ಅಕ್ರಮ ಬಾಂಗ್ಲಾ ವಲಸಿಗರ ಮಾಹಿತಿ ನೀಡಿದವರ ಬಂಧನ; ಪೊಲೀಸರಿಗೆ ಹೈಕೋರ್ಟ್ ತರಾಟೆ!

ಪೊಲೀಸರ (19)

ಬೆಂಗಳೂರು, (ಜುಲೈ 28): ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶ ಮೂಲದ ವಲಸಿಗರ ಕುರಿತು ಮಾಹಿತಿ ನೀಡಿದ್ದ ವ್ಯಕ್ತಿಯನ್ನೇ ಬಂಧಿಸಿದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಕರ್ನಾಟಕ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಪೀಠ, ಇದು ಕಾನೂನು ಪ್ರಕ್ರಿಯೆಯ ದುರುಪಯೋಗ ಎಂದು ಅಭಿಪ್ರಾಯ ವ್ಯಕ್ತಪಡಿಸಿ, ಅರ್ಜಿದಾರರ ವಿರುದ್ಧ ದಾಖಲಿಸಿದ್ದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.

ಪ್ರಕರಣದ ವಿವರಗಳ ಪ್ರಕಾರ, ನಗರದ ನಿವಾಸಿ ಡಾ. ನಾಗೇಂದ್ರಪ್ಪ ಅವರು ಜುಲೈ 22ರಂದು ರಾತ್ರಿ 11.30ರ ಸುಮಾರಿಗೆ ಬೆಳ್ಳಂದೂರು ಪೊಲೀಸ್ ಠಾಣೆಗೆ ಅಕ್ರಮ ಬಾಂಗ್ಲಾದೇಶಿ ವಲಸಿಗರು ನಗರದಲ್ಲಿ ನೆಲೆಸಿದ್ದಾರೆ ಎಂದು ದೂರು ನೀಡಿದ್ದರು. ಆದರೆ ಕೇವಲ 15 ನಿಮಿಷಗಳಲ್ಲೇ, ರಾತ್ರಿ 11.45ಕ್ಕೆ, ನಾಗೇಂದ್ರಪ್ಪ ವಿರುದ್ಧವೇ ಮತ್ತೊಂದು ದೂರು ದಾಖಲಿಸಿ ಪೊಲೀಸರು ಅವರನ್ನು ಬಂಧಿಸಿದ್ದರು.

ಪೊಲೀಸರ ಕ್ರಮದ ಬಗ್ಗೆ ಹೈಕೋರ್ಟ್ ತೀವ್ರ ಅಸಮಾಧಾನ

ಈ ಕ್ರಮವನ್ನು ಪ್ರಶ್ನಿಸಿ ನಾಗೇಂದ್ರಪ್ಪ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ವೇಳೆ ನ್ಯಾಯಾಲಯವು ಪೊಲೀಸರ ಕ್ರಮದ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. “ಅಕ್ರಮ ವಲಸಿಗರ ಬಗ್ಗೆ ಮಾಹಿತಿ ನೀಡಿದವರ ವಿರುದ್ಧವೇ ಪ್ರಕರಣ ದಾಖಲಿಸುವುದು ಯಾವ ರೀತಿಯ ಕಾನೂನು ಪ್ರಕ್ರಿಯೆ?” ಎಂದು ಪ್ರಶ್ನಿಸಿದ ನ್ಯಾಯಪೀಠ, ಈ ರೀತಿಯ ನಡೆ ಕಾನೂನು ವ್ಯವಸ್ಥೆಯ ಮೇಲಿನ ಸಾರ್ವಜನಿಕರ ವಿಶ್ವಾಸಕ್ಕೆ ಧಕ್ಕೆಯುಂಟು ಮಾಡುತ್ತದೆ ಎಂದು ಅಭಿಪ್ರಾಯಪಟ್ಟಿತು.

ಪೊಲೀಸರನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ವಿಚಾರಣೆ ವೇಳೆ ನ್ಯಾಯಮೂರ್ತಿಗಳು, “ಬೆಂಗಳೂರು ನಿವಾಸಿಗಳಿಗಿಂತ ಅಕ್ರಮ ವಲಸಿಗರೇ ಮುಖ್ಯವೇ? ದೇಶದ ಭದ್ರತೆಗೆ ಸಂಬಂಧಿಸಿದ ಮಾಹಿತಿಯನ್ನು ನೀಡಿದ ವ್ಯಕ್ತಿಯ ವಿರುದ್ಧವೇ ಪ್ರಕರಣ ದಾಖಲಿಸಿರುವುದು ಹೇಗೆ?” ಎಂದು ಪೊಲೀಸರನ್ನು ತರಾಟೆಗೆ ತೆಗೆದುಕೊಂಡರು. ಸರ್ಕಾರ ಮತ್ತು ಪೊಲೀಸ್ ಇಲಾಖೆ ಅಕ್ರಮ ವಲಸಿಗರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವ ಬದಲು ಮಾಹಿತಿ ನೀಡಿದವರನ್ನೇ ಗುರಿಯಾಗಿಸುತ್ತಿದೆಯೇ ಎಂಬ ಪ್ರಶ್ನೆಯನ್ನೂ ನ್ಯಾಯಾಲಯ ಎತ್ತಿತು.

ಇದೇ ವೇಳೆ, ಅಕ್ರಮವಾಗಿ ದೇಶದಲ್ಲಿ ನೆಲೆಸಿರುವ ವಿದೇಶಿ ಪ್ರಜೆಗಳ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚನೆ ನೀಡಿದೆ. ಪ್ರಕರಣದಲ್ಲಿ ಬಾಂಗ್ಲಾದೇಶ ಮೂಲದ ಮಹಿಳೆ ನೀಡಿದ ದೂರಿನ ಆಧಾರದ ಮೇಲೆ ಭಾರತೀಯ ಪ್ರಜೆಯ ವಿರುದ್ಧ ಎಫ್‌ಐಆರ್ ದಾಖಲಿಸಿರುವ ಕುರಿತು ಪೊಲೀಸರು ಸಮರ್ಪಕ ವಿವರಣೆ ನೀಡಬೇಕು ಎಂದು ನ್ಯಾಯಾಲಯ ತಾಕೀತು ಮಾಡಿದೆ.

ಈ ಪ್ರಕರಣದ ಮುಂದಿನ ವಿಚಾರಣೆ ವೇಳೆ ಬೆಳ್ಳಂದೂರು ಪೊಲೀಸರು ತಮ್ಮ ಕ್ರಮಕ್ಕೆ ಕಾರಣಗಳನ್ನು ನ್ಯಾಯಾಲಯದ ಮುಂದೆ ವಿವರಿಸಬೇಕಿದೆ. ಹೈಕೋರ್ಟ್‌ನ ಈ ಅಭಿಪ್ರಾಯ ಅಕ್ರಮ ವಲಸಿಗರ ವಿಚಾರದಲ್ಲಿ ಪೊಲೀಸ್ ಕಾರ್ಯವೈಖರಿಯ ಕುರಿತು ಹೊಸ ಚರ್ಚೆಗೆ ಕಾರಣವಾಗಿದೆ.

Exit mobile version