ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಾಟಲಿ ನಿಷೇಧ: ಸಿಎಂ ಸಿದ್ದರಾಮಯ್ಯ ಆದೇಶ

Untitled design 2025 11 01t074932.621

ಬೆಂಗಳೂರು : ಸರ್ಕಾರಿ ಕಚೇರಿಗಳು ಮತ್ತು ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಇನ್ನುಮುಂದೆ ಪ್ಲಾಸ್ಟಿಕ್ ಬಾಟಲಿಗಳ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಬಾಟಲಿಗಳನ್ನು ಮಾತ್ರ ಬಳಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲಾ ಇಲಾಖಾ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜೊತೆಗೆ, ಎಲ್ಲಾ ಸರ್ಕಾರಿ ಕಾರ್ಯಕ್ರಮಗಳಲ್ಲಿ ಕೆಎಂಎಫ್‌ನ ನಂದಿನಿ ತಿನಿಸುಗಳನ್ನು ಕಡ್ಡಾಯವಾಗಿ ಬಳಸುವಂತೆ ಆದೇಶಿಸಲಾಗಿದೆ.


ಈ ನಿಟ್ಟಿನಲ್ಲಿ ಟ್ವಿಟರ್ ಪೋಸ್ಟ್‌ ಹಾಕಿರುವ ಅವರು, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಗಳ ಬದಲಾಗಿ ಪರಿಸರ ಸ್ನೇಹಿ ವಸ್ತುಗಳಿಂದ ತಯಾರಿಸಿದ ಪರಿಕರಗಳ ಬಳಕೆ ಮಾಡುವಂತೆ ಈ ಹಿಂದೆಯೇ ಸೂಚನೆ ನೀಡಲಾಗಿತ್ತು. ಇದನ್ನು ಈಗ ಕಟ್ಟುನಿಟ್ಟಾಗಿ ಪಾಲಿಸುವಂತೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಮುಖ್ಯಮಂತ್ರಿ ಮತ್ತು ಸಚಿವರ ಸಭೆಗಳು ಸೇರಿದಂತೆ ಸರ್ಕಾರದ ಎಲ್ಲಾ ಕಾರ್ಯಕ್ರಮಗಳಲ್ಲಿ ನಂದಿನಿ ಉತ್ಪನ್ನಗಳ ಬಳಕೆಯನ್ನು ಖಚಿತಪಡಿಸಿಕೊಳ್ಳಲು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಇದೇ ಸಂದರ್ಭದಲ್ಲಿ, ರಾಜ್ಯದ ಕೆಲವು ವಿಶ್ವವಿದ್ಯಾಲಯಗಳಿಗೆ ಪ್ರಮುಖ ಐತಿಹಾಸಿಕ ವ್ಯಕ್ತಿಗಳ ಹೆಸರನ್ನು ನಾಮಕರಣ ಮಾಡಲು ಸರ್ಕಾರ ಚಿಂತನೆ ನಡೆಸಿದೆ. ಈ ಕ್ರಮದಡಿಯಲ್ಲಿ ಸಾಮಾಜಿಕ ನ್ಯಾಯ ಮತ್ತು ಸಮಾನತೆಯ ಸಂದೇಶವನ್ನು ಹರಡಿದ ವಿಶ್ವಗುರು ಬಸವಣ್ಣ, ಕೀರ್ತನೆಗಳ ಮೂಲಕ ಸಾಮಾಜಿಕ ಜಾಗೃತಿ ಮೂಡಿಸಿದ ಕನಕದಾಸ, ಆಧುನಿಕ ಕರ್ನಾಟಕದ ಅಡಿಗಲ್ಲು ಹಾಕಿದ ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಪರಿವರ್ತನೆಯ ಹರಿಕಾರರಾಗಿದ್ದ ಡಿ. ದೇವರಾಜ ಅರಸ್ ಅವರ ಹೆಸರುಗಳನ್ನು ವಿವಿಧ ವಿಶ್ವವಿದ್ಯಾಲಯಗಳಿಗೆ ಇಡುವ ವಿಷಯದ ಕುರಿತು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪ ಮಾಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸಲಾಗಿದೆ ಎಂದೂ ತಿಳಿಸಿದ್ದಾರೆ.

 

Exit mobile version