ಬೆಂಗಳೂರು ಸೇರಿದಂತೆ ಕರಾವಳಿ, ಮಲೆನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ

Untitled design (93)

ಬೆಂಗಳೂರು: ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ವಾಯುಭಾರ ಕುಸಿತದ ಪ್ರಭಾವದಿಂದ ಮುಂದಿನ ಕೆಲವು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು, ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮೋಡಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವು ಕಡೆಗಳಲ್ಲಿ ಗುಡುಗು, ಸಿಡಿಲು ಹಾಗೂ ಬಿರುಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರಿನಲ್ಲಿ ಶನಿವಾರ ಬೆಳ್ಳಂಬೆಳಗ್ಗೆಯೇ ಜಿಟಿಜಿಟಿ ಮಳೆ ಆರಂಭವಾಗಿದ್ದು, ನಗರದ ವಾತಾವರಣ ತಂಪಾಗಿದೆ. ಬೆಳಗಿನ ಜಾವದಿಂದಲೇ ಮೋಡ ಕವಿದ ವಾತಾವರಣ ಕಂಡುಬಂದಿದ್ದು, ಬಿಡುವು ನೀಡುತ್ತಾ ಸುರಿಯುತ್ತಿರುವ ಮಳೆಯಿಂದ ಜನಜೀವನದ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ. ಇದೇ ವೇಳೆ ನಗರದ ಪ್ರಮುಖ ವಾಣಿಜ್ಯ ಕೇಂದ್ರವಾದ ಕೆ.ಆರ್. ಮಾರುಕಟ್ಟೆಯಲ್ಲಿ ಮಳೆಯ ನಡುವೆಯೂ ಹೂವು, ಹಣ್ಣು ಹಾಗೂ ತರಕಾರಿ ಖರೀದಿಗೆ ಜನರು ಆಗಮಿಸುತ್ತಿದ್ದು, ವ್ಯಾಪಾರ ವಹಿವಾಟು ಮುಂದುವರಿದಿದೆ.

ಕರಾವಳಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ

ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಹಲವು ಭಾಗಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗಗಳಲ್ಲಿ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕೆಲವೆಡೆ ಮಳೆ ಸುರಿಯಬಹುದು.

ಮೀನುಗಾರರು, ಸಮುದ್ರ ತೀರಕ್ಕೆ ಭೇಟಿ ನೀಡುವವರು ಹಾಗೂ ಪ್ರಯಾಣಿಕರು ಸ್ಥಳೀಯ ಹವಾಮಾನ ಮುನ್ಸೂಚನೆಗಳನ್ನು ಗಮನಿಸುವುದು ಸೂಕ್ತ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ

ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಮಳೆಯಾಗಬಹುದು ಎಂದು ಮುನ್ಸೂಚನೆ ತಿಳಿಸಿದೆ.

ಕೆಲವು ಭಾಗಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ. ಗುಡುಗು, ಸಿಡಿಲು ಕಾಣಿಸಿಕೊಂಡಾಗ ಜನರು ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವುದು ಉತ್ತಮ. 

ಮಲೆನಾಡಿನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

ದಕ್ಷಿಣ ಒಳನಾಡಿನ ಮಲೆನಾಡು ಭಾಗಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆಯಿದೆ. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಇದೆ. ದಾವಣಗೆರೆ ಜಿಲ್ಲೆಯ ಕೆಲವು ಭಾಗಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ.

ಮಲೆನಾಡಿನ ಪ್ರದೇಶಗಳಲ್ಲಿ ನಿರಂತರ ಮಳೆಯಾದರೆ ರಸ್ತೆಗಳಲ್ಲಿ ನೀರು ನಿಲ್ಲುವುದು, ವಾಹನ ಸಂಚಾರ ನಿಧಾನಗೊಳ್ಳುವುದು ಹಾಗೂ ತಗ್ಗು ಪ್ರದೇಶಗಳಲ್ಲಿ ನೀರು ಹರಿಯುವ ಸಮಸ್ಯೆಗಳು ಎದುರಾಗಬಹುದು. ಹೀಗಾಗಿ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸಬೇಕು. 

ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೇಗಿರಲಿದೆ ಹವಾಮಾನ?

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ತುಮಕೂರು, ಚಿತ್ರದುರ್ಗ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಭಾಗಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣದೊಂದಿಗೆ ಮಳೆ ಮುಂದುವರಿಯುವ ಸಾಧ್ಯತೆಯಿದ್ದು, ವಾಹನ ಸವಾರರು ರಸ್ತೆಗಳಲ್ಲಿ ಜಾಗರೂಕತೆಯಿಂದ ಸಂಚರಿಸಬೇಕು. ಮಳೆಯ ಸಮಯದಲ್ಲಿ ಸಂಚಾರ ದಟ್ಟಣೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಕಚೇರಿ ಹಾಗೂ ಇತರ ಕೆಲಸಗಳಿಗೆ ತೆರಳುವವರು ಪ್ರಯಾಣಕ್ಕೆ ಹೆಚ್ಚುವರಿ ಸಮಯ ಮೀಸಲಿಡುವುದು ಸೂಕ್ತ.

ನಾಳೆಯೂ ಮಳೆ ಮುಂದುವರಿಯುವ ಸಾಧ್ಯತೆ

ಹವಾಮಾನ ಮುನ್ಸೂಚನೆಯ ಪ್ರಕಾರ, ಭಾನುವಾರವೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಜೊತೆಗೆ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆಯಾಗಬಹುದು.

ಚಿಕ್ಕಮಗಳೂರು, ತುಮಕೂರು, ದಾವಣಗೆರೆ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದ ಗಾಳಿ, ಸಿಡಿಲು ಹಾಗೂ ಭಾರಿ ಮಳೆಯ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಚಾಮರಾಜನಗರ, ರಾಮನಗರ, ಹಾಸನ, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.

 

Exit mobile version