ಕರ್ನಾಟಕ ಕಾಂಗ್ರೆಸ್ ಸರ್ಕಾರದ ಬಹುನಿರೀಕ್ಷಿತ ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆಗೆ ಸಂಬಂಧಿಸಿದ ಚಟುವಟಿಕೆಗಳು ಮತ್ತಷ್ಟು ವೇಗ ಪಡೆದಿವೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಂಗಳವಾರ ಬೆಳಗ್ಗೆ ದೆಹಲಿಗೆ ತೆರಳಲಿದ್ದು, ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಲಿದ್ದಾರೆ.
ಅಧಿಕೃತವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಜನ್ಮದಿನದ ಶುಭಾಶಯ ಕೋರುವ ಉದ್ದೇಶದಿಂದ ಈ ಭೇಟಿ ನಡೆಯುತ್ತಿದ್ದರೂ, ಸಚಿವ ಸಂಪುಟ ವಿಸ್ತರಣೆ ಮತ್ತು ಪುನಾರಚನೆ ಕುರಿತು ಅಂತಿಮ ಚರ್ಚೆ ನಡೆಸುವುದು ಈ ಪ್ರವಾಸದ ಪ್ರಮುಖ ಉದ್ದೇಶವಾಗಿದೆ. ಮಂಗಳವಾರ ಸಂಜೆ ಹೈಕಮಾಂಡ್ ನಾಯಕರೊಂದಿಗೆ ಸಭೆ ನಡೆಯುವ ಸಾಧ್ಯತೆ ಇದ್ದು, ಚರ್ಚೆ ಪೂರ್ಣಗೊಳ್ಳದಿದ್ದರೆ ಬುಧವಾರವೂ ಸಭೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ಇದರ ಜೊತೆಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ಸಹ ರಾಜ್ಯ ನಾಯಕರು ಸಮಯಾವಕಾಶ ಕೋರಬಹುದು ಎನ್ನಲಾಗಿದೆ. ಈ ಎಲ್ಲ ಪ್ರಕ್ರಿಯೆಗಳು ಯಶಸ್ವಿಯಾಗಿ ಪೂರ್ಣಗೊಂಡರೆ ಜುಲೈ 24 ಅಥವಾ 25ರಂದು ಹೊಸ ಸಚಿವರ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆಸುವ ಬಗ್ಗೆ ರಾಜ್ಯ ನಾಯಕತ್ವ ಚಿಂತನೆ ನಡೆಸಿದೆ.
ವಿಶೇಷ ವಿಮಾನದಲ್ಲಿ ದೆಹಲಿಗೆ ಪ್ರಯಾಣ
ಮಂಗಳವಾರ ಬೆಳಗ್ಗೆ ಸುಮಾರು 8 ಗಂಟೆಗೆ ವಿಶೇಷ ವಿಮಾನದ ಮೂಲಕ ಡಿ.ಕೆ. ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಕಳೆದ ವಾರವೂ ಕಾಂಗ್ರೆಸ್ ಹೈಕಮಾಂಡ್ ಈ ಮೂವರು ನಾಯಕರನ್ನು ದೆಹಲಿಗೆ ಆಹ್ವಾನಿಸಿ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ನಡೆಸಿತ್ತು. ಆದರೆ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತುರ್ತು ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ತೆರಳಬೇಕಾದ ಕಾರಣ ಸಭೆ ಅಪೂರ್ಣವಾಗಿತ್ತು.
ಕಳೆದ ಸಭೆಯಲ್ಲಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ರಣದೀಪ್ ಸಿಂಗ್ ಸುರ್ಜೇವಾಲಾ ಮತ್ತು ಕೆ.ಸಿ. ವೇಣುಗೋಪಾಲ್ ಅವರು ರಾಜ್ಯ ನಾಯಕರೊಂದಿಗೆ ಪ್ರತ್ಯೇಕ ಹಾಗೂ ಜಂಟಿ ಸಭೆಗಳನ್ನು ನಡೆಸಿ ಅಭಿಪ್ರಾಯ ಸಂಗ್ರಹಿಸಿದ್ದರು. ಈ ವೇಳೆ ಮುಖ್ಯಮಂತ್ರಿ, ಸಿದ್ದರಾಮಯ್ಯ ಹಾಗೂ ಇತರ ಪ್ರಮುಖ ನಾಯಕರು ತಮ್ಮ ಆಯ್ಕೆಯ ಸಚಿವ ಅಭ್ಯರ್ಥಿಗಳ ಪ್ರತ್ಯೇಕ ಪಟ್ಟಿಯನ್ನು ಹೈಕಮಾಂಡ್‌ಗೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಇನ್ನೊಂದೆಡೆ, ಹೈಕಮಾಂಡ್ ಕೂಡ ತನ್ನ ಮೂಲಗಳಿಂದ ಸಂಗ್ರಹಿಸಿದ ಮಾಹಿತಿಯ ಆಧಾರದ ಮೇಲೆ ಪ್ರತ್ಯೇಕ ಪಟ್ಟಿಯನ್ನು ಸಿದ್ಧಪಡಿಸಿತ್ತು. ಆದರೆ ವಿವಿಧ ಪಟ್ಟಿಗಳ ನಡುವೆ ಒಮ್ಮತ ಮೂಡದ ಕಾರಣ ಅಂತಿಮ ನಿರ್ಧಾರ ಕೈಗೊಳ್ಳಲು ಸಾಧ್ಯವಾಗಿರಲಿಲ್ಲ. ಇದೀಗ ಮಲ್ಲಿಕಾರ್ಜುನ ಖರ್ಗೆ ಅವರ ಸಮ್ಮುಖದಲ್ಲಿ ಅಂತಿಮ ಚರ್ಚೆ ನಡೆಸಿ ಸಚಿವರ ಪಟ್ಟಿಗೆ ಒಪ್ಪಿಗೆ ಪಡೆಯುವ ಪ್ರಯತ್ನ ನಡೆಯಲಿದೆ.
ದೆಹಲಿಯಲ್ಲಿ ಸಚಿವ ಸ್ಥಾನಾಕಾಂಕ್ಷಿಗಳ ಲಾಬಿ
ಸಚಿವ ಸಂಪುಟ ವಿಸ್ತರಣೆಯ ಸುದ್ದಿ ಜೋರಾಗುತ್ತಿದ್ದಂತೆ ಸಚಿವ ಸ್ಥಾನಕ್ಕಾಗಿ ಆಕಾಂಕ್ಷಿಗಳ ಲಾಬಿಯೂ ದೆಹಲಿಯಲ್ಲಿ ತೀವ್ರಗೊಂಡಿದೆ. ಸುಮಾರು 40ಕ್ಕೂ ಹೆಚ್ಚು ಕಾಂಗ್ರೆಸ್ ಶಾಸಕರು ಮತ್ತು ಹಿರಿಯ ನಾಯಕರು ದೆಹಲಿಯಲ್ಲಿ ಬೀಡುಬಿಟ್ಟು ಹೈಕಮಾಂಡ್ ನಾಯಕರನ್ನು ಭೇಟಿಯಾಗಲು ಪ್ರಯತ್ನಿಸುತ್ತಿದ್ದಾರೆ.
ಸಲೀಂ ಅಹಮದ್, ಎಚ್.ಕೆ. ಪಾಟೀಲ್, ಬಸವರಾಜ ರಾಯರೆಡ್ಡಿ, ವಿಜಯಾನಂದ ಕಾಶಪ್ಪನವರ್, ಎಂ.ವೈ. ಪಾಟೀಲ್, ಮಳವಳ್ಳಿ ನರೇಂದ್ರಸ್ವಾಮಿ, ಅಶೋಕ್ ಪಟ್ಟಣ್, ಪ್ರಸಾದ್ ಅಬ್ಬಯ್ಯ, ಅಲ್ಲಮ ಪ್ರಭು ಪಾಟೀಲ್ ಸೇರಿದಂತೆ ಹಲವು ಪ್ರಮುಖ ನಾಯಕರು ಸಚಿವ ಸ್ಥಾನಕ್ಕಾಗಿ ಸಕ್ರಿಯವಾಗಿ ಲಾಬಿ ನಡೆಸುತ್ತಿದ್ದಾರೆ ಎನ್ನಲಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಹಲವು ತಿಂಗಳುಗಳಿಂದ ಚರ್ಚೆಯಲ್ಲಿದ್ದು, ಇದೀಗ ದೆಹಲಿಯಲ್ಲಿ ನಡೆಯಲಿರುವ ಈ ಮಹತ್ವದ ಸಭೆ ನಿರ್ಣಾಯಕ ಹಂತ ತಲುಪಿದೆ. ಹೈಕಮಾಂಡ್ ಒಪ್ಪಿಗೆ ದೊರೆತರೆ ಹೊಸ ಸಚಿವರ ಪಟ್ಟಿಗೆ ಅಂತಿಮ ಮುದ್ರೆ ಬಿದ್ದು, ಇದೇ ವಾರದಲ್ಲಿ ಹೊಸ ಸಚಿವರು ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆ ಇದೆ.