ಬಿಡದಿ ಟೌನ್‌ಶಿಪ್ ವಿರೋಧಿಸಿ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು ಬೃಹತ್ ಪಾದಯಾತ್ರೆ

Web Photo Editor (16)

ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದ ವಿವಾದ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ನಡುವಿನ ಜಿದ್ದಾಜಿದ್ದಿ ಮತ್ತಷ್ಟು ತೀವ್ರಗೊಂಡಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಪಕ್ಷವು ರೈತರ ಪರ ಹೋರಾಟವನ್ನು ಮತ್ತಷ್ಟು ತೀವ್ರ ಗೊಳಿಸಿದೆ.

ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ಇಂದು (ಜೂನ್ 21) ಬೃಹತ್ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. “ನಮ್ಮ ಭೂಮಿ – ನಮ್ಮ ಹಕ್ಕು” ಎಂಬ ಧ್ಯೇಯವಾಕ್ಯದೊಂದಿಗೆ ನಡೆಯುವ ಈ ಪಾದಯಾತ್ರೆ ಅಂಚಿಪುರ ಗ್ರಾಮದಿಂದ ಬೆಳಗ್ಗೆ 9 ಗಂಟೆಗೆ ಆರಂಭವಾಗಿದ್ದು, ಅಂಚಿಪುರ ಕಾಲೊನಿ, ಬನ್ನಿಗಿರಿ, ಮರೇವೇಗೌಡನದೊಡ್ಡಿ, ಗುಂಡುತೋಪು, ಗೊಲ್ಲಹಳ್ಳಿ, ಕೋಡಿಪಾಳ್ಯ ಮೂಲಕ ಸಾಗುವ ಪಾದಯಾತ್ರೆ ಕೊನೆಗೆ ಹೊಸೂರಿನಲ್ಲಿ ಬಹಿರಂಗ ಸಭೆಯೊಂದಿಗೆ ಸಮಾರೋಪಗೊಳ್ಳಲಿದೆ.

ಈ ಪಾದಯಾತ್ರೆಯಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ಜನರು ಭಾಗವಹಿಸುವ ನಿರೀಕ್ಷೆ ಇದೆ. ಜೆಡಿಎಸ್ ಶಾಸಕರು, ಮಾಜಿ ಶಾಸಕರು, ವಿವಿಧ ಘಟಕಗಳ ನಾಯಕರು, ಮಹಿಳಾ ಘಟಕದ ಪದಾಧಿಕಾರಿಗಳು ಹಾಗೂ ರೈತ ಸಂಘಟನೆಗಳು ಸೇರಿ ಸಹಸ್ರಾರು ಜನರು ಪಾಲ್ಗೊಳ್ಳಲಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಐದು ತಾಲೂಕುಗಳ ಜೊತೆಗೆ ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ನಗರ ಮತ್ತು ತುಮಕೂರು ಜಿಲ್ಲೆಗಳ ಕಾರ್ಯಕರ್ತರು ಕೂಡ ಭಾಗವಹಿಸುತ್ತಿದ್ದಾರೆ.

ಬಿಡದಿ ಟೌನ್‌ಶಿಪ್ ಯೋಜನೆಯಡಿ ಅಂಚಿಪುರ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಸುಮಾರು 518 ಎಕರೆ ಕೃಷಿ ಭೂಮಿಗೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಜೊತೆಗೆ ಹೆಚ್ಚುವರಿ 7,481 ಎಕರೆ ಭೂಸ್ವಾಧೀನಕ್ಕೆ ಸರ್ಕಾರ ಮುಂದಾಗಿದೆ ಎಂಬ ಆರೋಪವೂ ಕೇಳಿಬರುತ್ತಿದೆ. ಇದರಿಂದ 755 ರೈತ ಕುಟುಂಬಗಳ ಜೀವನೋಪಾಯ, ಹೈನುಗಾರಿಕೆ, ರೇಷ್ಮೆ ಮತ್ತು ತೋಟಗಾರಿಕೆ ಚಟುವಟಿಕೆಗಳಿಗೆ ಹಾನಿಯಾಗಲಿದೆ ಎಂದು ನಿಖಿಲ್ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಕಳೆದ 470 ದಿನಗಳಿಂದ ರೈತರು ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದು, ಈ ಯೋಜನೆ ರೈತರ ಬದುಕಿಗೆ ತೀವ್ರ ಹೊಡೆತ ನೀಡುತ್ತದೆ ಎಂದು ಜೆಡಿಎಸ್ ನಾಯಕರು ಹೇಳುತ್ತಿದ್ದಾರೆ. ಆದ್ದರಿಂದ ಅಂತಿಮ ಅಧಿಸೂಚನೆಯನ್ನು ರದ್ದುಪಡಿಸಬೇಕೆಂದು ಅವರು ಸರ್ಕಾರವನ್ನು ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಅವರು ಪಾದಯಾತ್ರೆಯಲ್ಲಿ ಭಾಗವಹಿಸುವ ಸಾಧ್ಯತೆಗಳಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ. ಅವರು ಈಗಾಗಲೇ ರೈತರ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಈ ವಿವಾದಕ್ಕೆ ಪ್ರತಿಕ್ರಿಯೆ ನೀಡಿದ್ದು, ಕುಮಾರಸ್ವಾಮಿ ಅವರೇ ಬಿಡದಿ ಟೌನ್‌ಶಿಪ್‌ನ ಪಿತಾಮಹ. ಯೋಜನೆ ತಪ್ಪು ಎಂದಿದ್ದರೆ ಅವರು ಅಧಿಕಾರದಲ್ಲಿದ್ದಾಗಲೇ ಡಿನೋಟಿಫೈ ಮಾಡಬೇಕಿತ್ತು. ಈಗ ನಾನು ಡಿನೋಟಿಫೈ ಮಾಡಿ ಜೈಲಿಗೆ ಹೋಗಲಾ?” ಎಂದು ಪ್ರಶ್ನಿಸಿದ್ದಾರೆ. ಈ ಹೇಳಿಕೆಗಳಿಂದ ರಾಜ್ಯ ರಾಜಕೀಯದಲ್ಲಿ ಆರೋಪ–ಪ್ರತ್ಯಾರೋಪ ಹೆಚ್ಚಾಗಿದ್ದು, ಬಿಡದಿ ಟೌನ್‌ಶಿಪ್ ಹೋರಾಟವು ಮುಂದಿನ ದಿನಗಳಲ್ಲಿ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.

Exit mobile version