ಮೈಸೂರು, ಜೂ.18: ಮೈಸೂರು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಒಂದೇ ದಿನ 11 ರೋಗಿಗಳು ಮೃತಪಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ರೋಗಿಗಳು ಮೃತಪಟ್ಟ ಘಟನೆ ಕುರಿತು ಆಸ್ಪತ್ರೆಯ ಅಧಿಕಾರಿಗಳು ಹಾಗೂ ವೈದ್ಯರಿಂದ ಸಂಪೂರ್ಣ ಮಾಹಿತಿ ಪಡೆದ ಸಚಿವರು, ಪ್ರಕರಣದ ಕುರಿತು ಸಮಗ್ರ ತನಿಖೆ ನಡೆಸುವಂತೆ ಸೂಚನೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶರಣ ಪ್ರಕಾಶ್ ಪಾಟೀಲ್, ಜಯದೇವ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಬಗ್ಗೆ ವಿವರವಾದ ವರದಿ ಕೇಳಿದ್ದೇನೆ ಎಂದು ತಿಳಿಸಿದರು. ಆಸ್ಪತ್ರೆಯ ಹಲವು ವರ್ಷಗಳ ಅಂಕಿ-ಅಂಶಗಳನ್ನು ಪರಿಶೀಲಿಸಿದಾಗ ಸಾವಿನ ಪ್ರಮಾಣ ಶೇ.4 ರಿಂದ 5 ರಷ್ಟಿದೆ. ಹೃದ್ರೋಗ ಚಿಕಿತ್ಸೆ ನೀಡುವ ಪ್ರಮುಖ ಸಂಸ್ಥೆಯಾಗಿರುವ ಜಯದೇವ ಆಸ್ಪತ್ರೆ ರಾಜ್ಯಕ್ಕೆ ಮಾತ್ರವಲ್ಲದೆ ದೇಶಕ್ಕೂ ಮಾದರಿಯಾಗಿದೆ ಎಂದು ಹೇಳಿದರು.
ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಚಿಕಿತ್ಸೆ ನೀಡುತ್ತಿರುವ ಆಸ್ಪತ್ರೆ ಇದಾಗಿದ್ದು, ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಉಚಿತ ಆರೋಗ್ಯ ಚಿಕಿತ್ಸಾ ಸೌಲಭ್ಯ ಒದಗಿಸಲಾಗುತ್ತಿದೆ ಎಂದು ಸಚಿವರು ವಿವರಿಸಿದರು. ಆಸ್ಪತ್ರೆಯ ವಿರುದ್ಧ ತಪ್ಪು ಮಾಹಿತಿ ಹರಡುವುದರಿಂದ ಖಾಸಗಿ ಆಸ್ಪತ್ರೆಗಳಿಗೆ ಮಾತ್ರ ಅನುಕೂಲವಾಗಲಿದೆ ಎಂದು ಅವರು ಎಚ್ಚರಿಸಿದರು.
11 ರೋಗಿಗಳ ಸಾವಿನ ಪ್ರಕರಣದಲ್ಲಿ ಯಾವುದೇ ರೀತಿಯ ಲೋಪ ದೋಷಗಳು ಕಂಡುಬಂದರೆ, ವೈದ್ಯಕೀಯ ತಂಡದಿಂದ ಸಂಪೂರ್ಣ ಮಾಹಿತಿ ಪಡೆದು ಸಾರ್ವಜನಿಕರಿಗೆ ತಿಳಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ. ವೈದ್ಯರು ಪ್ರಕರಣದ ಬಗ್ಗೆ ಎಲ್ಲಾ ರೀತಿಯ ಪರಿಶೀಲನೆ ನಡೆಸಿ ವರದಿ ನೀಡುವಂತೆ ಸೂಚನೆ ನೀಡಲಾಗಿದೆ.
ಇದೇ ವೇಳೆ ಕಲಬುರಗಿ ಮತ್ತು ಮೈಸೂರು ಜಯದೇವ ಆಸ್ಪತ್ರೆಗಳ ಆಡಳಿತ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಲು ಸರ್ಕಾರ ಮುಂದಾಗಿದೆ ಎಂದು ಸಚಿವರು ತಿಳಿಸಿದರು. ಸಣ್ಣಪುಟ್ಟ ಆಡಳಿತಾತ್ಮಕ ನಿರ್ಧಾರಗಳಿಗೂ ಬೆಂಗಳೂರಿನ ಮೇಲೆ ಅವಲಂಬಿತವಾಗಿರುವ ವ್ಯವಸ್ಥೆಯನ್ನು ಬದಲಾಯಿಸಿ, ಸ್ಥಳೀಯ ಮಟ್ಟದಲ್ಲಿಯೇ ಕೆಲವು ತೀರ್ಮಾನಗಳನ್ನು ಕೈಗೊಳ್ಳಲು ಅಧಿಕಾರ ನೀಡಲಾಗುವುದು ಎಂದರು.
ಈ ಕ್ರಮದಿಂದ ಆಸ್ಪತ್ರೆಗಳ ಆಡಳಿತ ಕಾರ್ಯಗಳು ಹಾಗೂ ಚಿಕಿತ್ಸಾ ಸೇವೆಗಳು ಇನ್ನಷ್ಟು ವೇಗವಾಗಿ ನಡೆಯಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಜಯದೇವ ಆಸ್ಪತ್ರೆಗಳಲ್ಲಿ ಸಿಬ್ಬಂದಿ ಕೊರತೆಯನ್ನು ಮುಂದಿನ ಎರಡು ತಿಂಗಳೊಳಗೆ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.





