ಬೆಂಗಳೂರು: ರಾಜ್ಯಾದ್ಯಂತ ಚಳಿಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜನರು ಬೆಚ್ಚನೆಯ ಬಟ್ಟೆಗಳನ್ನು ಧರಿಸಿದರೂ ನಡುಗುವಂತಹ ಸ್ಥಿತಿ ನಿರ್ಮಾಣವಾಗಿದೆ. ಹವಾಮಾನ ಇಲಾಖೆಯ ಮಾಹಿತಿಯ ಪ್ರಕಾರ, ಮುಂದಿನ ಐದು ದಿನಗಳವರೆಗೆ ಶೀತ ವಾತಾವರಣ ಮುಂದುವರಿಯಲಿದೆ. ದಕ್ಷಿಣ ಒಳನಾಡಿನಲ್ಲೂ ಶೀತ ಗಾಳಿ ಬೀಸುವ ಸಾಧ್ಯತೆಯಿದ್ದು, ಕೊಪ್ಪಳ, ಬಳ್ಳಾರಿ, ವಿಜಯನಗರ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ತೀವ್ರ ಚಳಿ ಅನುಭವವಾಗಲಿದೆ.
ರಾಜ್ಯದ ಹಲವು ಭಾಗಗಳಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ಗೆ ಇಳಿಯುವ ನಿರೀಕ್ಷೆಯಿದೆ. ಬೀದರ್, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಶೀತದ ಪ್ರಭಾವ ಹೆಚ್ಚಾಗಿರುವುದರಿಂದ, ಜನರು ಸಮತೋಲನ ಆಹಾರ ಸೇವನೆ ಮತ್ತು ಬೆಚ್ಚನೆಯ ಉಡುಪುಗಳನ್ನು ಧರಿಸುವಂತೆ ಸಲಹೆ ನೀಡಲಾಗಿದೆ. ಬೆಂಗಳೂರಿನಲ್ಲೂ ಮೈಕೊರೆಯುವ ಚಳಿ ಮುಂದುವರಿದಿದ್ದು, ಮಂಜು ಕವಿದ ವಾತಾವರಣವಿದೆ.
ಡಿಸೆಂಬರ್ 14ರಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೈಕೊರೆಯುವ ಚಳಿಯಿಂದ ಜನರು ತತ್ತರಿ ಹೋಗಿದ್ದಾರೆ. ಕಳೆದ ಎರಡು ದಿನಗಳಿಂದ ನಗರದಲ್ಲಿ ಕನಿಷ್ಠ ತಾಪಮಾನ 14-15 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಹೆಚ್‌ಎಎಲ್ ವ್ಯಾಪ್ತಿಯಲ್ಲಿ ನಿನ್ನೆ 13 ಡಿಗ್ರಿ ಸೆಲ್ಸಿಯಸ್ ತನಕ ಇಳಿಕೆಯಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಶೀತದ ಅಲೆಗಳು ಉಂಟಾಗುವ ಸಾಧ್ಯತೆಯಿದ್ದು, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಡಿಸೆಂಬರ್ 14, 15 ಮತ್ತು 16ರಂದು ಚಳಿ ಜೊತೆಗೆ ಶೀತಗಾಳಿ ಬೀಸುವ ಸಾಧ್ಯತೆಯಿದೆ. ಹಾಸನ, ಚಿಕ್ಕಬಳ್ಳಾಪುರ, ಶಿವಮೊಗ್ಗ, ದಾವಣಗೆರೆ, ಹಾವೇರಿ, ಬಳ್ಳಾರಿ, ಗದಗ, ಕೊಪ್ಪಳ, ಬಾಗಲಕೋಟೆ, ಧಾರವಾಡ ಮತ್ತು ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 9 ರಿಂದ 12 ಡಿಗ್ರಿ ಸೆಲ್ಸಿಯಸ್ ಮಟ್ಟಕ್ಕೆ ಇಳಿಯುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 12 ರಿಂದ 13 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಬೆಂಗಳೂರಿನಲ್ಲಿ 12 ರಿಂದ 14 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆಯಿದೆ.
ಉತ್ತರ ಭಾರತದಿಂದ ಒಣಹವೆ ಪ್ರವೇಶಿಸಿರುವುದೇ ಚಳಿ ಹೆಚ್ಚಾಗಲು ಪ್ರಮುಖ ಕಾರಣ ಎಂದು ಹವಾಮಾನ ಇಲಾಖೆಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಡಿಸೆಂಬರ್ 17ರ ನಂತರ ಚಳಿ ನಿಧಾನವಾಗಿ ಕಡಿಮೆಯಾಗಲಿದ್ದು, ತಾಪಮಾನ ಏರಿಕೆಯಾಗುವ ನಿರೀಕ್ಷೆಯಿದೆ.
ಬಿಸಿ ನೀರು ಬಳಸುವುದು, ಸಮತೋಲನ ಆಹಾರ ಸೇವನೆ, ಹೀಟರ್ ಬಳಕೆ ಮತ್ತು ಉಣ್ಣೆಯ ಬಟ್ಟೆಗಳನ್ನು ಧರಿಸುವುದು ಒಳಿತು ಎಂದು ಹವಾಮಾನ ಇಲಾಖೆ ಸೂಚಿಸಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಚಾಮರಾಜನಗರ, ಮೈಸೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಒಣಹವೆ ಮುಂದುವರಿಯಲಿದೆ.
ಉತ್ತರ ಒಳನಾಡು ಭಾಗದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಒಣಹವೆಯ ವಾತಾವರಣವಿದ್ದು, ಇದು ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಇಂದು ಮಂಜು ಮುಸುಕಿದ ವಾತಾವರಣವಿದ್ದು, ಚಳಿಯ ಪ್ರಮಾಣ ಹೆಚ್ಚುತ್ತಿದೆ. ಗಾಳಿಯ ವೇಗ ಪ್ರತಿ ಗಂಟೆಗೆ 8 ಕಿ.ಮೀ ಇರಲಿದೆ. ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ಇರಲಿದೆ.





