ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಂಡಿದ್ದು, ರಾಜ್ಯದ ಹಲವು ಭಾಗಗಳಲ್ಲಿ ವರುಣನ ಆರ್ಭಟ ಮುಂದುವರಿದಿದೆ. ಹಲವು ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದೆ. ರಾಜ್ಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಇಂದು ಕೂಡ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯ ಮುನ್ಸೂಚನೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಜಾರಿಯಲ್ಲಿದೆ. ಇದರ ಜೊತೆಗೆ, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಮತ್ತು ಮೈಸೂರು ಜಿಲ್ಲೆಗಳಲ್ಲಿ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆಯಿಂದ ಯೆಲ್ಲೋ ಅಲರ್ಟ್ ಜಾರಿಯಲ್ಲಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. 30-40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಗರಿಷ್ಟ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಟ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ನಗರದಲ್ಲಿ ಮಳೆಯಿಂದಾಗಿ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಮತ್ತು ಕೆಲವು ಕಡಿಮೆ ಎತ್ತರದ ಪ್ರದೇಶಗಳಲ್ಲಿ ನೀರು ತುಂಬುವ ಸಾಧ್ಯತೆಯಿದೆ.
ಚಿಕ್ಕಮಗಳೂರಿನಲ್ಲಿ ಆರೆಂಜ್ ಅಲರ್ಟ್
ಮಲೆನಾಡು ಮತ್ತು ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಭಾರೀ ಮಳೆಯ ಮುನ್ಸೂಚನೆಯಿಂದ ಭಾರತೀಯ ಹವಾಮಾನ ಇಲಾಖೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಐದು ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಿದೆ. ಚಾರ್ಮಾಡಿ ಘಾಟ್‌ನಲ್ಲಿ ದಟ್ಟ ಮಂಜಿನಿಂದಾಗಿ ವಾಹನ ಸವಾರರು ತೊಂದರೆಗೀಡಾಗಿದ್ದಾರೆ. ಜಲಪಾತಗಳ ಸುತ್ತಮುತ್ತಲಿನ ಪ್ರದೇಶಗಳಿಗೆ ಪ್ರವಾಸಿಗರು ತೆರಳದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.
ಕರಾವಳಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನಲ್ಲಿ ಭಾರೀ ಮಳೆಯ ಮುನ್ಸೂಚನೆಯಿಂದಾಗಿ ಇಂದು ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಮತ್ತು ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಮಂಗಳೂರು ತಹಶೀಲ್ದಾರ್ ಮೀನುಗಾರರಿಗೆ ನದಿ ಮತ್ತು ಸಮುದ್ರ ತೀರಕ್ಕೆ ತೆರಳದಂತೆ ಆದೇಶ ಹೊರಡಿಸಿದ್ದಾರೆ. ಇದೇ ರೀತಿ, ಬಂಟ್ವಾಳ ತಾಲೂಕಿನಲ್ಲಿ ಅಂಗನವಾಡಿಯಿಂದ ಪ್ರೌಢ ಶಾಲೆವರೆಗಿನ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ. ಉಳ್ಳಾಲ ತಾಲೂಕಿನ ಶಾಲೆಗಳಿಗೂ ರಜೆ ಘೋಷಿಸಲಾಗಿದೆ. ಭಾರೀ ಮಳೆಯಿಂದಾಗಿ ಕರಾವಳಿ ಪ್ರದೇಶದಲ್ಲಿ ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.
ಕೊಡಗಿನಲ್ಲಿ ರೆಡ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಕೆಲವು ಕಡಿಮೆ ಎತ್ತರದ ಪ್ರದೇಶಗಳಲ್ಲಿ ಪ್ರವಾಹದ ಭೀತಿಯಿದೆ. ಜಿಲ್ಲಾಡಳಿತವು ಜನರಿಗೆ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಪ್ರವಾಸಿಗರು ಜಲಪಾತಗಳು ಮತ್ತು ನದಿ ತೀರದ ಪ್ರದೇಶಗಳಿಗೆ ತೆರಳದಂತೆ ಎಚ್ಚರಿಕೆ ನೀಡಲಾಗಿದೆ.