ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತೆ ಚುರುಕಾಗಿದೆ. ಬೆಂಗಳೂರಿನಲ್ಲೂ ತುಂತುರು ಮಳೆ ಆರಂಭವಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಹವಾಮಾನ ಇಲಾಖೆಯಿಂದ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ನಡುವೆ, ಭಾರಿ ಮಳೆಯಿಂದ ಕೊಡಗು ಜಿಲ್ಲೆಯ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಜುಲೈ 07ರಂದು ರಜೆ ಘೋಷಿಸಲಾಗಿದೆ. ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಈ ಆದೇಶ ಹೊರಡಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಸತತವಾಗಿ ಸುರಿಯುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಈ ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಅಂಗನವಾಡಿಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ಒಂದು ದಿನದ ರಜೆಯನ್ನು ಘೋಷಿಸಲಾಗಿದೆ. ಕಾವೇರಿ ನದಿ ಉಕ್ಕಿ ಹರಿಯುತ್ತಿದ್ದು, ಜಿಲ್ಲೆಯ ಕೆಲವು ಪ್ರದೇಶಗಳು ಜಲಾವೃತಗೊಂಡಿವೆ. ಕೊಡಗಿನ ಹಲವೆಡೆ ಭಾರಿ ಮಳೆಯಿಂದ ರಸ್ತೆಗಳು ಮತ್ತು ಕೃಷಿ ಭೂಮಿಗಳು ನೀರಿನಲ್ಲಿ ಮುಳುಗಿವೆ.
ರಾಜ್ಯದಾದ್ಯಂತ ಮಳೆಯ ಮುಂದುವರಿಕೆ
ಹವಾಮಾನ ಇಲಾಖೆಯ ಪ್ರಕಾರ, ಜುಲೈ 07ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮತ್ತು ದಕ್ಷಿಣ ಕನ್ನಡದಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ. ಈ ಜಿಲ್ಲೆಗಳಿಗೆ ವಿಶೇಷ ಎಚ್ಚರಿಕೆ ನೀಡಲಾಗಿದೆ. ಇನ್ನು, ಬೆಂಗಳೂರು ಸೇರಿದಂತೆ ರಾಜ್ಯದ ಇತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವ ಇದೆ ಎಂದು ವರದಿಯಾಗಿದೆ. ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಜಾರಿಯಲ್ಲಿದ್ದು, ಜನರು ಮುಂಜಾಗ್ರತೆ ವಹಿಸುವಂತೆ ಸೂಚಿಸಲಾಗಿದೆ.
ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡ್ಲೂರು ಗ್ರಾಮದಲ್ಲಿ ಭಾರಿ ಮಳೆ ಮತ್ತು ತೀವ್ರ ಗಾಳಿಯಿಂದ ಲೋಕೇಶ್ ಎಂಬುವವರ ಕೊಟ್ಟಿಗೆ ಕುಸಿದು ಬಿದ್ದಿದೆ. ಈ ಘಟನೆಯಿಂದ ಯಾವುದೇ ಜೀವಹಾನಿ ವರದಿಯಾಗಿಲ್ಲವಾದರೂ, ಆಸ್ತಿಪಾಸ್ತಿಗೆ ಹಾನಿಯಾಗಿದೆ. ಇದೇ ರೀತಿ, ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಮರಾಠಿಕೊಪ್ಪದ ಜೋಡುಕಟ್ಟೆಯಲ್ಲಿ ಒಬ್ಬರ ಮನೆ ಭಾರಿ ಮಳೆಗೆ ಕುಸಿದು ಬಿದ್ದಿದೆ. ಮಳೆಯಿಂದ ಮನೆಯ ಹಿಂಬದಿಯ ಮಣ್ಣು ಕುಸಿದು ಗೋಡೆಯಲ್ಲಿ ಬಿರುಕು ಮೂಡಿತ್ತು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಅಧಿಕಾರಿಗಳು, ಕುಟುಂಬ ಸದಸ್ಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಸೂಚಿಸಿದ್ದರು.
ಭಾರಿ ಮಳೆಯಿಂದ ಉಂಟಾಗಬಹುದಾದ ಅಪಾಯಗಳನ್ನು ತಡೆಗಟ್ಟಲು ಜಿಲ್ಲಾಡಳಿತಗಳು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿವೆ. ಕೊಡಗು ಮತ್ತು ಕರಾವಳಿ ಜಿಲ್ಲೆಗಳಲ್ಲಿ ನದಿಗಳು, ಕೆರೆ-ಕಟ್ಟೆಗಳು ಉಕ್ಕಿ ಹರಿಯುತ್ತಿರುವುದರಿಂದ, ಜನರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕೆಂದು ಎಚ್ಚರಿಕೆ ನೀಡಲಾಗಿದೆ.