ಪೋಷಕರನ್ನು ಒಪ್ಪಿಸಲು ಹಲವು ಪ್ರಯತ್ನಗಳನ್ನು ಮಾಡಿದರೂ ಫಲಕಾರಿಯಾಗದ ಕಾರಣ, ಯುವ ಜೋಡಿ ಧೈರ್ಯದಿಂದ ಈ ನಿರ್ಧಾರ ಕೈಗೊಂಡಿದ್ದಾರೆ. ಸರಳವಾಗಿ ಜಿಲ್ಲಾಧಿಕಾರಿ ಕಚೇರಿ ಆವರಣಕ್ಕೆ ಆಗಮಿಸಿದ ಮನೋಜ್ ಮತ್ತು ಪ್ರೀತಿ, ಅಂಬೇಡ್ಕರ್ ಪ್ರತಿಮೆಯ ಸಾಕ್ಷಿಯಾಗಿ ಹಾರ ಬದಲಾಯಿಸಿಕೊಂಡು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ವಿವಾಹದ ಬಳಿಕ ಈ ಜೋಡಿ ತಮ್ಮ ಜೀವಕ್ಕೆ ಅಪಾಯವಿದೆ ಎಂಬ ಆತಂಕವನ್ನು ವ್ಯಕ್ತಪಡಿಸಿದ್ದು, ಕುಟುಂಬದವರಿಂದ ಬೆದರಿಕೆ ಇರುವ ಸಾಧ್ಯತೆ ಇದೆ ಎಂದು ಹೇಳಿಕೊಂಡಿದ್ದಾರೆ. ಈ ಹಿನ್ನೆಲೆ ನವ ದಂಪತಿ ಸ್ಥಳೀಯ ಪೊಲೀಸ್ ಠಾಣೆಗೆ ತೆರಳಿ ಸೂಕ್ತ ಭದ್ರತೆ ನೀಡುವಂತೆ ಮನವಿ ಮಾಡಿದ್ದಾರೆ.

ಪೊಲೀಸರು ಪ್ರಕರಣವನ್ನು ಗಮನದಲ್ಲಿಟ್ಟುಕೊಂಡು ಅಗತ್ಯ ಕ್ರಮ ಕೈಗೊಳ್ಳುವ ಭರವಸೆ ನೀಡಿದ್ದಾರೆ ಎನ್ನಲಾಗಿದೆ. ಇನ್ನು ದಲಿತ ಸಂಘಟನೆಗಳ ಕೆಲವು ಮುಖಂಡರು ಸ್ಥಳಕ್ಕೆ ಆಗಮಿಸಿ ಜೋಡಿಗೆ ಬೆಂಬಲ ಸೂಚಿಸಿದ್ದಾರೆ. ಅವರು ಯುವ ಜೋಡಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ರಕ್ಷಣೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಈ ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅನೇಕರು ಯುವ ಜೋಡಿಯ ಧೈರ್ಯವನ್ನು ಪ್ರಶಂಸಿಸುತ್ತಿದ್ದಾರೆ. “ಪ್ರೀತಿಗೆ ಜಾತಿ ಅಡ್ಡಿಯಾಗಬಾರದು” ಎಂಬ ಅಭಿಪ್ರಾಯಗಳು ಹೆಚ್ಚಾಗಿ ವ್ಯಕ್ತವಾಗುತ್ತಿವೆ.

Exit mobile version