ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭ

ಭಾವುಕರಾದ (21)

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ರದ್ದುಗೊಳಿಸುವಂತೆ ಒತ್ತಾಯಿಸಿ ಮಿತ್ರ ಪಕ್ಷಗಳಾದ ಜೆಡಿಎಸ್ ಹಾಗೂ ಬಿಜೆಪಿ ಜಂಟಿಯಾಗಿ ಹಮ್ಮಿಕೊಂಡಿರುವ ಬೃಹತ್ ಪಾದಯಾತ್ರೆ ಆರಂಭಗೊಂಡಿದೆ. ಬಿಡದಿಯ ಬೈರಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ವರೆಗೆ ಸುಮಾರು 38 ಕಿ.ಮೀ. ದೂರದ ಈ ಪಾದಯಾತ್ರೆ ಮೂರು ದಿನಗಳ ಕಾಲ ನಡೆಯಲಿದ್ದು, ಆಗಸ್ಟ್ 11ರಂದು ಬೆಂಗಳೂರಿನಲ್ಲಿ ಸಮಾರೋಪಗೊಳ್ಳಲಿದೆ.

ಟೌನ್‌ಶಿಪ್ ಯೋಜನೆ ವಿರೋಧಿಸಿ ರೈತರು ಧರಣಿ ನಡೆಸುತ್ತಿರುವ ಬೈರಮಂಗಲ ವೃತ್ತದಿಂದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಪಾದಯಾತ್ರೆಗೆ ಚಾಲನೆ ನೀಡಲಾಯಿತು. ಪಾದಯಾತ್ರೆ ಆರಂಭಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಆಶೀರ್ವಾದ ಪಡೆದರು.

ಪಾದಯಾತ್ರೆಯ ಮೊದಲ ದಿನ ಬೈರಮಂಗಲ ವೃತ್ತದಿಂದ ಹೊರಟು ಸಂಜೆ ಬಿಡದಿಯ ಸಜ್ಜನ್‌ರಾವ್ ವೃತ್ತ ತಲುಪಲಿದೆ. ಬಳಿಕ ಹೆದ್ದಾರಿ ಮೂಲಕ ನೈಸ್ ರೋಡ್ ಜಂಕ್ಷನ್ ಕಡೆಗೆ ಸಾಗಲಿದೆ. ಆಗಸ್ಟ್ 10ರಂದು ಜೆಕೆ ಟೈರ್ ಗೇಟ್ ಹಾಗೂ ನೈಸ್ ರೋಡ್ ಜಂಕ್ಷನ್ ಮೂಲಕ ಪಾದಯಾತ್ರೆ ಮುಂದುವರಿಯಲಿದ್ದು, ಆಗಸ್ಟ್ 11ರಂದು ಬೆಂಗಳೂರು ನಗರದ ಹೊರವಲಯ ತಲುಪಲಿದೆ. ನಂತರ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ.

ಸಮಾರೋಪ ಸಮಾವೇಶದಲ್ಲಿ ಜೆಡಿಎಸ್ ಹಾಗೂ ಬಿಜೆಪಿ ನಾಯಕರು, ಬೆಂಗಳೂರು ದಕ್ಷಿಣ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮುಖಂಡರು ಮತ್ತು ಕಾರ್ಯಕರ್ತರು ಸೇರಿದಂತೆ ಸುಮಾರು 25 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು, ಮಹಿಳಾ ಮುಖಂಡರು, ವಿದ್ಯಾರ್ಥಿಗಳು ಸೇರಿದಂತೆ ವಿವಿಧ ಸಂಘಟನೆಗಳ ಪ್ರತಿನಿಧಿಗಳು ಪಾದಯಾತ್ರೆಗೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್. ಅಶೋಕ್ ಸೇರಿದಂತೆ ಎರಡೂ ಪಕ್ಷಗಳ ನಾಯಕರು ಶನಿವಾರ ಸಭೆ ನಡೆಸಿ ಜಂಟಿಯಾಗಿ ಪಾದಯಾತ್ರೆ ಕೈಗೊಳ್ಳುವ ನಿರ್ಧಾರ ಪ್ರಕಟಿಸಿದ್ದರು. ಬಿಡದಿ ಟೌನ್‌ಶಿಪ್ ಯೋಜನೆಯನ್ನು ಆರ್. ಅಶೋಕ್ ಅವರು ‘ರಿಯಲ್ ಎಸ್ಟೇಟ್ ಉದ್ಯಮ’ ಎಂದು ಟೀಕಿಸಿದ್ದು, ವಿಧಾನಸಭೆಯ ಮಳೆಗಾಲದ ಅಧಿವೇಶನದಲ್ಲೂ ಈ ವಿಚಾರವನ್ನು ಪ್ರಸ್ತಾಪಿಸುವುದಾಗಿ ಹೇಳಿದ್ದಾರೆ.

ಪಾದಯಾತ್ರೆಗೂ ಮುನ್ನ ನಿಖಿಲ್ ಕುಮಾರಸ್ವಾಮಿ ಅವರು ರಾಮನಗರ, ಚನ್ನಪಟ್ಟಣ ಸೇರಿದಂತೆ ವಿವಿಧೆಡೆ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ನಡೆಸಿ, ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಮನವಿ ಮಾಡಿದ್ದರು. ರೈತರಿಗೆ ಆತ್ಮಸ್ಥೈರ್ಯ ತುಂಬುವುದರ ಜೊತೆಗೆ ಸರ್ಕಾರದ ಮೇಲೆ ಒತ್ತಡ ಹೇರುವುದು ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ.

9,600 ಎಕರೆ ಪ್ರದೇಶದಲ್ಲಿ ಟೌನ್‌ಶಿಪ್

ಬೆಂಗಳೂರಿನಿಂದ ಸುಮಾರು 40 ಕಿ.ಮೀ. ದೂರದಲ್ಲಿರುವ ಬಿಡದಿ ಸಮೀಪ 9,600 ಎಕರೆ ಪ್ರದೇಶದಲ್ಲಿ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ (GBIT) ನಿರ್ಮಿಸುವ ಯೋಜನೆಯನ್ನು ಸರ್ಕಾರ ರೂಪಿಸಿದೆ. ಬೆಂಗಳೂರಿನ ಜನದಟ್ಟಣೆ ಕಡಿಮೆ ಮಾಡುವುದು ಹಾಗೂ ಭವಿಷ್ಯದ ನಗರಾಭಿವೃದ್ಧಿಗೆ ಪೂರಕ ಮೂಲಸೌಕರ್ಯ ಕಲ್ಪಿಸುವುದು ಯೋಜನೆಯ ಪ್ರಮುಖ ಉದ್ದೇಶಗಳಾಗಿವೆ.

ಆದರೆ, ಯೋಜನೆಗೆ ಒಳಪಡುವ ಎರಡು ಹೋಬಳಿಗಳ 9 ಗ್ರಾಮಗಳ ರೈತರಿಂದ ತೀವ್ರ ವಿರೋಧ ವ್ಯಕ್ತವಾಗಿದೆ. ತಮ್ಮ ಕೃಷಿ ಭೂಮಿ ಕಳೆದುಕೊಳ್ಳುವ ಆತಂಕ ರೈತರಲ್ಲಿದ್ದು, ಭೂಸ್ವಾಧೀನಕ್ಕೆ ವಿರೋಧವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇತ್ತೀಚೆಗೆ ಮಂಡಲಹಳ್ಳಿ ಗ್ರಾಮದಲ್ಲಿ ಭೂ ಸರ್ವೇ ನಡೆಸಲು ತೆರಳಿದ್ದ ಅಧಿಕಾರಿಗಳ ತಂಡದ ಮೇಲೂ ಆಕ್ರೋಶ ವ್ಯಕ್ತವಾಗಿತ್ತು.

ರೈತರ ವಿರೋಧದ ಹಿನ್ನೆಲೆಯಲ್ಲಿ ಸರ್ಕಾರವು ಇಚ್ಛೆಯುಳ್ಳ ರೈತರಿಂದ ಮಾತ್ರ ಭೂಮಿ ಪಡೆಯುವ ಕುರಿತು ಸ್ಪಷ್ಟನೆ ನೀಡಿದೆ. ಜೊತೆಗೆ ಭೂಸ್ವಾಧೀನ ಪ್ರಕ್ರಿಯೆ ಮುಂದುವರಿಸುವ ಮುನ್ನ ಸ್ಥಳೀಯ ಪರಿಸ್ಥಿತಿಯನ್ನು ಅಧ್ಯಯನ ಮಾಡಲು ಸಮಿತಿ ರಚಿಸುವುದಾಗಿ ತಿಳಿಸಿದೆ.

ಇದೀಗ ಜೆಡಿಎಸ್–ಬಿಜೆಪಿ ಪಾದಯಾತ್ರೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಬಿಡದಿ ಟೌನ್‌ಶಿಪ್ ಯೋಜನೆ ಮತ್ತೊಮ್ಮೆ ರಾಜ್ಯ ರಾಜಕೀಯದ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ರೈತರ ಪರ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ಎರಡೂ ಪಕ್ಷಗಳು ಘೋಷಿಸಿಟ್ಟಿದೆ.

Exit mobile version