ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಆರೋಗ್ಯದಲ್ಲಿ ಏರುಪೇರು: ಆಸ್ಪತ್ರೆಗೆ ದಾಖಲು

Untitled design 2026 02 03T131113.018

ಶಿವಮೊಗ್ಗ: ಕರ್ನಾಟಕ ರಾಜಕೀಯ ವಲಯದ ಹಿರಿಯ ಹಾಗೂ ಅನುಭವಿ ನಾಯಕ, ಮಾಜಿ ಸಚಿವ ಮತ್ತು ಮಾಜಿ ವಿಧಾನಸಭಾ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರ ಆರೋಗ್ಯದಲ್ಲಿ ಏಕಾಏಕಿ ಏರುಪೇರು ಉಂಟಾಗಿದ್ದು, ಅವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದಲ್ಲಿ ನಡೆದಿದೆ.

ಸಾಗರದ ಪ್ರಸಿದ್ಧ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವ ಇಂದು ಅಧಿಕೃತವಾಗಿ ಆರಂಭಗೊಂಡಿದ್ದು, ಈ ಹಿನ್ನೆಲೆ ಮಾಜಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಅವರು ದೇವಿಯ ದರ್ಶನ ಪಡೆಯಲು ಮಾರಿಕಾಂಬ ದೇವಸ್ಥಾನಕ್ಕೆ ಆಗಮಿಸಿದ್ದರು. ದೇವಿ ದರ್ಶನ ಪಡೆಯುತ್ತಿದ್ದ ಸಂದರ್ಭದಲ್ಲೇ ಅವರು ಅಸ್ವಸ್ಥರಾಗಿದ್ದು, ಏಕಾಏಕಿ ಕುಸಿದು ಬಿದ್ದಿದ್ದಾರೆ ಎನ್ನಲಾಗಿದೆ.

ಘಟನೆಯ ಮಾಹಿತಿ ದೊರೆಯುತ್ತಿದ್ದಂತೆಯೇ ತಕ್ಷಣ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದ್ದು, ಕಾಗೋಡು ತಿಮ್ಮಪ್ಪ ಅವರನ್ನು ಸಾಗರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರು ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.

ಕಾಗೋಡು ತಿಮ್ಮಪ್ಪ ಅವರು ಕಾಂಗ್ರೆಸ್ ಪಕ್ಷದ ಅತ್ಯಂತ ಹಿರಿಯ ಹಾಗೂ ಪ್ರಭಾವಿ ನಾಯಕರಲ್ಲಿ ಒಬ್ಬರಾಗಿದ್ದು, ದಶಕಗಳ ಕಾಲ ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಸಾಗರ ಕ್ಷೇತ್ರವನ್ನು ಪ್ರತಿನಿಧಿಸಿ ಅವರು ಹಲವು ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದರು. 2013ರಲ್ಲಿ ನಡೆದ 14ನೇ ಕರ್ನಾಟಕ ವಿಧಾನಸಭೆಯಲ್ಲಿ ಅವರು 21ನೇ ಸ್ಪೀಕರ್ ಆಗಿ ಆಯ್ಕೆಯಾಗಿದ್ದರು.

ಮಾಜಿ ಸ್ಪೀಕರ್ ಆಗಿರುವುದರ ಜೊತೆಗೆ ಅವರು ರಾಜ್ಯ ಸಚಿವರಾಗಿಯೂ ಸೇವೆ ಸಲ್ಲಿಸಿದ್ದು, ಸಾಮಾಜಿಕ ನ್ಯಾಯ, ರೈತರ ಹಿತಾಸಕ್ತಿ ಹಾಗೂ ಗ್ರಾಮೀಣಾಭಿವೃದ್ಧಿಗೆ ಸದಾ ಧ್ವನಿಯಾಗಿದ್ದರು. ಅವರ ಆರೋಗ್ಯದಲ್ಲಿ ಏರುಪೇರು ಉಂಟಾದ ಸುದ್ದಿ ತಿಳಿದು ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ಆಸ್ಪತ್ರೆಗೆ ಆಗಮಿಸಿ ಅವರ ಆರೋಗ್ಯ ವಿಚಾರಿಸುತ್ತಿದ್ದಾರೆ.

Exit mobile version