ಕರ್ನಾಟಕದಲ್ಲಿ ಮುಂಗಾರು ಮಳೆ ಚುರುಕು: ಬೆಂಗಳೂರು ಸೇರಿ ರಾಜ್ಯಾದ್ಯಂತ 2 ದಿನ ರೆಡ್ ಅಲರ್ಟ್

Untitled design 2026 06 08T102509.527

ಬೆಂಗಳೂರು, ಜೂನ್ 8: ಕರ್ನಾಟಕದಲ್ಲಿ ಮುಂಗಾರು ಮಳೆ ಮತ್ತಷ್ಟು ಚುರುಕುಗೊಂಡಿದ್ದು, ರಾಜ್ಯದ ಹಲವೆಡೆ ಭಾರೀ ಮಳೆಯ ಆರ್ಭಟ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದ್ದು, ರಸ್ತೆ, ಮನೆ, ಆಸ್ಪತ್ರೆ ಮತ್ತು ಸರ್ಕಾರಿ ಕಚೇರಿಗಳಿಗೆ ನೀರು ನುಗ್ಗಿದೆ. ಇದರ ಪರಿಣಾಮ ಸಾರ್ವಜನಿಕರು ಸಂಕಷ್ಟ ಎದುರಿಸುತ್ತಿದ್ದಾರೆ.

ಕೇಂದ್ರ ಹವಾಮಾನ ಇಲಾಖೆ (IMD) ಜೂನ್ 9 ಮತ್ತು 10ರಂದು ರಾಜ್ಯದ ಹಲವು ಭಾಗಗಳಲ್ಲಿ ಅತಿಭಾರೀ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಬೆಂಗಳೂರು ಸೇರಿದಂತೆ ಅನೇಕ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ. ಹವಾಮಾನ ಇಲಾಖೆಯ ಎಚ್ಚರಿಕೆಯಿಂದ ಜಿಲ್ಲಾಡಳಿತಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿವೆ.

ಎಲ್ಲೆಲ್ಲಿ ರೆಡ್ ಅಲರ್ಟ್?

ಜೂನ್ 9ರಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆ ಇರುವುದರಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ಜೂನ್ 10ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇರುವ ಹಿನ್ನೆಲೆ ಇಡೀ ಕರ್ನಾಟಕಕ್ಕೆ ರೆಡ್ ಅಲರ್ಟ್ ನೀಡಲಾಗಿದೆ.

ಮಳೆಯ ಅವಾಂತರದಿಂದ ಜನಜೀವನ ಅಸ್ತವ್ಯಸ್ತ

ಬಳ್ಳಾರಿ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆಯಿಂದ ತಗ್ಗು ಪ್ರದೇಶಗಳು ಸಂಪೂರ್ಣ ಜಲಾವೃತಗೊಂಡಿವೆ. ರೇಣುಕಾನಗರ, ರಾಣಿಪೇಟೆ ಹಾಗೂ ಹಳೆಯ ತಾಲೂಕು ಕಚೇರಿ ರಸ್ತೆಗಳಲ್ಲಿ ನೀರು ನಿಂತಿದ್ದು, ಪ್ರಸಿದ್ಧ ವಿಮ್ಸ್ ಆಸ್ಪತ್ರೆಗೆ ಸಹ ಮಳೆ ನೀರು ನುಗ್ಗಿದೆ. ಆಸ್ಪತ್ರೆಯೊಳಗೆ ನೀರು ನಿಂತ ಪರಿಣಾಮ ರೋಗಿಗಳನ್ನು ಸ್ಥಳಾಂತರಿಸುವ ಪರಿಸ್ಥಿತಿ ನಿರ್ಮಾಣವಾಗಿದೆ. ಜೆಸ್ಕಾಂ ಕಚೇರಿ ಆವರಣವೂ ಜಲಾವೃತಗೊಂಡಿದ್ದು, ವಿದ್ಯುತ್ ವ್ಯವಸ್ಥೆ ಮೇಲೆ ಪರಿಣಾಮ ಬೀರಿದೆ.

ಚಿತ್ರದುರ್ಗ ನಗರದಲ್ಲಿ ಚರಂಡಿಗಳು ತುಂಬಿ ಹರಿದ ಪರಿಣಾಮ ಹಲವು ರಸ್ತೆಗಳಲ್ಲಿ ಸಂಚಾರ ಅಸ್ತವ್ಯಸ್ತಗೊಂಡಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಪಾರಶ್ವಾಡ ಗ್ರಾಮದಲ್ಲಿ ರಸ್ತೆ ನೀರಿನಲ್ಲಿ ಮುಳುಗಿದೆ. 

ದೇವಸ್ಥಾನ ಜಲಾವೃತ, ರಸ್ತೆ ಕುಸಿತ

ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರದಲ್ಲಿ ಭಾರೀ ಮಳೆಯಿಂದ ಚೆನ್ನಗೀರೇಶ್ವರ ದೇವಸ್ಥಾನದ ಆವರಣ ಸಂಪೂರ್ಣ ಜಲಾವೃತಗೊಂಡಿದೆ. ದೇವಸ್ಥಾನದ ಮೆಟ್ಟಿಲುಗಳ ಮೇಲೆ ಜಲಪಾತದಂತೆ ನೀರು ಹರಿದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದೇ ವೇಳೆ ವಲ್ಲಭಬಾಯಿ ವೃತ್ತದ ಬಳಿ ಮನೆಯ ಮೇಲ್ಚಾವಣಿ ಕುಸಿದು ಬಿದ್ದ ಘಟನೆ ವರದಿಯಾಗಿದೆ.

ಕರಾವಳಿಯಲ್ಲಿ ಹೈ ಅಲರ್ಟ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಪುತ್ತೂರು, ಸುಳ್ಯ ಮತ್ತು ಬೆಳ್ತಂಗಡಿ ಭಾಗಗಳಲ್ಲಿ ವಿಶೇಷ ಎಚ್ಚರಿಕೆ ವಹಿಸಲಾಗಿದೆ. ಜಿಲ್ಲಾಡಳಿತವು ಮುನ್ನೆಚ್ಚರಿಕೆ ಕ್ರಮವಾಗಿ 115 ಕಾಳಜಿ ಕೇಂದ್ರಗಳನ್ನು ಗುರುತಿಸಿದ್ದು, 24 ಗಂಟೆಗಳ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ.

ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಸಾರ್ವಜನಿಕರು ಅನಗತ್ಯವಾಗಿ ಹೊರಗೆ ಸಂಚರಿಸುವುದನ್ನು ತಪ್ಪಿಸಿ, ಜಿಲ್ಲಾಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಿದೆ.

Exit mobile version