ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಅಭ್ಯರ್ಥಿಗಳ ಹೆಸರನ್ನು ಅಧಿಕೃತವಾಗಿ ಘೋಷಿಸಿದೆ. ದೀರ್ಘಕಾಲದ ಚರ್ಚೆ, ನಾಯಕರ ನಡುವಿನ ಸಂಧಾನ ಮತ್ತು ಆಕಾಂಕ್ಷಿಗಳ ಪಟ್ಟಿಯನ್ನು ಅಳೆದು ತೂಗಿದ ನಂತರಅಂತಿಮವಾಗಿ ಇಬ್ಬರು ಪ್ರಬಲ ಅಭ್ಯರ್ಥಿಗಳನ್ನು ಅಖಾಡಕ್ಕಿಳಿಸಿದೆ.
ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಯಾರಾಗಲಿದ್ದಾರೆ ಎಂಬ ಕುತೂಹಲಕ್ಕೆ ತೆರೆ ಬಿದ್ದಿದ್ದು, ಹಿರಿಯ ನಾಯಕ ಎಚ್.ವೈ. ಮೇಟಿ ಅವರ ಕುಟುಂಬದ ಉಮೇಶ್ ಮೇಟಿ ಅವರಿಗೆ ಟಿಕೆಟ್ ನೀಡಲಾಗಿದೆ. ಈ ಕ್ಷೇತ್ರದಲ್ಲಿ ಟಿಕೆಟ್‌ಗಾಗಿ ಭಾರಿ ಪೈಪೋಟಿ ಏರ್ಪಟ್ಟಿತ್ತು. ಬಾಗಲಕೋಟೆಯಲ್ಲಿ ಈಗ ಬಿಜೆಪಿಯ ಪ್ರಬಲ ನಾಯಕ ವೀರಣ್ಣ ಚರಂತಿಮಠ್ ಮತ್ತು ಕಾಂಗ್ರೆಸ್‌ನ ಉಮೇಶ್ ಮೇಟಿ ನಡುವೆ ನೇರ ಹಣಾಹಣಿ ಏರ್ಪಟ್ಟಿದೆ.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪ ಅವರ ಕುಟುಂಬದ ಮೇಲೆಯೇ ಭರವಸೆ ಇಟ್ಟಿದೆ. ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಪುತ್ರ ಸಮರ್ಥ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಘೋಷಿಸಲಾಗಿದೆ. ಆ ಮೂಲಕ ದಾವಣಗೆರೆ ರಾಜಕೀಯದಲ್ಲಿ ಶಾಮನೂರು ಕುಟುಂಬದ ಮೂರನೇ ತಲೆಮಾರು ಅಧಿಕೃತವಾಗಿ ಚುನಾವಣಾ ರಾಜಕೀಯಕ್ಕೆ ಪಾದಾರ್ಪಣೆ ಮಾಡಿದೆ. ಇಲ್ಲಿ ಬಿಜೆಪಿಯ ಶ್ರೀನಿವಾಸ್ ಟಿ. ದಾಸಕರಿಯಪ್ಪ ಮತ್ತು ಕಾಂಗ್ರೆಸ್‌ನ ಸಮರ್ಥ್ ನಡುವೆ ಜಿದ್ದಾಜಿದ್ದಿನ ಸ್ಪರ್ಧೆ ಏರ್ಪಡಲಿದೆ.
ಬಾಗಲಕೋಟೆ & ದಾವಣಗೆರೆಗೆ ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಫೈನಲ್..!
ಕರ್ನಾಟಕದಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಂಡಿದೆ. ಮಾಜಿ ಶಾಸಕ ಎಚ್.ವೈ. ಮೇಟಿ ನಿಧನದಿಂದ ತೆರವಾದ ಬಾಗಲಕೋಟೆ ಕ್ಷೇತ್ರಕ್ಕೆ ಅವರ ಪುತ್ರ ಉಮೇಶ್ ಮೇಟಿಗೆ ಟಿಕೆಟ್ ಬಹುತೇಕ ಖಚಿತವಾಗಿದೆ. ದಾವಣಗೆರೆ ದಕ್ಷಿಣದಲ್ಲಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ ಅವರ ಪುತ್ರ ಸಮರ್ಥ್ ಶಾಮನೂರು ಅವರಿಗೆ ಕಾಂಗ್ರೆಸ್ ಟಿಕೆಟ್ ಫಿಕ್ಸ್ ಆಗಿದೆ.
ಬಾಗಲಕೋಟೆಯಲ್ಲಿ ಮೇಟಿ ಕುಟುಂಬದ ಒಳಜಗಳ ತೀವ್ರವಾಗಿತ್ತು. ಹಿರಿಯ ಸಹೋದರ ಮಲ್ಲಿಕಾರ್ಜುನ ಮೇಟಿ, ಸಹೋದರಿ ಬಾಯಕ್ಕ ಮೇಟಿ ಮತ್ತು ಮಹಾದೇವಿ ಮೇಟಿ ನಡುವೆ ಪೈಪೋಟಿ ಇದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ ಮತ್ತು ಎಂ.ಬಿ. ಪಾಟೀಲ್ ಅವರೊಂದಿಗೆ ಸಂಧಾನ ನಡೆಸಿ ಒಮ್ಮತ ಸಾಧಿಸಿದರು. ಉಮೇಶ್ ಮೇಟಿ ರಹಸ್ಯವಾಗಿ ಸಹಿ ಸಂಗ್ರಹಿಸಿ ಹೈಕಮಾಂಡ್‌ಗೆ ಕಳುಹಿಸಿದ್ದರು. ಕುಟುಂಬದ ಆಸ್ತಿ ವಿಭಜನೆ ಮತ್ತು ಹಿರಿಯರ ಸಲಹೆಯಿಂದ ಉಮೇಶ್‌ಗೆ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.
ದಾವಣಗೆರೆ ದಕ್ಷಿಣದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಟಿಕೆಟ್ ಬೇಡಿಕೆ ಇಟ್ಟಿದ್ದರು. ಸುರ್ಜೇವಾಲ ಸಭೆಯಲ್ಲಿ ಚರ್ಚೆ ನಡೆದರೂ, ಚುನಾವಣಾ ವೀಕ್ಷಕರು ಮತ್ತು ಈಶ್ವರ್ ಖಂಡ್ರೆ ಅವರು ಸಮರ್ಥ್ ಪರ ಬ್ಯಾಟಿಂಗ್ ಮಾಡಿದರು. ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷರಾದ ಖಂಡ್ರೆಯ ಬೆಂಬಲದೊಂದಿಗೆ ಸಮರ್ಥ್‌ಗೆ ಟಿಕೆಟ್ ಖಚಿತವಾಯಿತು. ಮುಸ್ಲಿಂ ಸಮುದಾಯಕ್ಕೆ ಮುಂದೆ ನಿಗಮ-ಮಂಡಳಿ ಹೆಚ್ಚುವರಿ ಸ್ಥಾನಗಳ ಭರವಸೆ ನೀಡಲಾಗಿದೆ ಎನ್ನಲಾಗುತ್ತಿದೆ.
ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕಾಂಗ್ರೆಸ್ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಬಿಡುಗಡೆಯಾಗುವ ಸಾಧ್ಯತೆ ಇದೆ. ಏಪ್ರಿಲ್ 9ರಂದು ನಡೆಯಲಿರುವ ಈ ಉಪಚುನಾವಣೆಗಳು ರಾಜ್ಯ ರಾಜಕೀಯದಲ್ಲಿ ಹೊಸ ತಿರುವು ನೀಡಬಹುದು.