ಬೆಂಗಳೂರು: ಜನರ ಕುಂದುಕೊರತೆಗಳನ್ನು ಸ್ಥಳದಲ್ಲೇ ಆಲಿಸಿ, ಸಾಧ್ಯವಾದಷ್ಟು ಶೀಘ್ರವಾಗಿ ಪರಿಹಾರ ಒದಗಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ಪ್ರಜಾಸೇವಾ ಇಲಾಖೆಗೆ ಇಂದು ಅಧಿಕೃತ ಚಾಲನೆ ದೊರೆಯಲಿದೆ. ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮರುದಿನವೇ ಡಿ.ಕೆ. ಶಿವಕುಮಾರ್ ಅವರು ಪ್ರಜಾಸೇವಾ ಇಲಾಖೆಯ ಪರಿಕಲ್ಪನೆಯನ್ನು ಘೋಷಿಸಿದ್ದರು. ಇದೀಗ ಈ ಯೋಜನೆ ಕಾರ್ಯರೂಪಕ್ಕೆ ಬರುತ್ತಿದ್ದು, ಸರ್ಕಾರದ ಸೇವೆಗಳನ್ನು ಜನರ ಮನೆಬಾಗಿಲಿಗೆ ತಲುಪಿಸುವ ಪ್ರಮುಖ ಹೆಜ್ಜೆಯಾಗಿದೆ.
ಜನರ ಅಹವಾಲುಗಳನ್ನು ಕಚೇರಿಗಳಿಗೆ ಅಲೆದಾಡಿಸದೆ, ಅವರಿರುವ ಸ್ಥಳದಲ್ಲಿಯೇ ಆಲಿಸಿ ಪರಿಹಾರ ಕಲ್ಪಿಸುವುದು ಪ್ರಜಾಸೇವಾ ಆಂದೋಲನದ ಪ್ರಮುಖ ಉದ್ದೇಶವಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳು, ತಾಲೂಕುಗಳು ಹಾಗೂ ಹೋಬಳಿ ಮಟ್ಟದಲ್ಲಿ ನಿಯಮಿತವಾಗಿ ಪ್ರಜಾಸೇವಾ ಆಂದೋಲನ ಸಭೆಗಳನ್ನು ಆಯೋಜಿಸಲಾಗುತ್ತದೆ.
ಸರ್ಕಾರದ ಸೂಚನೆಯಂತೆ ಪ್ರತಿ ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಹಾಗೂ ಸ್ಥಳೀಯ ಶಾಸಕರ ಉಪಸ್ಥಿತಿಯಲ್ಲಿ ತಾಲೂಕು ಮಟ್ಟದ ಸಭೆಗಳನ್ನು ನಡೆಸಲಾಗುತ್ತದೆ. ಆರಂಭದಲ್ಲಿ ಈ ಸಭೆಗಳನ್ನು ತಾಲೂಕು ಕೇಂದ್ರಗಳಲ್ಲಿ ಆಯೋಜಿಸಿ, ಬಳಿಕ ಹೋಬಳಿ ಕೇಂದ್ರಗಳಿಗೂ ವಿಸ್ತರಿಸುವ ಉದ್ದೇಶ ಹೊಂದಲಾಗಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ಹೋಬಳಿ ಹಾಗೂ ಗ್ರಾಮ ಪಂಚಾಯಿತಿ ಕೇಂದ್ರಗಳಲ್ಲಿಯೂ ಸಭೆಗಳನ್ನು ನಡೆಸಲು ಕ್ರಮ ಕೈಗೊಳ್ಳಲಾಗುತ್ತದೆ.
ಈ ಸಭೆಗಳಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಥವಾ ಆಯುಕ್ತರು, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಅರಣ್ಯ ಇಲಾಖೆಯ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಭಾಗವಹಿಸಬೇಕು. ಇದೇ ರೀತಿ ತಹಶೀಲ್ದಾರ್, ಪೊಲೀಸ್ ಉಪಾಧೀಕ್ಷಕರು, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳು ಹೋಬಳಿ ಮಟ್ಟದ ಸಭೆಗಳಲ್ಲಿ ಭಾಗವಹಿಸುವುದು ಕಡ್ಡಾಯವಾಗಿದೆ.
ಜನರಿಂದ ಸ್ವೀಕರಿಸುವ ಅರ್ಜಿಗಳು ಮತ್ತು ದೂರುಗಳನ್ನು ಸುಗಮವಾಗಿ ನಿರ್ವಹಿಸಲು ಸಭಾ ಸ್ಥಳಗಳಲ್ಲಿ ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳ ವ್ಯವಸ್ಥೆ ಮಾಡಲಾಗುತ್ತದೆ. ಇಲಾಖಾವಾರು ಅರ್ಜಿ ಸ್ವೀಕೃತಿ ಕೌಂಟರ್‌ಗಳನ್ನು ತೆರೆಯಲಾಗುತ್ತಿದ್ದು, ಗಣಕಯಂತ್ರ, ಲ್ಯಾಪ್‌ಟಾಪ್, ಪ್ರಿಂಟರ್ ಹಾಗೂ ಇಂಟರ್‌ನೆಟ್ ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಮುಂಚಿತವಾಗಿಯೇ ಮಾಹಿತಿ ನೀಡುವ ವ್ಯವಸ್ಥೆಯೂ ಇರಲಿದೆ. ಜಿಲ್ಲಾಧಿಕಾರಿಗಳು ಕನಿಷ್ಠ ಒಂದು ತಿಂಗಳ ಮುಂಚಿತವಾಗಿ ತಾಲೂಕು ಮತ್ತು ಹೋಬಳಿ ಮಟ್ಟದ ಸಭೆಗಳ ವೇಳಾಪಟ್ಟಿಯನ್ನು ಅಂತಿಮಗೊಳಿಸಿ, ಸರ್ಕಾರಿ ಕಚೇರಿಗಳ ಸೂಚನಾ ಫಲಕಗಳಲ್ಲಿ ಹಾಗೂ ಮಾಧ್ಯಮಗಳ ಮೂಲಕ ಪ್ರಚಾರ ಮಾಡಬೇಕು. ಸಭೆ ನಡೆಯುವ 15 ದಿನಗಳ ಮುಂಚಿತವಾಗಿ ಸಾರ್ವಜನಿಕರಿಗೆ ಅರ್ಜಿ ನಮೂನೆ ಹಾಗೂ ಅಗತ್ಯ ದಾಖಲೆಗಳ ವಿವರಗಳನ್ನು ಮನೆ-ಮನೆಗೆ ತಲುಪಿಸುವ ವ್ಯವಸ್ಥೆಯನ್ನೂ ಮಾಡಲಾಗುತ್ತದೆ.
ಸರ್ಕಾರ ಮತ್ತು ಜನರ ನಡುವಿನ ಅಂತರವನ್ನು ಕಡಿಮೆ ಮಾಡಿ, ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಒದಗಿಸುವ ಮೂಲಕ ಜನಸ್ನೇಹಿ ಆಡಳಿತಕ್ಕೆ ಹೊಸ ರೂಪ ನೀಡುವ ಉದ್ದೇಶವನ್ನು ಪ್ರಜಾಸೇವಾ ಆಂದೋಲನ ಹೊಂದಿದೆ.
