ಕರ್ನಾಟಕದಲ್ಲಿ ಮುಂಗಾರು ಚುರುಕು: ಕರಾವಳಿ ಸೇರಿ ಹಲವು ಜಿಲ್ಲೆಗಳಿಗೆ ಭಾರಿ ಮಳೆ

Untitled design 2026 06 12T103455.426

ಬೆಂಗಳೂರು, ಜೂನ್ 12:  ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಮುಂದಿನ ಕೆಲವು ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ಗಂಟೆಗಳಿಂದಲೇ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೂರು ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಗಂಟೆಗೆ ಸುಮಾರು 30 ರಿಂದ 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಕಡಲ ತೀರ ಪ್ರದೇಶಗಳಲ್ಲಿ ವಾಸಿಸುವ ಜನರು ಹೆಚ್ಚಿನ ಜಾಗರೂಕತೆ ವಹಿಸುವಂತೆ ಸೂಚಿಸಲಾಗಿದೆ. ಸಮುದ್ರದ ಅಲೆಗಳ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ದೋಣಿ ಹಾಗೂ ಮೀನುಗಾರಿಕಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ಸಲಹೆ ನೀಡಲಾಗಿದೆ.

ಉತ್ತರ ಒಳನಾಡಿನ ಜಿಲ್ಲೆಗಳಾದ ಧಾರವಾಡ, ಹಾವೇರಿ ಮತ್ತು ಗದಗ ಪ್ರದೇಶಗಳಲ್ಲಿ ಗುಡುಗು, ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಭಾಗಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ ವೇಗದ ಗಾಳಿ ಬೀಸುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿಯಲ್ಲಿ ಹಗುರದಿಂದ ಮಳೆಯಾಗುವ ನಿರೀಕ್ಷೆಯಿದೆ.

ಮಲೆನಾಡು ಭಾಗದಲ್ಲೂ ಮಳೆ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಲಾಗಿದ್ದು, ಈ ಭಾಗಕ್ಕೂ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ಬೆಟ್ಟಗುಡ್ಡ ಪ್ರದೇಶಗಳಲ್ಲಿ ಭೂಕುಸಿತ ಹಾಗೂ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಇರಬೇಕು ಎಂದು ಇಲಾಖೆ ಸೂಚಿಸಿದೆ.

ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದೆ. ಈ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಹವಾಮಾನ ಇಲಾಖೆ ಸಾರ್ವಜನಿಕರಿಗೆ ಹಾಗೂ ರೈತರಿಗೆ ಮುನ್ನೆಚ್ಚರಿಕೆ ನೀಡಿದ್ದು, ಹಳೆಯ ಕಟ್ಟಡಗಳು, ಮರಗಳು ಹಾಗೂ ವಿದ್ಯುತ್ ಕಂಬಗಳ ಬಳಿ ನಿಲ್ಲುವುದನ್ನು ತಪ್ಪಿಸಲು ಸೂಚಿಸಿದೆ. ಮುಂದಿನ 48 ರಿಂದ 72 ಗಂಟೆಗಳು ರಾಜ್ಯದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇರುವುದರಿಂದ ತುರ್ತು ಪರಿಸ್ಥಿತಿಗೆ ಸಿದ್ಧರಾಗಿರಲು ಜಿಲ್ಲಾಡಳಿತಗಳು ಕ್ರಮ ಕೈಗೊಳ್ಳುವ ನಿರೀಕ್ಷೆಯಿದೆ

Exit mobile version