ರಾಜ್ಯದಲ್ಲಿ ಕಾವೇರಿ ನೀರು ಹಂಚಿಕೆ ವಿಚಾರ ಮತ್ತೆ ಚರ್ಚೆಗೆ ಕಾರಣವಾಗಿದ್ದು, ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಮಾಡುವಂತೆ ಕಾವೇರಿ ಜಲ ನಿಯಂತ್ರಣ ಸಮಿತಿ (CWRC) ಮತ್ತು ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ (CWMA) ನೀಡಿರುವ ಆದೇಶವನ್ನು ಖಂಡಿಸಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಆಗಸ್ಟ್ 13ರಂದು ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ವಿವಿಧ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು ಹಾಗೂ ಹೋರಾಟಗಾರರ ಮಹತ್ವದ ಸಭೆ ನಡೆಯಿತು. ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಹೋರಾಟಗಾರ ವಾಟಾಳ್ ನಾಗರಾಜ್, ಕಾವೇರಿ ನೀರಿನ ವಿಚಾರದಲ್ಲಿ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಆರೋಪಿಸಿದ್ದು, ರಾಜ್ಯದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಆಗಸ್ಟ್ 13ರಂದು ಬೆಳಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಅಖಂಡ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಘೋಷಿಸಿದ್ದಾರೆ.
ಕಾವೇರಿ ನೀರು ರಾಜ್ಯದ ರೈತರ ಜೀವನಾಡಿಯಾಗಿದ್ದು, ರಾಜ್ಯದ ಜಲಾಶಯಗಳಲ್ಲಿಯೂ ಸಾಕಷ್ಟು ನೀರಿನ ಕೊರತೆ ಎದುರಾಗುತ್ತಿರುವ ಸಂದರ್ಭದಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಆದೇಶ ನೀಡಿರುವುದು ಕರ್ನಾಟಕದ ರೈತರಿಗೆ ತೀವ್ರ ಅನ್ಯಾಯವಾಗಿದೆ ಎಂದು ಸಂಘಟನೆಗಳು ಅಭಿಪ್ರಾಯಪಟ್ಟಿವೆ. ಈ ಕಾರಣದಿಂದಲೇ ಹೋರಾಟವನ್ನು ಮತ್ತಷ್ಟು ವ್ಯಾಪಕಗೊಳಿಸುವ ಉದ್ದೇಶದಿಂದ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದೆ.
ಬಂದ್ ಯಶಸ್ವಿಗೊಳಿಸಲು ರಾಜ್ಯದ ಎಲ್ಲ ಕನ್ನಡಪರ ಸಂಘಟನೆಗಳು, ರೈತ ಸಂಘಟನೆಗಳು, ಮಹಿಳಾ ಸಂಘಟನೆಗಳು, ಕಾರ್ಮಿಕ ಸಂಘಗಳು, ಖಾಸಗಿ ಸಾರಿಗೆ ಸಂಘಟನೆಗಳು, ಆಟೋ, ಟ್ಯಾಕ್ಸಿ ಹಾಗೂ ಲಾರಿ ಚಾಲಕರ ಸಂಘಗಳು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳು ಕೈಜೋಡಿಸುವಂತೆ ವಾಟಾಳ್ ನಾಗರಾಜ್ ಮನವಿ ಮಾಡಿದ್ದು, ಜನರು ಸಹ ಸ್ವಯಂಪ್ರೇರಿತವಾಗಿ ಬಂದ್‌ಗೆ ಬೆಂಬಲ ನೀಡಿ ರಾಜ್ಯದ ನೀರಿನ ಹಕ್ಕಿಗಾಗಿ ಒಗ್ಗಟ್ಟಿನಿಂದ ನಿಲ್ಲಬೇಕು ಎಂದು ಅವರು ಕರೆ ನೀಡಿದ್ದಾರೆ.
ಕಳೆದ ಕೆಲವು ದಿನಗಳಿಂದ ಮಂಡ್ಯ, ಮೈಸೂರು, ರಾಮನಗರ, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು, ಹೆದ್ದಾರಿ ತಡೆ, ಧರಣಿ ಹಾಗೂ ಪ್ರತಿಭಟನೆಗಳ ಮೂಲಕ ಸರ್ಕಾರ ಮತ್ತು ಕೇಂದ್ರದ ಗಮನ ಸೆಳೆಯಲು ಪ್ರಯತ್ನಿಸುತ್ತಿವೆ. ಇದೀಗ ಅಖಂಡ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಹೋರಾಟ ಮತ್ತಷ್ಟು ತೀವ್ರಗೊಳ್ಳುವ ಸಾಧ್ಯತೆ ಇದೆ.
ಆಗಸ್ಟ್ 13ರಂದು ನಡೆಯಲಿರುವ ಬಂದ್‌ಗೆ ವಿವಿಧ ಸಂಘಟನೆಗಳಿಂದ ಯಾವ ಮಟ್ಟಿನ ಬೆಂಬಲ ದೊರೆಯಲಿದೆ ಎಂಬುದು ಕುತೂಹಲ ಮೂಡಿಸಿದ್ದು, ಕಾವೇರಿ ನೀರು ಹಂಚಿಕೆ ವಿವಾದ ಮತ್ತೆ ರಾಜ್ಯದಲ್ಲಿ ಕಾವೇರಿದ ಕಿಚ್ಚಿಗೆ ಕಾರಣವಾಗಿದೆ.
