ಬಿಡದಿ ಟೌನ್‌ಶಿಪ್ ಯೋಜನೆಯನ್ನು ವಿರೋಧಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆ ಬೆಂಗಳೂರು ಪ್ರವೇಶಕ್ಕೂ ಮುನ್ನವೇ ಪೊಲೀಸರ ತಡೆಗೆ ಒಳಗಾಗಿದ್ದು, ಈ ವೇಳೆ ಭಾರಿ ಹೈಡ್ರಾಮಾ ನಡೆದಿದೆ. ಪಾದಯಾತ್ರೆ ಸಾಗುತ್ತಿದ್ದ ವೇಳೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಅಳವಡಿಸಿ ಪ್ರತಿಭಟನಾಕಾರರನ್ನು ತಡೆಯಲು ಮುಂದಾಗಿದ್ದು, ಜೆಡಿಎಸ್ ಕಾರ್ಯಕರ್ತರು ಹಾಗೂ ಪೊಲೀಸರ ನಡುವೆ ತೀವ್ರ ವಾಗ್ವಾದ ಉಂಟಾಗಿದೆ.
ಬಿಡದಿ ಟೌನ್‌ಶಿಪ್ ಯೋಜನೆ ವಿರೋಧಿಸಿ ಜೆಡಿಎಸ್ ಹಮ್ಮಿಕೊಂಡಿರುವ ಪಾದಯಾತ್ರೆ ಹಲವು ಗ್ರಾಮಗಳು ಹಾಗೂ ಪ್ರಮುಖ ಪ್ರದೇಶಗಳ ಮೂಲಕ ಬೆಂಗಳೂರು ಕಡೆಗೆ ಸಾಗುತ್ತಿತ್ತು. ಪಾದಯಾತ್ರೆ ಹೆಜ್ಜಾಲ ತಲುಪುತ್ತಿದ್ದಂತೆ ಪೊಲೀಸರು ಬ್ಯಾರಿಕೇಡ್‌ಗಳನ್ನು ಹಾಕಿ ಪ್ರತಿಭಟನಾಕಾರರನ್ನು ತಡೆಯಲು ಪ್ರಯತ್ನಿಸಿದರು. ಆದರೆ ಪ್ರತಿಭಟನಾಕಾರರು ಬ್ಯಾರಿಕೇಡ್‌ಗಳನ್ನು ತಳ್ಳಿ ಮುಂದೆ ಸಾಗಿದ್ದಾರೆ ಎನ್ನಲಾಗಿದೆ. ಇದರಿಂದ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸಿತು.
ಪಾದಯಾತ್ರೆ ಬೆಂಗಳೂರು ಪ್ರವೇಶಿಸುವುದನ್ನು ತಡೆಯುವ ಉದ್ದೇಶದಿಂದ ಪೊಲೀಸರು ಕ್ರೈಸ್ಟ್ ಕಾಲೇಜು ಬಳಿ ರಸ್ತೆಗೆ ಅಡ್ಡಲಾಗಿ ಬಸ್‌ಗಳನ್ನು ನಿಲ್ಲಿಸಿ ಪ್ರತಿಭಟನಾಕಾರರ ಸಂಚಾರಕ್ಕೆ ತಡೆ ಒಡ್ಡಿದರು. ಇದರಿಂದ ಆಕ್ರೋಶಗೊಂಡ ಜೆಡಿಎಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಪ್ರತಿಭಟನೆ ನಡೆಸಿದರು. ಪೊಲೀಸರು ಪ್ರತಿಭಟನಾಕಾರರನ್ನು ಮನವೊಲಿಸಿ ಸ್ಥಳದಿಂದ ತೆರಳುವಂತೆ ಸೂಚಿಸಿದರೂ, ಕಾರ್ಯಕರ್ತರು ಪಾದಯಾತ್ರೆಯನ್ನು ಮುಂದುವರಿಸಲು ಅವಕಾಶ ನೀಡಬೇಕು ಎಂದು ಪಟ್ಟು ಹಿಡಿದರು.
ಈ ವೇಳೆ ಜೆಡಿಎಸ್ ಕಾರ್ಯಕರ್ತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ತೀವ್ರಗೊಂಡಿತು. ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಮುಂದಾದಾಗ ತಳ್ಳಾಟ, ನೂಕಾಟ ನಡೆದಿದ್ದು, ಕೆಲಕಾಲ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ನಿರ್ಮಾಣವಾಯಿತು. ಪ್ರತಿಭಟನಾಕಾರರನ್ನು ನಿಯಂತ್ರಿಸುವ ಸಂದರ್ಭದಲ್ಲಿ ಪೊಲೀಸ್ ಅಧಿಕಾರಿಗಳಿಗೂ ಗಾಯಗಳಾಗಿವೆ.
ತಳ್ಳಾಟ-ನೂಕಾಟದ ವೇಳೆ ಎಸ್‌ಪಿ ಶ್ರೀನಿವಾಸ್‌ಗೌಡ ಅವರ ಎಡಗೈ ಬೆರಳಿಗೆ ಗಾಯವಾಗಿದೆ. ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅಲ್ಲಿ ಚಿಕಿತ್ಸೆ ನೀಡಲಾಗಿದೆ. ಘಟನೆ ಬಳಿಕ ಸ್ಥಳದಲ್ಲಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲು ಕ್ರಮ ಕೈಗೊಳ್ಳಲಾಗಿದೆ.
ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ಜೆಡಿಎಸ್ ಮತ್ತು ರಾಜ್ಯ ಸರ್ಕಾರದ ನಡುವೆ ರಾಜಕೀಯ ವಾಕ್ಸಮರ ಮುಂದುವರಿದಿರುವ ಬೆನ್ನಲ್ಲೇ ಈ ಪಾದಯಾತ್ರೆ ನಡೆಸಲಾಗುತ್ತಿದೆ. ಯೋಜನೆಯಿಂದ ರೈತರು ಹಾಗೂ ಸ್ಥಳೀಯರಿಗೆ ತೊಂದರೆಯಾಗಲಿದೆ ಎಂದು ಜೆಡಿಎಸ್ ನಾಯಕರು ಆರೋಪಿಸುತ್ತಿದ್ದು, ಯಾವುದೇ ಕಾರಣಕ್ಕೂ ಯೋಜನೆಯನ್ನು ಜಾರಿಗೊಳಿಸಬಾರದು ಎಂದು ಆಗ್ರಹಿಸುತ್ತಿದ್ದಾರೆ.
ಇತ್ತ, ಪಾದಯಾತ್ರೆಯನ್ನು ಬೆಂಗಳೂರು ಪ್ರವೇಶಕ್ಕೂ ಮುನ್ನವೇ ಪೊಲೀಸರು ತಡೆದಿರುವುದು ಜೆಡಿಎಸ್ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ. ಹೀಗಾಗಿ ಮುಂದಿನ ಹಂತದಲ್ಲಿ ಪ್ರತಿಭಟನೆ ಯಾವ ಸ್ವರೂಪ ಪಡೆದುಕೊಳ್ಳಲಿದೆ ಎಂಬುದು ಕುತೂಹಲ ಮೂಡಿಸಿದೆ.





