ಚಿತ್ರದುರ್ಗದಲ್ಲಿ ಭೀಕರ ಅಪಘಾತ: ಲಾರಿ-ಕಾರು ಡಿಕ್ಕಿಯಾಗಿ ಮೂವರು ಸಾವು

Untitled design 2025 05 12t081320.079

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನ ಹಳೆಹಳ್ಳಿ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ ದಾರುಣ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೆಲ್ಲಂಪಾಳ್ಯಂ ಮೂಲದ ಇನೋವಾ ಕಾರಿನ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಶಿವಮೊಗ್ಗ ಕಡೆಗೆ ತೆರಳುತ್ತಿದ್ದ ಕಾರಿಗೆ, ಚಿತ್ರದುರ್ಗ ಕಡೆಗೆ ಬರುತ್ತಿದ್ದ ಲಾರಿಯೊಂದು ಮುಖಾಮುಖಿ ಡಿಕ್ಕಿಯಾಗಿದ್ದು, ಈ ಘರ್ಷಣೆಯ ತೀವ್ರತೆಗೆ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.

ಮೃತರನ್ನು ಸಂಗೀತ (34), ಶ್ಯಾಂ ಬಾಬು (19), ಮತ್ತು ಶಿವನಾಗಲು (60) ಎಂದು ಗುರುತಿಸಲಾಗಿದೆ. ಈ ಮೂವರೂ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ವೆಲ್ಲಂಪಾಳ್ಯಂನವರು. ಘಟನೆಯಲ್ಲಿ ಕಾರು ಚಾಲಕ ಅಶೋಕ್ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಹೊಳಲ್ಕೆರೆ ಠಾಣೆಯ ಪೊಲೀಸ್ ಉಪನಿರೀಕ್ಷಕ (ಪಿಎಸ್‌ಐ) ಸಚ್ಚಿನ್ ನೇತೃತ್ವದ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಚಾಲಕರ ನಿರ್ಲಕ್ಷ್ಯವೇ ಈ ದುರಂತಕ್ಕೆ ಕಾರಣವೆಂದು ಪೊಲೀಸರು ಶಂಕಿಸಿದ್ದಾರೆ.

Exit mobile version