ರಾಜ್ಯದಲ್ಲಿ ಭಾರೀ ಮಳೆ: ಕರಾವಳಿ-ಮಲೆನಾಡಿಗೆ ಆರೆಂಜ್ ಅಲರ್ಟ್

Untitled design 2026 06 29T072916.965

ಬೆಂಗಳೂರು: ಕರ್ನಾಟಕದ ಹಲವು ಭಾಗಗಳಲ್ಲಿ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಜುಲೈ 2ರವರೆಗೆ ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

ಹವಾಮಾನ ಇಲಾಖೆ ನೀಡಿರುವ ಮಾಹಿತಿಯ ಪ್ರಕಾರ, ಜೂನ್ 30ರಂದು ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬಳಿಕ ಜುಲೈ 1ರಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಜೊತೆಗೆ ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಉತ್ತಮ ಮಳೆಯಾಗಲಿದೆ ಎಂದು ಅಂದಾಜಿಸಲಾಗಿದೆ.

ಇನ್ನು ಜುಲೈ 2ರಂದು ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮುಂದುವರಿಸಲಾಗಿದೆ. ತಗ್ಗು ಪ್ರದೇಶಗಳಲ್ಲಿ ನೀರು ನಿಲ್ಲುವ ಸಾಧ್ಯತೆ ಇರುವುದರಿಂದ ಜನರು ಎಚ್ಚರಿಕೆಯಿಂದ ಸಂಚರಿಸುವಂತೆ ಅಧಿಕಾರಿಗಳು ಸಲಹೆ ನೀಡಿದ್ದಾರೆ.

ಕಳೆದ ಎರಡು ದಿನಗಳಿಂದ ಉತ್ತರ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಕುಮಟಾದ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆ ನೀರು ನುಗ್ಗಿದ ಪರಿಣಾಮ ವಾಹನ ಸಂಚಾರ ಕೆಲಕಾಲ ಸ್ಥಗಿತಗೊಂಡಿತ್ತು. ಹಲವು ಗ್ರಾಮೀಣ ರಸ್ತೆಗಳು ನೀರಿನಿಂದ ಆವೃತವಾಗಿದ್ದು, ಸ್ಥಳೀಯರು ಪರದಾಡುವಂತಾಯಿತು.

ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಗೋಕರ್ಣದಲ್ಲೂ ಭಾರೀ ಮಳೆಯ ಪರಿಣಾಮ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಗೋಕರ್ಣ ಮಹಾಬಲೇಶ್ವರ ದೇವಾಲಯದ ಗರ್ಭಗುಡಿಗೆ ಮಳೆ ನೀರು ನುಗ್ಗಿದ್ದು, ಪಂಪ್‌ಗಳ ಮೂಲಕ ನೀರನ್ನು ಹೊರತೆಗೆದು ಸ್ವಚ್ಛಗೊಳಿಸಲಾಯಿತು. ಅಲ್ಲದೆ ಮಹಾಗಣಪತಿ ದೇವಾಲಯದ ಮುಂಭಾಗದ ರಸ್ತೆ, ಮೇಲಿನ ಕೇರಿ ಸೇರಿದಂತೆ ಹಲವು ಪ್ರದೇಶಗಳು ಜಲಾವೃತಗೊಂಡಿದೆ.

ಇದೊಂದೇ ಅಲ್ಲದೆ ಧಾರವಾಡ, ದಕ್ಷಿಣ ಕನ್ನಡ ಸೇರಿದಂತೆ ಉತ್ತರ ಕರ್ನಾಟಕ ಮತ್ತು ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಿದೆ. ಕೆಲವು ಕಡೆಗಳಲ್ಲಿ ಗಾಳಿ-ಮಳೆಯ ಅಬ್ಬರದಿಂದ ಮರಗಳು ಉರುಳಿ ಸಂಚಾರಕ್ಕೆ ಅಡಚಣೆಯಾಗಿವೆ.

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇರುವುದಾಗಿ ತಿಳಿಸಿದೆ. ನದಿಗಳು, ಹಳ್ಳಗಳು ಹಾಗೂ ಜಲಾಶಯಗಳ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆ ಇರುವುದರಿಂದ ನದಿ ತೀರ ಪ್ರದೇಶದ ನಿವಾಸಿಗಳು ಎಚ್ಚರಿಕೆಯಿಂದ ಇರಬೇಕು ಎಂದು ಸೂಚಿಸಲಾಗಿದೆ.

ಜಿಲ್ಲಾಡಳಿತಗಳು ಅಗತ್ಯ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದ್ದು, ತುರ್ತು ಪರಿಸ್ಥಿತಿ ಎದುರಾದರೆ ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಮನವಿ ಮಾಡಲಾಗಿದೆ. ಪ್ರವಾಸಿಗರು ವಿಶೇಷವಾಗಿ ಜಲಪಾತಗಳು, ನದಿ ತೀರಗಳು ಹಾಗೂ ಗುಡ್ಡ ಪ್ರದೇಶಗಳಿಗೆ ಅನಗತ್ಯವಾಗಿ ಭೇಟಿ ನೀಡದಂತೆ ಸಲಹೆ ನೀಡಲಾಗಿದೆ.

 

Exit mobile version