ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯನ್ನು ನೀಗಿಸಲು ಮತ್ತು ಶಿಕ್ಷಣದ ಗುಣಮಟ್ಟವನ್ನು ಉತ್ತಮಗೊಳಿಸಲು ರಾಜ್ಯ ಸರ್ಕಾರ ದಿಟ್ಟ ನಿರ್ಧಾರ ಕೈಗೊಂಡಿದೆ. ಶಿಕ್ಷಣ ಸಚಿವ ಮಧು ಬಂಗಾರಪ್ಪನವರು ಶೀಘ್ರವೇ 19,000 ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭವಾಗಲಿದೆ ಎಂದು ಘೋಷಿಸಿದ್ದಾರೆ.
ಬೆಂಗಳೂರಿನ ಕ್ರೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಆಯೋಜಿಸಿದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಒಳಮೀಸಲಾತಿ ಸಂಬಂಧ ನಿವೃತ್ತ ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯನ್ನು ಆಧರಿಸಿ ಈ ನೇಮಕಾತಿ ನಡೆಯಲಿದೆ ಎಂದು ತಿಳಿಸಿದರು. ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ ಶಾಲೆಗಳಿಗೆ 5,000 ಶಿಕ್ಷಕರನ್ನು ಮತ್ತು ರಾಜ್ಯದ ಇತರ ಭಾಗಗಳಿಗೆ 5,000 ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಗಳು ಈಗಾಗಲೇ ಬಜೆಟ್‌ನಲ್ಲಿ ಘೋಷಿಸಿದ್ದಾರೆ. ಇದರ ಜೊತೆಗೆ, ಒಂಬತ್ತು ಸಾವಿರ ಹೆಚ್ಚುವರಿ ಹುದ್ದೆಗಳನ್ನು ಸೇರಿಸಿ ಒಟ್ಟು 19,000 ಶಿಕ್ಷಕರನ್ನು ಭರ್ತಿ ಮಾಡುವ ಯೋಜನೆಯಿದೆ.
ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇದೆ ಎಂಬುದನ್ನು ಸಚಿವರು ಒಪ್ಪಿಕೊಂಡಿದ್ದಾರೆ. ಈ ಸಮಸ್ಯೆಯನ್ನು ಹಂತ-ಹಂತವಾಗಿ ಬಗೆಹರಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಶಿಕ್ಷಕರ ಕೊರತೆಯಿಂದಾಗಿ ವಿದ್ಯಾರ್ಥಿಗಳ ಶಿಕ್ಷಣದ ಮೇಲೆ ಆಗುತ್ತಿರುವ ಪರಿಣಾಮವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ, ಈ ಭರ್ಜರಿ ನೇಮಕಾತಿ ಘೋಷಣೆಯ ಮೂಲಕ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರುವ ಗುರಿಯನ್ನು ಹೊಂದಿದೆ.
ಇದೇ ವೇಳೆ, ಕಾಂಗ್ರೆಸ್ ಪಕ್ಷದ ಒತ್ತಡದಿಂದಾಗಿ ಕೇಂದ್ರ ಸರ್ಕಾರವು ಜನಗಣತಿಯ ಜೊತೆಗೆ ಜಾತಿ ಗಣತಿಯನ್ನೂ ನಡೆಸಲು ಮುಂದಾಗಿರುವುದನ್ನು ಸಚಿವರು ಸ್ವಾಗತಿಸಿದರು. ಈ ನಿರ್ಧಾರವು ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ (INC) ಪಕ್ಷದ ನಾಯಕ ರಾಹುಲ್ ಗಾಂಧಿಯವರ ದೀರ್ಘಕಾಲದ ಬೇಡಿಕೆಯಾದ ಜಾತಿ ಗಣತಿಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿರುವುದು ಕಾಂಗ್ರೆಸ್‌ನ ಗೆಲುವಿನ ಸಂಕೇತ ಎಂದು ಅವರು ಹೇಳಿದರು. ಈ ಗಣತಿಯು ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಅಸಮಾನತೆಗಳನ್ನು ಗುರುತಿಸಿ, ದುರ್ಬಲ ವರ್ಗಗಳ ಸಬಲೀಕರಣಕ್ಕೆ ದಾರಿ ಮಾಡಿಕೊಡಲಿದೆ. ಈ ಸಾಧನೆಯಲ್ಲಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಇತರ ಕಾಂಗ್ರೆಸ್ ನಾಯಕರ ಪಾತ್ರವನ್ನು ಸಚಿವರು ಶ್ಲಾಘಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಪದವೀಧರ ವಿಭಾಗದ ಅಧ್ಯಕ್ಷ ಎ.ಎನ್. ನಟರಾಜ ಗೌಡ, ಕಾರ್ಮಿಕರ ವಿಭಾಗದ ಅಧ್ಯಕ್ಷ ಪುಟ್ಟಸ್ವಾಮಿ ಗೌಡ, INTUC ಅಧ್ಯಕ್ಷ ಲಕ್ಷ್ಮೀ ವೆಂಕಟೇಶ್, ಪರಿಶಿಷ್ಟ ಜಾತಿ ಘಟಕದ ಅಧ್ಯಕ್ಷ ಧರ್ಮಸೇನ, ಪರಿಶಿಷ್ಟ ವಿಭಾಗದ ಅಧ್ಯಕ್ಷ ಎಂ. ವಿಜಯನಾಯಕ್, ಮಾಜಿ ಸೈನಿಕರ ವಿಭಾಗದ ಅಧ್ಯಕ್ಷ ಮಂಜುನಾಥ್ ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.