ಬೆಂಗಳೂರು, ಜೂನ್ 15: ಕರ್ನಾಟಕದಲ್ಲಿ ಮುಂಗಾರು ಮಳೆಯ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಮುಂದಿನ ಎರಡರಿಂದ ಮೂರು ದಿನಗಳ ಕಾಲ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಕರಾವಳಿ, ದಕ್ಷಿಣ ಒಳನಾಡು ಹಾಗೂ ಕೆಲವು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯ ನಿರೀಕ್ಷೆಯಿದೆ.
ದೇಶದ ವಿವಿಧ ಭಾಗಗಳಲ್ಲಿ ಮುಂಗಾರು ಮತ್ತಷ್ಟು ಚುರುಕುಗೊಂಡಿದ್ದು, ಅದರ ಪರಿಣಾಮ ಕರ್ನಾಟಕದಲ್ಲೂ ಮಳೆ ಹೆಚ್ಚಾಗಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿಯಂತೆ, ಮುಂದಿನ 48 ರಿಂದ 72 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಭಾಗಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ಗಾಳಿ ವೇಗವೂ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಮೀನುಗಾರರು ಎಚ್ಚರಿಕೆಯಿಂದ ಇರಬೇಕೆಂದು ಸೂಚಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿಯಲಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಹಾಗೂ ತುಮಕೂರು ಜಿಲ್ಲೆಗಳಲ್ಲಿ ಗುಡುಗು ಮತ್ತು ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಪ್ರದೇಶಗಳಲ್ಲಿ ಅಲ್ಪಾವಧಿಯ ಭಾರೀ ಮಳೆಯೂ ದಾಖಲಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜಧಾನಿ ಬೆಂಗಳೂರಿನಲ್ಲಿ ಕಳೆದ ಕೆಲವು ದಿನಗಳಿಂದ ಮೋಡ ಕವಿದ ವಾತಾವರಣ ಮುಂದುವರಿದಿದ್ದು, ಇಂದು ಸಹ ನಗರದ ಹಲವೆಡೆ ಮಳೆಯಾಗುವ ನಿರೀಕ್ಷೆಯಿದೆ. ಬೆಳಗ್ಗಿನಿಂದಲೇ ಮೋಡಕವಿದ ವಾತಾವರಣ ಕಂಡುಬಂದಿದ್ದು, ಸಂಜೆ ಮತ್ತು ರಾತ್ರಿ ವೇಳೆ ಮಳೆಯ ಹೆಚ್ಚಾಗುವ ಸಾಧ್ಯತೆಯಿದೆ.
ಹವಾಮಾನ ಇಲಾಖೆ ಪ್ರಕಾರ ಬೆಂಗಳೂರಿನ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಹಾಗೂ ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ಸಾಧ್ಯತೆ ಇದೆ. ನಗರದಲ್ಲಿ ಗಂಟೆಗೆ ಸುಮಾರು 20 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ನಿರೀಕ್ಷೆಯಿದೆ. ಮಳೆಯ ಪರಿಣಾಮವಾಗಿ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.
ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿಯೂ ಮಳೆಯ ಚಟುವಟಿಕೆ ಮುಂದುವರಿಯಲಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲಕರ ವಾತಾವರಣ ನಿರ್ಮಾಣವಾಗುವ ಸಾಧ್ಯತೆ ಇದೆ. ರೈತರು ಹವಾಮಾನ ಇಲಾಖೆಯ ಮುನ್ಸೂಚನೆಗಳನ್ನು ಗಮನದಲ್ಲಿಟ್ಟುಕೊಂಡು ಕೃಷಿ ಕಾರ್ಯಗಳನ್ನು ಯೋಜಿಸಬೇಕೆಂದು ತಜ್ಞರು ಸಲಹೆ ನೀಡಿದ್ದಾರೆ.





