ಮಂಡ್ಯ, ಆಗಸ್ಟ್ 12: ಕಾವೇರಿ ನೀರಿನ ವಿಚಾರ ಸೇರಿದಂತೆ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಆಗ್ರಹಿಸಿ ನಾಳೆ ಅಂದರೆ ಆಗಸ್ಟ್ 13ರಂದು ಕರೆ ನೀಡಿರುವ ಅಖಂಡ ಕರ್ನಾಟಕ ಬಂದ್‌ಗೆ ಮಂಡ್ಯ ಜಿಲ್ಲೆಯಲ್ಲಿ ಭರ್ಜರಿ ಸಿದ್ಧತೆ ನಡೆದಿದೆ. ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದು, ಜಿಲ್ಲೆಯಲ್ಲಿ ಜನಜೀವನ ಅಸ್ತವ್ಯಸ್ತವಾಗುವ ಸಾಧ್ಯತೆ ಇದೆ.
ಹಿರಿಯ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕರೆ ನೀಡಲಾಗಿರುವ ಬಂದ್‌ಗೆ ಮಂಡ್ಯ ಜಿಲ್ಲೆಯ ವರ್ತಕರು, ಆಟೋ ಚಾಲಕರು, ಹೋಟೆಲ್ ಮಾಲೀಕರು ಸೇರಿದಂತೆ ಹಲವರು ಬೆಂಬಲ ಘೋಷಿಸಿದ್ದಾರೆ. ಹೀಗಾಗಿ ಗುರುವಾರ ಬೆಳಗ್ಗೆಯಿಂದಲೇ ಅಂಗಡಿ-ಮುಂಗಟ್ಟುಗಳು ಬಂದ್ ಆಗುವ ಸಾಧ್ಯತೆ ಇದ್ದು, ಬಸ್ ಹಾಗೂ ಆಟೋ ಸಂಚಾರದಲ್ಲೂ ವ್ಯತ್ಯಯ ಉಂಟಾಗುವ ನಿರೀಕ್ಷೆಯಿದೆ.
ಸಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ
ಕನ್ನಡ ಸೇನೆ ಕಾರ್ಯಕರ್ತರು ಬೆಳಗ್ಗೆ 7 ಗಂಟೆಯಿಂದಲೇ ಹೋರಾಟಕ್ಕೆ ಸಜ್ಜಾಗಿದ್ದಾರೆ. ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಖಾಲಿ ಮಡಿಕೆ ಪ್ರದರ್ಶನ ಹಾಗೂ ಹುರುಳಿ ಕಾಳು ಉರಿಸುವ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲು ಹೋರಾಟಗಾರರು ತಯಾರಿ ನಡೆಸಿದ್ದಾರೆ.
ಇದೇ ವೇಳೆ ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಯಲ್ಲಿ ಪಿಂಡ ಪ್ರಧಾನ ಮಾಡುವ ಮೂಲಕ ಸರ್ಕಾರ ಮತ್ತು ಸಂಬಂಧಪಟ್ಟ ಪ್ರಾಧಿಕಾರಗಳ ವಿರುದ್ಧ ವಿನೂತನ ಪ್ರತಿಭಟನೆ ನಡೆಸಲು ಕನ್ನಡಪರ ಸಂಘಟನೆಗಳು ಸಿದ್ಧತೆ ಮಾಡಿಕೊಂಡಿವೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಫಲಕಗಳನ್ನು ಹಿಡಿದು ಪಿಂಡ ಬಿಡಲು ಕೂಡ ಕಾರ್ಯಕರ್ತರು ಮುಂದಾಗಿದ್ದಾರೆ.
ಮದ್ದೂರಿನಲ್ಲೂ ಪ್ರತಿಭಟನೆ
ಮದ್ದೂರಿನಲ್ಲಿ ಕನ್ನಡಪರ ಹಾಗೂ ರೈತ ಸಂಘಟನೆಗಳು ಬಂದ್‌ಗೆ ಬೆಂಬಲ ನೀಡಿದ್ದು, ಬೈಕ್ ರ‍್ಯಾಲಿ ಮತ್ತು ಮಾನವ ಸರಪಳಿ ಮೂಲಕ ಪ್ರತಿಭಟನೆ ನಡೆಸಲು ಸಿದ್ಧತೆ ಮಾಡಿಕೊಂಡಿವೆ. ಜಿಲ್ಲಾದ್ಯಂತ ವಿವಿಧೆಡೆ ಪ್ರತಿಭಟನೆಗಳು ನಡೆಯಲಿವೆ.
ಬಸ್, ಆಟೋ ಸಂಚಾರಕ್ಕೆ ಹೊಡೆತ?
ಮಂಡ್ಯದಲ್ಲಿ ಆಟೋ ಮಾಲೀಕರ ಸಂಘ ಈಗಾಗಲೇ ಬಂದ್‌ಗೆ ಬೆಂಬಲ ಸೂಚಿಸಿರುವುದರಿಂದ ಆಟೋ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇದೆ. ವರ್ತಕರೂ ಬೆಂಬಲ ನೀಡಿರುವ ಹಿನ್ನೆಲೆಯಲ್ಲಿ ಅಂಗಡಿ-ಮುಂಗಟ್ಟುಗಳು ಬಂದ್ ಆಗುವ ನಿರೀಕ್ಷೆಯಿದೆ.
ಬಸ್ ಸಂಚಾರದ ಮೇಲೂ ಬಂದ್ ಪರಿಣಾಮ ಬೀರುವ ಸಾಧ್ಯತೆ ಇದ್ದು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುವ ಆತಂಕ ವ್ಯಕ್ತವಾಗಿದೆ. ಹೀಗಾಗಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವಂತೆ ಕನ್ನಡ ಸೇನೆ ಒತ್ತಾಯಿಸಿದೆ.
ಮಂಡ್ಯದಲ್ಲಿ ಮದ್ಯ ಮಾರಾಟಕ್ಕೂ ಬ್ರೇಕ್
ಬಂದ್ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಶ್ರೀರಂಗಪಟ್ಟಣ, ಮದ್ದೂರು ಹಾಗೂ ಮಂಡ್ಯ ತಾಲೂಕುಗಳಲ್ಲಿ ಮದ್ಯ ಮಾರಾಟಕ್ಕೆ ನಿರ್ಬಂಧ ವಿಧಿಸಲಾಗಿದೆ.
ಜಿಲ್ಲಾಧಿಕಾರಿಗಳ ಆದೇಶದಂತೆ ಎಲ್ಲಾ ಮಾದರಿಯ ಮದ್ಯದ ಅಂಗಡಿಗಳು, ಬಾರ್ ಮತ್ತು ರೆಸ್ಟೋರೆಂಟ್‌ಗಳನ್ನು ಬಂದ್ ಮಾಡಲಾಗುತ್ತದೆ. ಮದ್ಯದ ಮಾರಾಟ, ಸಾಗಣೆ ಹಾಗೂ ಶೇಖರಣೆಯನ್ನೂ ನಿಷೇಧಿಸಲಾಗಿದೆ.
ಬಂದ್ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಪೊಲೀಸ್ ಬಂದೋಬಸ್ತ್ ಹೆಚ್ಚಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಅಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದಾರೆ.
ಕಾವೇರಿ ನೀರಿಗಾಗಿ ಕರ್ನಾಟಕ ಬಂದ್
ಕಾವೇರಿ ನೀರಿಗಾಗಿ ನಡೆಯುತ್ತಿರುವ ಹೋರಾಟದ ಹಿನ್ನೆಲೆಯಲ್ಲಿ ತಮಿಳುನಾಡು ಸರ್ಕಾರದ ಧೋರಣೆ ಖಂಡಿಸಿ ಹಾಗೂ ರಾಜ್ಯದ ಪ್ರಮುಖ ನೀರಾವರಿ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಲಾಗಿದೆ. ಕಾವೇರಿ ನೀರು ವಿವಾದದ ಜೊತೆಗೆ ಮೇಕೆದಾಟು, ಮಹಾದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗಳ ಕುರಿತು ಸರ್ಕಾರ ಸ್ಪಷ್ಟ ಕ್ರಮ ಕೈಗೊಳ್ಳಬೇಕು ಎಂಬುದು ಹೋರಾಟಗಾರರ ಪ್ರಮುಖ ಬೇಡಿಕೆಯಾಗಿದೆ.
