ಬೆಂಗಳೂರು: ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಮಾಜಿ ಸಚಿವ ಹಾಗೂ ಶಾಸಕ ಬೈರತಿ ಬಸವರಾಜ್ ಅವರಿಗೆ ಕರ್ನಾಟಕ ಹೈಕೋರ್ಟ್ ತಾತ್ಕಾಲಿಕ ರಿಲೀಫ್ ನೀಡಿದೆ. ಹೈಕೋರ್ಟ್ ಏಕಸದಸ್ಯ ಪೀಠವು ಬೈರತಿ ಬಸವರಾಜ್‌ಗೆ ಮಧ್ಯಂತರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿ ಮಹತ್ವದ ಆದೇಶ ಹೊರಡಿಸಿದೆ.
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಬೈರತಿ ಬಸವರಾಜ್ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡ ಬೆನ್ನಲ್ಲೇ, ಅವರನ್ನು ಬಂಧಿಸುವ ಸಾಧ್ಯತೆ ಎದುರಾಗಿತ್ತು. ಈ ಹಿನ್ನೆಲೆ, ಮಾಜಿ ಸಚಿವರು ಹೈಕೋರ್ಟ್ ಮೆಟ್ಟಿಲೇರಿದ್ದು, ಇಂದು ಅರ್ಜಿ ವಿಚಾರಣೆ ನಡೆಯಿತು. ಬೈರತಿ ಬಸವರಾಜ್ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ವಾದ ಮಂಡಿಸಿದರು.
ವಕೀಲರ ವಾದದಲ್ಲಿ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದ್ದಾರೆ. ಆದರೆ ಆ ಚಾರ್ಜ್‌ಶೀಟ್‌ನಲ್ಲಿ ಬೈರತಿ ಬಸವರಾಜ್ ಅವರ ಪಾತ್ರದ ಬಗ್ಗೆ ಯಾವುದೇ ಉಲ್ಲೇಖವಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದರು. ದೂರು ಹಾಗೂ ಎಫ್‌ಐಆರ್‌ನಲ್ಲಿಯೂ ಬೈರತಿ ಬಸವರಾಜ್ ಹೆಸರು ಸೇರಿಸಿಲ್ಲ ಎಂದು ವಾದಿಸಿದರು.
ಇದಲ್ಲದೆ, ಪ್ರಕರಣಕ್ಕೆ ಸಂಬಂಧಿಸಿದ ದೂರು ಸಂಪೂರ್ಣವಾಗಿ ಆಸ್ತಿ ವಿಚಾರಕ್ಕೆ ಸೀಮಿತವಾಗಿದೆ. ಕೊಲೆ ಪ್ರಕರಣದಲ್ಲಿ ಬೈರತಿ ಬಸವರಾಜ್ ಅವರ ಪಾತ್ರವಿಲ್ಲ. ಆದರೂ ರಾಜಕೀಯ ಕಾರಣಗಳಿಂದ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲು ಯತ್ನಿಸಲಾಗುತ್ತಿದೆ ಎಂದು ವಕೀಲರು ಆರೋಪಿಸಿದರು.
ಪ್ರಕರಣವನ್ನು ಸಿಐಡಿಗೆ ವರ್ಗಾವಣೆ ಮಾಡಿದ ನಂತರ, ಅಕ್ರಮವಾಗಿ ಬಂಧನಕ್ಕೆ ಮುಂದಾಗುವ ಪ್ರಯತ್ನ ನಡೆಯುತ್ತಿದೆ ಎಂಬುದನ್ನು ಉಲ್ಲೇಖಿಸಿ, ಬೈರತಿ ಬಸವರಾಜ್ ಪರವಾಗಿ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಲಾಯಿತು. ಕೊಲೆ ಪ್ರಕರಣದ ತನಿಖೆಗೆ ಸಂಪೂರ್ಣ ಸಹಕಾರ ನೀಡಲು ತಾವು ಸಿದ್ಧರಿದ್ದೇವೆ ಎಂದು ಕೂಡ ತಿಳಿಸಲಾಯಿತು.
ಇದಕ್ಕೆ ಪ್ರತಿಯಾಗಿ ಸರ್ಕಾರಿ ವಕೀಲರು, ವಿಶೇಷ ಸಾರ್ವಜನಿಕ ಅಭಿಯೋಜಕ ಜಗದೀಶ್ ವಿದೇಶಕ್ಕೆ ತೆರಳಿರುವ ಕಾರಣ, ವಿಚಾರಣೆಯನ್ನು ಮುಂದೂಡಬೇಕು ಎಂದು ಹೈಕೋರ್ಟ್‌ಗೆ ಮನವಿ ಮಾಡಿದರು. ಆದರೂ, ವಾದ–ಪ್ರತಿವಾದ ಆಲಿಸಿದ ಹೈಕೋರ್ಟ್, ಬೈರತಿ ಬಸವರಾಜ್‌ಗೆ ರಿಲೀಫ್ ನೀಡುವುದು ಸೂಕ್ತವೆಂದು ಅಭಿಪ್ರಾಯಪಟ್ಟಿತು.
ಹೈಕೋರ್ಟ್ ಆದೇಶದಲ್ಲಿ, ಬೈರತಿ ಬಸವರಾಜ್ ಬಂಧನವಾದರೆ ತಕ್ಷಣ ಬಿಡುಗಡೆ ಮಾಡಬೇಕು ಎಂದು ಸ್ಪಷ್ಟ ಸೂಚನೆ ನೀಡಿದೆ. ಜೊತೆಗೆ, ಅವರು ತನಿಖೆಗೆ ಸಂಪೂರ್ಣವಾಗಿ ಸಹಕರಿಸಬೇಕು ಎಂದು ನಿರ್ದೇಶನ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಸಿಐಡಿ ಪೊಲೀಸರಿಗೆ ನೋಟಿಸ್ ಜಾರಿಗೊಳಿಸಲಾಗಿದ್ದು, ಮುಂದಿನ ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಲಾಗಿದೆ.





