ಭ್ರೂಣ ಹತ್ಯೆಗೆ ಬ್ರೇಕ್ ಹಾಕಲು ಸರ್ಕಾರದಿಂದ ಕಠಿಣ ಕ್ರಮ: ಮಾಹಿತಿ ನೀಡಿದವರಿಗೆ 1 ಲಕ್ಷ ರೂ. ಬಹುಮಾನ

Untitled design 2026 01 23T232848.602

ಬೆಂಗಳೂರು: ರಾಜ್ಯದಲ್ಲಿ ಹೆಣ್ಣು ಭ್ರೂಣ ಹತ್ಯೆ (Female Foeticide) ಎಂಬ ಅಮಾನವೀಯ ಪದ್ಧತಿಗೆ ಸಂಪೂರ್ಣ ಅಂತ್ಯ ಹಾಡುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ಮತ್ತು ದಿಟ್ಟ ನಿರ್ಧಾರ ಕೈಗೊಂಡಿದೆ. ಭ್ರೂಣ ಹತ್ಯೆ ಕುರಿತು ಮಾಹಿತಿ ನೀಡುವ ಸಾರ್ವಜನಿಕರಿಗೆ ನೀಡಲಾಗುತ್ತಿದ್ದ 50 ಸಾವಿರ ರೂ. ಬಹುಮಾನ ಮೊತ್ತವನ್ನು ಇದೀಗ 1 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ.  ಸಾಬೀತುಪಡಿಸಿದೆ.

ರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಅಂಗವಾಗಿ ಆರೋಗ್ಯ ಸೌಧದಲ್ಲಿ ಆಯೋಜಿಸಿದ್ದ ವಿಶೇಷ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಹೆಣ್ಣು ಭ್ರೂಣ ಹತ್ಯೆ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ಜಾರಿಗೆ ತರಲಾಗಿದೆ ಎಂದು ಸ್ಪಷ್ಟಪಡಿಸಿದರು. ಹೆಣ್ಣು ಮಗು ತನ್ನ ಕುಟುಂಬ ಅಥವಾ ಸಮಾಜಕ್ಕೆ ಹೊರೆಯಲ್ಲ, ಅವಳು ಶಕ್ತಿ, ಚೈತನ್ಯ ಮತ್ತು ಸಂಸ್ಕಾರದ ಮೂಲ. ಮಹಿಳೆಯರಿಲ್ಲದೆ ಸಮಾಜದ ಪೂರ್ಣತೆ ಸಾಧ್ಯವೇ ಇಲ್ಲ ಎಂದು ಅವರು ಹೇಳಿದರು.

ರಾಜ್ಯದಲ್ಲಿ ಇಂದಿಗೂ ಕೆಲವು ಕಡೆಗಳಲ್ಲಿ ಹೆಣ್ಣು ಭ್ರೂಣ ಹತ್ಯೆ ನಡೆಯುತ್ತಿರುವುದು ಅತ್ಯಂತ ಬೇಸರದ ಸಂಗತಿ ಎಂದು ವಿಷಾದ ವ್ಯಕ್ತಪಡಿಸಿದ ಸಚಿವರು, ಈ ಕ್ರೂರ ಪದ್ಧತಿ ಕೇವಲ ಕಾನೂನು ಉಲ್ಲಂಘನೆಯಷ್ಟೇ ಅಲ್ಲ, ಮಾನವೀಯ ಮೌಲ್ಯಗಳ ಮೇಲಿನ ಭೀಕರ ದಾಳಿಯಾಗಿದೆ ಎಂದು ಅಭಿಪ್ರಾಯಪಟ್ಟರು. ಸಮಾಜದಲ್ಲಿ ಲಿಂಗ ಸಮಾನತೆಯನ್ನು ಬೆಳೆಸುವುದು ಮತ್ತು ಹೆಣ್ಣು ಮಕ್ಕಳನ್ನು ಗೌರವದಿಂದ ಕಾಣುವ ಸಂಸ್ಕೃತಿಯನ್ನು ರೂಪಿಸುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಅವರು ಕರೆ ನೀಡಿದರು.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಸುಮಾರು 60% ಉದ್ಯೋಗಿಗಳು ಮಹಿಳೆಯರೇ ಇರುವುದನ್ನು ಹೆಮ್ಮೆಯ ವಿಷಯವೆಂದು ಉಲ್ಲೇಖಿಸಿದ ದಿನೇಶ್ ಗುಂಡೂರಾವ್ ಅವರು, ಮಹಿಳೆಯರು ಮತ್ತು ಪುರುಷರು ಸಮಾನರು ಎಂಬ ಸಂದೇಶವನ್ನು ಮತ್ತೊಮ್ಮೆ ಪುನರುಚ್ಚರಿಸಿದರು. ಆಡಳಿತ, ಆರೋಗ್ಯ, ಶಿಕ್ಷಣ ಸೇರಿದಂತೆ ಪ್ರತಿಯೊಂದು ಕ್ಷೇತ್ರದಲ್ಲೂ ಮಹಿಳೆಯರ ಪಾತ್ರ ಮಹತ್ವದ್ದಾಗಿದೆ. ಹೀಗಿರುವಾಗ, ಹೆಣ್ಣು ಭ್ರೂಣ ಹತ್ಯೆ ಎಂಬ ಅಮಾನವೀಯ ಪದ್ಧತಿ ಸಮಾಜದಲ್ಲಿ ಅಸ್ತಿತ್ವದಲ್ಲಿರುವುದು ಅತ್ಯಂತ ಕಳವಳಕಾರಿ ಎಂದರು.

ಈ ಅಮಾನವೀಯ ಪದ್ಧತಿಯನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡುವ ಉದ್ದೇಶದಿಂದ ಸರ್ಕಾರ ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ವಿಶ್ವಾಸಾರ್ಹ ಮಾಹಿತಿ ನೀಡುವವರಿಗೆ ₹1,00,000 ಬಹುಮಾನ ಘೋಷಿಸಿದೆ. ಇದುವರೆಗೆ ರಾಜ್ಯದಲ್ಲಿ ಇಬ್ಬರು ನಾಗರಿಕರು ಈ ಬಹುಮಾನವನ್ನು ಪಡೆದುಕೊಂಡಿದ್ದಾರೆ ಎಂಬ ಮಾಹಿತಿಯನ್ನು ಸಚಿವರು ಹಂಚಿಕೊಂಡರು. ಇದು ಸಾರ್ವಜನಿಕರಲ್ಲಿ ಜಾಗೃತಿ ಹೆಚ್ಚಿಸಲು ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ನೆರವಾಗಲಿದೆ ಎಂದು ಅವರು ಹೇಳಿದರು.

ಹೆಣ್ಣು ಮಕ್ಕಳಿಗೆ ಆತಂಕ ರಹಿತ, ಸುರಕ್ಷಿತ ಮತ್ತು ಗೌರವಯುತ ವಾತಾವರಣವನ್ನು ನಿರ್ಮಿಸುವುದು ಸರ್ಕಾರದಷ್ಟೇ ಅಲ್ಲ, ಸಮಾಜದ ಪ್ರತಿಯೊಬ್ಬ ನಾಗರಿಕನ ಕರ್ತವ್ಯವೂ ಆಗಿದೆ. ಮನೆಯಲ್ಲೇ ಲಿಂಗ ಭೇದಭಾವವಿಲ್ಲದ ವಾತಾವರಣ ನಿರ್ಮಾಣವಾದಾಗ ಮಾತ್ರ ಸಮಾಜದಲ್ಲಿ ನಿಜವಾದ ಬದಲಾವಣೆ ಸಾಧ್ಯ. ಈ ದಿಕ್ಕಿನಲ್ಲಿ ಪ್ರತಿಯೊಬ್ಬರೂ ಕೈಜೋಡಿಸಬೇಕು ಎಂದು ಸಚಿವರು ಮನವಿ ಮಾಡಿದರು.

Exit mobile version