ಬೆಂಗಳೂರು, ಜು. 7: ರಾಜ್ಯದ ಹಲವು ಕಡೆ ಮಳೆ ಅಬ್ಬರ ಮುಂದುವರೆದ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಾಳೆಯೂ ಹಲವು ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ ನೀಡಲಾಗಿದೆ. ಶಿವಮೊಗ್ಗ, ಕೊಡಗು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಅಲ್ಲಿನ ವಿವಿಧ ತಾಲೂಕುಗಳ ಶಾಲಾ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ. ಜುಲೈ 8ರಂದು ಈ ರಜೆ ಜಾರಿಯಲ್ಲಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ರಜೆ:
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆ ಸಾಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ ತಹಶೀಲ್ದಾರ್ ಪ್ರತಿಭಾ ಅವರು ಶಾಲೆ-ಕಾಲೇಜುಗಳಿಗೆ ರಜೆ ನೀಡಿ ಆದೇಶ ಹೊರಡಿಸಿದ್ದಾರೆ. ಸಾಗರ ಭಾಗದಲ್ಲಿ ಮಳೆಯಿಂದ ಹಲವು ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗುವ ಭೀತಿ ಎದುರಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯ ದೃಷ್ಟಿಯಿಂದ ಈ ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ.
ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್
ಕೊಡಗು ಜಿಲ್ಲೆಯಲ್ಲಿ ಹವಾಮಾನ ಇಲಾಖೆಯು ಆರೆಂಜ್ ಅಲರ್ಟ್ ಘೋಷಿಸಿರುವ ಹಿನ್ನೆಲೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ನಾಳೆ ರಜೆ ನೀಡಲಾಗಿದೆ. ಜಿಲ್ಲಾಧಿಕಾರಿ ಸೋಮಶೇಖರ್ ಅವರು ಶಾಲೆಗಳಿಗೆ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ. ಕಳೆದ ಎರಡು ದಿನಗಳಿಂದ ಕೊಡಗಿನಲ್ಲಿ ಉತ್ತಮ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಜುಲೈ 9ರ ಬೆಳಗ್ಗೆ 8.30ರ ವರೆಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಕೊಡಗಿನಲ್ಲಿ ಪ್ರವಾಹದ ಭೀತಿ
ಕೊಡಗಿನಲ್ಲಿ ಮಳೆಯಿಂದ ಹಳ್ಳ-ಕೊಳ್ಳಗಳು ತುಂಬಿವೆ. ಕಾವೇರಿ ನದಿ ತುಂಬಿ ಹರಿಯುತ್ತಿದೆ. ಮಳೆ ಕೊರತೆಯಲ್ಲಿದ್ದ ಕೊಡಗಿನಲ್ಲಿ ಈಗ ಧಾರಾಕಾರ ಮಳೆ ಸುರಿಯುತ್ತಿದೆ. ನದಿ ಸಮೀಪದ ಜನರು, ಗುಡ್ಡ-ಬೆಟ್ಟಗಳ ತಪ್ಪಲಿನಲ್ಲಿ ವಾಸಿಸುವ ಜನರು ತೀವ್ರ ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ. ಗುರುವಾರ (ಜುಲೈ 9) ಬೆಳಿಗ್ಗೆ 8.30 ರವರೆಗೆ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಮುಂದುವರಿಯಲಿದ್ದು, ಇನ್ನೆರೆಡು ದಿನ ಕೊಡಗಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ಬೆಳಗಾವಿ ಜಿಲ್ಲೆಯಲ್ಲಿ ಮೂರು ತಾಲೂಕುಗಳಿಗೆ ರಜೆ
ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳಲ್ಲಿ ರಜೆ ನೀಡಲಾಗಿದೆ. ನಿಪ್ಪಾಣಿ, ಖಾನಾಪುರ ಮತ್ತು ಬೆಳಗಾವಿ ತಾಲೂಕಿನ ಶಾಲೆ-ಕಾಲೇಜು ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಈ ಭಾಗಗಳಲ್ಲೂ ಸತತವಾಗಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸ್ಥಗಿತಗೊಂಡಿದೆ. ಬೆಳಗಾವಿಯಲ್ಲಿ ಘಟಪ್ರಭಾ ಮತ್ತು ಕೃಷ್ಣಾ ನದಿಗಳಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವ ಭೀತಿ ಎದುರಾಗಿದೆ.
ಜಿಲ್ಲಾಡಳಿತದ ಮುನ್ನೆಚ್ಚರಿಕೆ
ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ಜಿಲ್ಲಾಡಳಿತವು ಸಾರ್ವಜನಿಕರು ಅನಗತ್ಯವಾಗಿ ನದಿ, ಹಳ್ಳ, ಜಲಪಾತಗಳ ಬಳಿ ಹೋಗಬಾರದು ಎಂದು ಸೂಚಿಸಿದೆ. ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
