ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದೆ: ಸಿಎಂ ಸಿದ್ದರಾಮಯ್ಯ

Untitled design 2026 04 01T161123.866

ದಾವಣಗೆರೆ, ಏಪ್ರಿಲ್ 1 : ಕೇಂದ್ರ ಬಜೆಟ್ ಗಿಂತ ರಾಜ್ಯದ ಬಜೆಟ್ ಉತ್ತಮವಾಗಿದ್ದು, ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ದಾವಣಗೆರೆಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷವು ದೊಡ್ಡ ಅಂತರದ ಗೆಲುವು ಸಾಧಿಸುವ ವಿಶ್ವಾಸವಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಶಾಮನೂರು ಶಿವಶಂಕರಪ್ಪನವರು ಹಾಗೂ ಬಾಗಲಕೋಟೆಯಲ್ಲಿ ಹೆಚ್.ವೈ.ಮೇಟಿಯವರು ತಮ್ಮತಮ್ಮ ಕ್ಷೇತ್ರದ ಅಭಿವೃದ್ಧಿಗೆ ಗಣನೀಯ ಕೊಡುಗೆ ನೀಡಿದ್ದಾರೆ. ಇಲ್ಲಿನ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ನೆರವಿಗೆ ಬಂದಿವೆ ಎಂದರು.

ಬಿಜೆಪಿಯವರು ಬಡವರ ಯೋಜನೆಗಳನ್ನು ವಿರೋಧಿಸುತ್ತಾರೆ

ಬಿಜೆಪಿಯವರು ಬಡವರ ಯೋಜನೆಗಳಾದ ಗ್ಯಾರಂಟಿಗಳನ್ನು ವಿರೋಧಿಸುತ್ತಾರೆ. ಒಟ್ಟು ಗ್ಯಾರಂಟಿ ಯೋಜನೆಗೆ ಸುಮಾರು 1,31,000 ಕೋಟಿ ರೂ.ಗಳನ್ನು ನಾವು ವ್ಯಯ ಮಾಡಿ ಜನ ಸಾಮಾನ್ಯರ ಬದುಕಿಗೆ ಅರ್ಪಿಸಿದ್ದೇವೆ. ದಾವಣಗೆರೆ ದಕ್ಷಿಣ ಕ್ಷೇತ್ರ ಒಂದರಲ್ಲಿ 535 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದರು.

ಕಾಂಗ್ರೆಸ್ ಸರ್ಕಾರ ಯೂನಿವರ್ಸಲ್ ಬೇಸಿಕ್ ಇನ್ಕಂ ತತ್ವದಲ್ಲಿ ನಂಬಿಕೆಯಿರಿಸಿ, ತಳಸಮುದಾಯದವರಿಗೆ ಅನುಕೂಲ ಕಲ್ಪಿಸುತ್ತಿದೆ. ಸಮಾಜದ ಕಟ್ಟಕಡೆಯ ಕಷ್ಟಗಳಿಗೆ ಸ್ಪಂದಿಸುವುದು ಮುಖ್ಯ ಎಂದರು.

ಗ್ಯಾರಂಟಿಗಳ ಮೂಲಕ ಸಮಾಜದ ವಿವಿಧ ಜಾತಿಧರ್ಮ ಭಾಷೆಗಳ ಬಡವರಿಗೆ, ಮಧ್ಯವರ್ತಿಗಳ ಹಾವಳಿಯಿಲ್ಲದೇ, ನೇರವಾಗಿ ಅವರ ಖಾತೆಗೆ ಆರ್ಥಿಕ ಲಾಭ ನೀಡಲಾಗುತ್ತಿದೆ ಎಂದರು.

ಬಿಜೆಪಿ ತನ್ನ ಅವಧಿಯಲ್ಲಿ ಹೆಚ್ಚು ಸಾಲ ಮಾಡಿದೆ

ಬಿಜೆಪಿಯವರು ಗ್ಯಾರಂಟಿಗಳಲ್ಲಿ ಭ್ರಷ್ಟಾಚಾರ ನಡೆಯುತ್ತದೆ, ಖಜಾನೆ ಖಾಲಿಯಾಗುತ್ತದೆ ಎಂದು ಟೀಕಿಸುತ್ತಾರೆ. ಆದರೆ ಜನರ ಖಾತೆಗೆ ನೇರವಾಗಿ ಹಣ ತಲುಪುದರಿಂದ ಭ್ರಷ್ಟಾಚಾರಕ್ಕೆ ಆಸ್ಪದವಿಲ್ಲ. ಬಿಜೆಪಿಯವರು ತಮ್ಮ ಅವಧಿಯಲ್ಲಿ ಅಂದರೆ 2023ರ ಮಾರ್ಚ್ ವರೆಗೆ 530000 ಕೋಟಿಗೂ ಹೆಚ್ಚು ಸಾಲ ಮಾಡಿದ್ದರೆ, ನಮ್ಮ ಕಾಂಗ್ರೆಸ್ ಸರ್ಕಾರ, ಕಳೆದ ನಾಲ್ಕು ವರ್ಷದಲ್ಲಿ 256000 ಕೋಟಿ ರೂ. ಸಾಲ ಮಾಡಿದೆ. ಅಂತೆಯೇ ಪ್ರಧಾನಿ ಮೋದಿಯವರು ಅಧಿಕಾರಕ್ಕೆ ಬಂದಾಗ ದೇಶದ ಮೇಲೆ 53.11 ಲಕ್ಷ ಕೋಟಿ ಸಾಲವಿತ್ತು. ಈಗ 218 ಲಕ್ಷ ಕೋಟಿ ಸಾಲವಿದೆ, ಅಂದರೆ ಪ್ರಧಾನಿ ಮೋದಿಯವರ 12 ವರ್ಷದ ಅಧಿಕಾರದ ಅವಧಿಯಲ್ಲಿ 165 ಲಕ್ಷ ಕೋಟಿಯಷ್ಟು ಸಾಲ ಮಾಡಿದ್ದಾರೆ. ಈ ಸಂಖ್ಯೆಯು ಬಿಜೆಪಿ ಸರ್ಕಾರ ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಹೆಚ್ಚು ಸಾಲ ಮಾಡಿದೆ ಎಂಬುದನ್ನು ಸೂಚಿಸುತ್ತದೆ ಎಂದರು.

ಕೇಂದ್ರ ಬಜೆಟ್ ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಶ್ವೇತಪತ್ರ ಹೊರಡಿಸಲು ಹೇಳಿರುವುದಕ್ಕೆ ಪ್ರತಿಕ್ರಿಯೆ ನೀಡಿ, ಅಧಿವೇಶನದಲ್ಲಿ ಬಜೆಟ್ ನ ಬಗ್ಗೆ ವಿಸ್ತೃತ ಚರ್ಚೆಗಳಾಗಿದ್ದು, ಈಗಾಗಲೇ ಸುದೀರ್ಘ ಉತ್ತರವನ್ನೂ ನೀಡಲಾಗಿದೆ. ದೇಶದ ಜಿಡಿಪಿಯು 7.14 ರಷ್ಟಿದ್ದರೆ, ರಾಜ್ಯದ ಜಿಡಿಪಿ 8.1 ರಷ್ಟಿದೆ. ರಾಜ್ಯದ ಬಜೆಟ್ನ ಗಾತ್ರ ಈ ಬಾರಿ ಕಳೆದ ವರ್ಷಕ್ಕಿಂತ 9.4 ರಷ್ಟು ಹೆಚ್ಚಿದೆ. ಕೇಂದ್ರ ಬಜೆಟ್ ಗಿಂತ ಕರ್ನಾಟಕದ ಬಜೆಟ್ ಉತ್ತಮವಾಗಿದೆ. ರಾಜ್ಯ ಜಿಎಸ್ ಟಿ ಸಂಗ್ರಹಣೆಯಲ್ಲಿ ದೇಶಕ್ಕೆ ಎರಡನೇ ಸ್ಥಾನದಲ್ಲಿದೆ, ಬಂಡವಾಳ ಹೂಡಿಕೆಯಲ್ಲಿಯೂ ರಾಜ್ಯ 2 ನೇ ಸ್ಥಾನದಲ್ಲಿದೆ. ಆದಾಗ್ಯೂ ರಾಜ್ಯದ ಆರ್ಥಿಕ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಬಿಜೆಪಿಯವರು ಕೇವಲ ರಾಜಕೀಯಕ್ಕಾಗಿ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ರಾಜ್ಯದ ಆರ್ಥಿಕ ಸ್ಥಿತಿ ಸುಭದ್ರವಾಗಿದೆ

ಬಿಜೆಪಿಯವರ ಪ್ರಣಾಳಿಕೆಯಲ್ಲಿ ಸರ್ಕಾರದ ಬೆಲೆಏರಿಕೆಯನ್ನು ಟೀಕಿಸಲಾಗಿದೆ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಎಲ್ ಪಿ ಜಿ ಸಿಲಿಂಡರ್ ಗೆ 414 ರೂ. ಇದ್ದದ್ದು , ಪ್ರಧಾನಿ ಮೋದಿಯವರು ಬಂದ ನಂತರ ಈಗ ಸುಮಾರು 1ಸಾವಿರ ವಾಗಿದೆ. ಅಂತೆಯೇ ಪೆಟ್ರೋಲ್, ಡೀಸೆಲ್ ನ ದರವನ್ನೂ ಕೇಂದ್ರ ಸರ್ಕಾರ ಹೆಚ್ಚಿಸಿದೆ. ದೇಶದ ವಿವಿಧ ರಾಜ್ಯಗಳಲ್ಲಿ ಬೆಲೆಏರಿಕೆಯನ್ನು ಹೋಲಿಸಿದರೆ, ರಾಜ್ಯದಲ್ಲಿ ಗಣನೀಯವಾಗಿ ಬೆಲೆಗಳು ಕಡಿಮಿಯಿದೆ. ಆದ್ದರಿಂದ ಕರ್ನಾಟಕದ ಹಣಕಾಸಿನ ಸ್ಥಿತಿ ಸುಭದ್ರವಾಗಿದ್ದು, ಬಿಜೆಪಿಯವರು ಸುಳ್ಳು ಹೇಳಿಕೆ ನೀಡುತ್ತಿದ್ದಾರೆ ಎಂದರು.

ಪ್ರಧಾನಿ ಮೋದಿಯವರ ಅವಧಿಯಲ್ಲಿ ರೂಪಾಯಿ ಮೌಲ್ಯ ಕುಸಿಯುತ್ತಿದೆ

ಪ್ರಧಾನಿ ಮೋದಿಯವರ ಅಧಿಕಾರಾವಧಿಯಲ್ಲಿ ಡಾಲರ್ ಬೆಲೆ ಹೆಚ್ಚುತ್ತಿದ್ದು, ರೂಪಾಯಿಯ ಮೌಲ್ಯ ಕುಸಿಯುತ್ತಿದೆ. ಅವರು ನೀಡಿದ ಭರವಸೆಗಳನ್ನು ಈಡೇರಿಸಲಿಲ್ಲ. ಅವರ ಅಚ್ಛೇ ದಿನಗಳು ಬರಲೇ ಇಲ್ಲ. ರೈತರ ಆದಾಯ ದುಪ್ಪಟ್ಟು, 2 ಕೋಟಿ ಉದ್ಯೋಗ, 15 ಲಕ್ಷ ಖಾತೆಗೆ ಹಣ ಎಂದಿದ್ದರೂ, ಒಂದು ಭರವಸೆಯನ್ನು ಈಡೇರಿಸಲಿಲ್ಲ ಎಂದರು.

ಬಿಜೆಪಿ ಅಪಪ್ರಚಾರದ ನಡುವೆ ಹಿಂದಿನ ಉಪಚುನಾವಣೆಗಳಲ್ಲಿ ಕಾಂಗ್ರೆಸ್ ಗೆಲುವು

ಬಿಜೆಪಿಯವರು ರಾಜ್ಯದಲ್ಲಿ ನಾಲ್ಕು ವರ್ಷ ಅಧಿಕಾರದಲ್ಲಿದ್ದಾಗ, ದಾವಣಗೆರೆ, ಬಾಗಲಕೋಟೆಗೆ ಯಾವ ಕೊಡುಗೆಯನ್ನೂ ನೀಡಿಲ್ಲ. ನಮ್ಮ ಸರ್ಕಾರ ಮುಂದಿನ ದಿನಗಳಲ್ಲಿಯೂ ಇನ್ನೂ ಹೆಚ್ಚಿನ ಅನುದಾನವನ್ನು ಜಿಲ್ಲೆಗಳಿಗೆ ನೀಡಲಿದೆ. ಬಿಜೆಪಿಯವರ ಅಪಪ್ರಚಾರದ ನಡುವೆಯೂ ಹಿಂದೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭಾರಿ ಬಹುಮತವನ್ನು ಸಾಧಿಸಿತ್ತು. ಮಾಜಿ ಮುಖ್ಯಮಂತ್ರಿಗಳ ಪುತ್ರರು ನಿಂತಿದ್ದ ಕ್ಷೇತ್ರದಲ್ಲಿ ಕಾಂಗ್ರೆಸ್ ನ ಅಭ್ಯರ್ಥಿಗಳು ಗೆಲುವು ಸಾಧಿಸಿದ್ದರು ಎಂದರು.

ಮತಪಟ್ಟಿಗಳನ್ನು ವ್ಯತ್ಯಾಸಗೊಳಿಸುವ ಅಧಿಕಾರ ಕೇಂದ್ರಸರ್ಕಾರದ ಅಧೀನದಲ್ಲಿರುವ ಕೇಂದ್ರ ಚುನಾವಣಾ ಆಯೋಗಕ್ಕೆ ಸೇರಿದೆ. ಇಂತಹ ಕೃತ್ಯಗಳಲ್ಲಿ ಕಾಂಗ್ರೆಸ್ ಎಂದಿಗೂ ಒಳಗೊಂಡಿಲ್ಲ. ಹಿಂದೆ ಎಂದಿಗೂ ಇರದಿದ್ದ ವೋಟ್ ಚೋರಿಯ ವಿಷಯ, ಪ್ರಧಾನಿ ಮೋದಿಯವರ ಅವಧಿಯಲ್ಲಿ ಕೇಳಿಬರುತ್ತಿದೆ. ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಉತ್ತಮವಾಗಿದೆ. ಜನರು ಬೆಂಬಲಿಸುವ ವಿಶ್ವಾಸವೂ ಇದೆ. ಸಚಿವ ಜಮೀರ್ ಅಹ್ಮದ್ ಖಾನ್ ಅವರು ಇಲ್ಲಿನ ಚುನಾವಣಾ ಪ್ರಚಾರದಲ್ಲಿ ಭಾಗಿಯಾಗಲಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷ ಕುಟುಂಬ ರಾಜಕಾರಣ ಮಾಡುತ್ತಿದೆ ಎನ್ನುವ ಬಿಜೆಪಿಯವರ ಟೀಕೆಗೆ ಪ್ರತಿಕ್ರಿಯಿಸಿ, ಯಡಿಯೂರಪ್ಪ ಮತ್ತು ದೇವೇಗೌಡರ ಕುಟುಂಬಗಳನ್ನು ಉಲ್ಲೇಖಿಸಿ ಜೆಡಿಎಸ್ ಹಾಗೂ ಬಿಜೆಪಿಯವರು ಕುಟುಂಬ ರಾಜಕಾರಣದಲ್ಲಿ ಭಾಗಿಯಾಗಿದ್ದು, ಅವರ ಕುಟುಂಬದ ಸದಸ್ಯರು ರಾಜಕೀಯದಲ್ಲಿ ಸಕ್ರಿಯವಾಗಿರುವುದನ್ನು ಕಾಣಬಹುದು ಎಂದರು.

Exit mobile version