ಕಬ್ಬು ಬೆಳೆಗಾರರ ಆಕ್ರೋಶಕ್ಕೆ ರಾಜ್ಯ ತತ್ತರ: ಬೆಳಗಾವಿ ಸೇರಿ ಹಲವು ಜಿಲ್ಲೆಗಳಲ್ಲಿ ಹೋರಾಟ ತೀವ್ರ!

ಆತ್ಮಹತ್ಯೆ! (4)

ಬೆಳಗಾವಿ: ಕಬ್ಬಿಗೆ ಸೂಕ್ತ ಬೆಲೆ ನಿಗದಿ ಹಾಗೂ ಕನಿಷ್ಠ ಬೆಂಬಲ ಬೆಲೆ (MSP) ನೀಡುವಂತೆ ಆಗ್ರಹಿಸಿ ರಾಜ್ಯದ ಕಬ್ಬು ಬೆಳೆಗಾರರ ಹೋರಾಟ ತೀವ್ರಗೊಂಡಿದೆ. ಬೆಳಗಾವಿ, ಚಿಕ್ಕೋಡಿ, ಗೋಕಾಕ್, ಹುಕ್ಕೇರಿ, ಬಾಗಲಕೋಟೆ, ಧಾರವಾಡ ಹಾಗೂ ಹಾವೇರಿ ಸೇರಿದಂತೆ ರಾಜ್ಯದ ವಿವಿಧೆಡೆ ರೈತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ರಸ್ತೆ ತಡೆ, ಹೆದ್ದಾರಿ ಬಂದ್ ಹಾಗೂ ಧರಣಿಗಳ ಮೂಲಕ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಕಬ್ಬಿಗೆ ಸೂಕ್ತ ದರ ನಿಗದಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಪ್ರತಿಭಟನೆ ಬಿರುಸುಗೊಂಡಿದೆ. ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ರೈತರು ರಸ್ತೆಯ ಮೇಲೆಯೇ ಮಲಗಿ ಪ್ರತಿಭಟನೆ ನಡೆಸಿದ್ದಾರೆ. ಗಂಟೆ ಬಾರಿಸುತ್ತಾ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಬಸ್ ಸಂಚಾರ ಸ್ಥಗಿತಗೊಳಿಸಲು ಪ್ರತಿಭಟನಾಕಾರರು ಯತ್ನಿಸಿದಾಗ ಪೊಲೀಸರು ಅವರನ್ನು ತಡೆದಿದ್ದಾರೆ. ಈ ವೇಳೆ ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ, ನೂಕಾಟ ಹಾಗೂ ತಳ್ಳಾಟ ನಡೆದಿದೆ. ಬಳಿಕ ಬಸ್ ನಿಲ್ದಾಣದಲ್ಲಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನು ಮೂಡಲಗಿ ತಾಲೂಕಿನ ಮುಸಗುಪ್ಪಿ ಬಳಿ ಮಹಾಲಿಂಗಪುರ-ಮೂಡಲಗಿ ಸಂಪರ್ಕಿಸುವ ರಸ್ತೆಯನ್ನು ಬಂದ್ ಮಾಡಿ ರೈತರು ಪ್ರತಿಭಟನೆ ನಡೆಸಿದ್ದಾರೆ. ಗೋಕಾಕ್-ಹಿಡಕಲ್ ಡ್ಯಾಂ-ಬೆಳಗಾವಿ ಹೆದ್ದಾರಿಯನ್ನೂ ತಡೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಸ್ತೆಯಲ್ಲೇ ಅಡುಗೆ ಮಾಡುವ ಮೂಲಕ ಕಬ್ಬು ಬೆಳೆಗಾರರು ತಮ್ಮ ಹೋರಾಟ ಮುಂದುವರಿಸಿದ್ದಾರೆ. ಇದರಿಂದ ಗೋಕಾಕ್ ತಾಲೂಕಿನ ಹಲವು ಭಾಗಗಳಲ್ಲಿ ಬಸ್ ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಹುಕ್ಕೇರಿ ಪಟ್ಟಣದಲ್ಲಿಯೂ ರೈತರು ರಸ್ತೆ ತಡೆ ನಡೆಸಿದ್ದು, ಪ್ರತಿಭಟನೆಗೆ ಚಂದ್ರಶೇಖರ್ ಶಿವಾಚಾರ್ಯ ಸ್ವಾಮೀಜಿ ಸಾಥ್ ನೀಡಿದ್ದಾರೆ. ಬಾವನಸೌಂದತ್ತಿ ಗ್ರಾಮದಲ್ಲಿ ಟೈರ್‌ಗಳಿಗೆ ಬೆಂಕಿ ಹಚ್ಚಿ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಲಾಗಿದೆ. ಶಿವಶಕ್ತಿ ಸಕ್ಕರೆ ಕಾರ್ಖಾನೆಗೆ ತೆರಳುತ್ತಿದ್ದ ಕಾರ್ಮಿಕರು ಹಾಗೂ ಸಿಬ್ಬಂದಿಯನ್ನೂ ಪ್ರತಿಭಟನಾಕಾರರು ತಡೆದಿದ್ದಾರೆ. ಅಥಣಿ ಪಟ್ಟಣದಲ್ಲಿ ವ್ಯಾಪಾರಸ್ಥರು ಸ್ವಯಂಪ್ರೇರಿತವಾಗಿ ಅಂಗಡಿಗಳನ್ನು ಮುಚ್ಚಿ ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ.

ರೈತರ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ಬಾಗಲಕೋಟೆ, ವಿಜಯಪುರ ಹಾಗೂ ಧಾರವಾಡ ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಬಿಎನ್‌ಎಸ್ 163ರ ಅಡಿಯಲ್ಲಿ ಬೆಳಗ್ಗೆ 6ರಿಂದ ರಾತ್ರಿ 10ರವರೆಗೆ ನಿಷೇಧಾಜ್ಞೆ ವಿಧಿಸಿ ಜಿಲ್ಲಾಧಿಕಾರಿ ಸಂಗಪ್ಪ ಆದೇಶಿಸಿದ್ದಾರೆ. ಆದರೂ ಬೀಳಗಿ ಕ್ರಾಸ್‌ನಲ್ಲಿ ರೈತರು ಹೆದ್ದಾರಿಗೆ ಕಲ್ಲು, ಮುಳ್ಳುಗಳನ್ನು ಹಾಕಿ, ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ಪ್ರತಿಭಟನೆ ನಡೆಸಿದ್ದಾರೆ.

ವಿಜಯಪುರ ಜಿಲ್ಲೆಯ 10 ಪ್ರಮುಖ ಸ್ಥಳಗಳಲ್ಲಿ ಪ್ರತಿಭಟನೆ ಹಾಗೂ ಹೆದ್ದಾರಿ ತಡೆಗೆ ಸಿದ್ಧತೆ ನಡೆದಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ. ಅವರು ನಿಷೇಧಾಜ್ಞೆ ಜಾರಿಗೊಳಿಸಿದ್ದಾರೆ. ಟೋಲ್ ಪ್ಲಾಜಾಗಳ ಪ್ರವೇಶ ಮತ್ತು ನಿರ್ಗಮನಕ್ಕೆ ಅಡ್ಡಿಪಡಿಸುವುದು, ವಾಹನಗಳನ್ನು ಅಡ್ಡಲಾಗಿ ನಿಲ್ಲಿಸಿ ರಸ್ತೆ ತಡೆ ನಡೆಸುವುದು ಹಾಗೂ ಸಾರ್ವಜನಿಕ ಸಂಚಾರಕ್ಕೆ ತೊಂದರೆ ಉಂಟುಮಾಡುವುದನ್ನು ನಿಷೇಧಿಸಲಾಗಿದೆ.

ಆಂಬುಲೆನ್ಸ್, ಅಗ್ನಿಶಾಮಕ ಸೇರಿದಂತೆ ತುರ್ತು ಸೇವೆಗಳ ವಾಹನಗಳ ಸಂಚಾರಕ್ಕೆ ಅಡ್ಡಿಪಡಿಸಬಾರದು ಎಂದು ಸೂಚಿಸಲಾಗಿದೆ. ಸಾರ್ವಜನಿಕ ಆಸ್ತಿಗೆ ಹಾನಿ ಅಥವಾ ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.

 

Exit mobile version