ಬೆಂಗಳೂರು: ಕರ್ನಾಟಕ ಉಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಕ್ರು ಶನಿವಾರ ರಾಜಭವನದ ಗಾಜಿನ ಮನೆಯಲ್ಲಿ ಜರುಗಿದ ಭವ್ಯ ಸಮಾರಂಭದಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ರಾಜ್ಯಪಾಲ ಥಾವರ್ ಚಂದ್ ಗೆಹೋಟ್ ಅವರು ಗೌರವಾನ್ವಿತ ಮುಖ್ಯ ನ್ಯಾಯಮೂರ್ತಿಗೆ ಪ್ರಮಾಣ ವಚನ ಬೋಧಿಸಿದರು. ಈ ಸಂದರ್ಭದಲ್ಲಿ ರಾಜ್ಯದ ಗಣ್ಯರು, ನ್ಯಾಯಮೂರ್ತಿಗಳು, ವಕೀಲರು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ವಿಭು ಬಕ್ರು ಅವರು ಈ ಹಿಂದೆ ದೆಹಲಿ ಹೈಕೋರ್ಟ್‌ನಲ್ಲಿ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದರು. 1966ರಲ್ಲಿ ನಾಗ್ಪುರದಲ್ಲಿ ಜನಿಸಿದ ಅವರು ದೆಹಲಿಯಲ್ಲಿ ತಮ್ಮ ಪ್ರಾಥಮಿಕ ಶಿಕ್ಷಣವನ್ನು ಪೂರೈಸಿದರು. 1987ರಲ್ಲಿ ಪದವಿ ಪಡೆದ ಬಕ್ರು, 1989ರಲ್ಲಿ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪದವಿಯನ್ನು ಪೂರ್ಣಗೊಳಿಸಿದರು. ಇದಾದ ನಂತರ, 1990ರಲ್ಲಿ ಕಾನೂನು ಪದವಿ ಪಡೆದು ದೆಹಲಿಯಲ್ಲಿ ವಕೀಲ ವೃತ್ತಿಯನ್ನು ಆರಂಭಿಸಿದರು. 2011ರಲ್ಲಿ ಹಿರಿಯ ವಕೀಲರಾಗಿ ಪದೋನ್ನತಿ ಪಡೆದ ಅವರು, 2013ರಲ್ಲಿ ದೆಹಲಿ ಹೈಕೋರ್ಟ್‌ನ ಹೆಚ್ಚುವರಿ ನ್ಯಾಯಮೂರ್ತಿಯಾಗಿ ನೇಮಕಗೊಂಡರು. 2015ರಲ್ಲಿ ಕಾಯಂ ನ್ಯಾಯಮೂರ್ತಿಯಾಗಿ ಸ್ಥಾನ ಪಡೆದ ಅವರು, 2024ರ ಡಿಸೆಂಬರ್ 5ರಿಂದ 2025ರ ಜನವರಿ 21ರವರೆಗೆ ಹಂಗಾಮಿ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದಾರೆ.
ಕರ್ನಾಟಕ ಹೈಕೋರ್ಟ್‌ಗೆ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿರುವ ವಿಭು ಬಕ್ರು ಅವರಿಗೆ ನ್ಯಾಯಾಂಗ ಕ್ಷೇತ್ರದಲ್ಲಿ ವಿಶಾಲವಾದ ಅನುಭವವಿದೆ. ದೆಹಲಿ ಹೈಕೋರ್ಟ್‌ನಲ್ಲಿ ಅವರು ನಿರ್ವಹಿಸಿದ ವಿವಿಧ ಪ್ರಕರಣಗಳು ಮತ್ತು ತೆಗೆದುಕೊಂಡ ತೀರ್ಮಾನಗಳು ಅವರನ್ನು ಒಬ್ಬ ಕುಶಲ ನ್ಯಾಯಾಧೀಶರನ್ನಾಗಿ ಗುರುತಿಸಿವೆ.
ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ. ಪಾಟೀಲ್, ನಗರಾಭಿವೃದ್ಧಿ ಸಚಿವ ಬಿ.ಎಸ್. ಸುರೇಶ್, ಕರ್ನಾಟಕ ಉಚ್ಚ ನ್ಯಾಯಾಲಯದ ಹಂಗಾಮಿ ನ್ಯಾಯಾಧೀಶ ವಿ. ಕಾಮೇಶ್ವರ ರಾವ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮ್ಮದ್, ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ, ವಿಧಾನಪರಿಷತ್ ಸದಸ್ಯ ನಾಗರಾಜ ಯಾದವ್, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನಿಶ್, ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಬಿ.ಬಿ. ಕಾವೇರಿ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.