ಕಲಬುರಗಿ: ಕೋಮು ದ್ವೇಷ ಭಾಷಣ ಮತ್ತು ಕಾಂಗ್ರೆಸ್ ನಾಯಕರ ಅವಹೇಳನ ಮಾಡಿದ ಆರೋಪದ ಮೇಲೆ ಅಂದೋಲ ಸಿದ್ದಲಿಂಗ ಸ್ವಾಮೀಜಿ ವಿರುದ್ಧ ಪೊಲೀಸರು ಪ್ರಕರಣ ದಾಖಲಾಗಿದೆ.
ಚಿಂಚೋಳಿ ತಾಲೂಕಿನ ಐನೋಳ್ಳಿ ಗ್ರಾಮದಲ್ಲಿ ನಡೆದ ಶ್ರೀರಾಮೋತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಅಂದೋಲ ಸಿದ್ದಲಿಂಗ ಸ್ವಾಮೀಜಿ ಅವರು, ಕೋಮು ದ್ವೇಷ ಭಾಷಣ ಮತ್ತು ಕಾಂಗ್ರೆಸ್ ನಾಯಕರ ಅವಹೇಳನ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ. ಹಿಂದೂ-ಮುಸ್ಲಿಂ ಸಾಮರಸ್ಯಕ್ಕೆ ಧಕ್ಕೆ ತರುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಎಂದು ಎನ್ನಲಾಗಿದೆ.
ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರಾದ ಶರಣು ಪಾಟೀಲ್ ಈ ಕುರಿತು ಚಿಂಚೋಳಿ ಪೊಲೀಸ್ ಠಾಣೆಗೆ ಅಧಿಕೃತವಾಗಿ ದೂರು ನೀಡಿದ್ದಾರೆ. ದೂರಿನಲ್ಲಿ ಅವರು, ಸ್ವಾಮೀಜಿ ಸಮಾಜದಲ್ಲಿ ಜಾತಿ ಮತ್ತು ಧರ್ಮದ ಆಧಾರದ ಮೇಲೆ ಅಸಮರಸ್ಯವನ್ನು ಸೃಷ್ಟಿಸುವಂತಹ ಹೇಳಿಕೆಗಳನ್ನು ನೀಡಿದ್ದಾರೆ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ, ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅವರ ವಿರುದ್ಧ ಅವಹೇಳನಕಾರಿ ಮಾತುಗಳನ್ನು ಹೇಳಿದ್ದಾರೆ ಎಂದು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸರು ಭಾರತೀಯ ದಂಡ ಸಂಹಿತೆಯ ಹಲವಾರು ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.





