ಬೆಂಗಳೂರಲ್ಲಿ 36 ಡಿಗ್ರಿ ಉರಿ ಬಿಸಿಲು: ಇನ್ನು 5 ದಿನ ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ

Untitled design 2026 04 20T212134.329

ಬೆಂಗಳೂರು: ರಾಜ್ಯದಾದ್ಯಂತ ಉರಿಬಿಸಿಲಿನ ತೀವ್ರತೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಜನಜೀವನ ಕಷ್ಟಕರವಾಗುತ್ತಿದೆ.  ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ತಾಪಮಾನ ಏರಿಕೆಯಿಂದ ಜನರು ತತ್ತರಿಸುತ್ತಿರುವ ಬೆನ್ನಲ್ಲೇ, ಹವಾಮಾನ ಇಲಾಖೆ ಸ್ವಲ್ಪ ಮಟ್ಟಿನ ಸಮಾಧಾನಕರ ಸುದ್ದಿ ನೀಡಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ.

ಬೆಂಗಳೂರು ನಗರದಲ್ಲಿ ಮುಂದಿನ 48 ಗಂಟೆಗಳ ಕಾಲ ಬಿಸಿಲಿನ ಪ್ರಭಾವ ಕಡಿಮೆಯಾಗುವ ಲಕ್ಷಣಗಳು ಕಾಣಿಸುತ್ತಿಲ್ಲ. ಗರಿಷ್ಠ ತಾಪಮಾನವು 36 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ನಿರೀಕ್ಷೆಯಿದ್ದು, ಇದು ಸಾಮಾನ್ಯಕ್ಕಿಂತ 2 ರಿಂದ 3 ಡಿಗ್ರಿ ಹೆಚ್ಚಾಗಿದೆ. ಮಧ್ಯಾಹ್ನದ ಹೊತ್ತಿನಲ್ಲಿ ಉರಿ ಬಿಸಿಲು ಹೆಚ್ಚಾಗುವ ಕಾರಣ ಸಾರ್ವಜನಿಕರು ಅನಗತ್ಯವಾಗಿ ಹೊರಗಡೆ ಹೋಗುವುದನ್ನು ತಪ್ಪಿಸುವಂತೆ ಸಲಹೆ ನೀಡಲಾಗಿದೆ. ದೇಹದಲ್ಲಿ ನೀರಿನ ಕೊರತೆ ಉಂಟಾಗದಂತೆ ಸಾಕಷ್ಟು ನೀರು ಕುಡಿಯಬೇಕು ಹಾಗೂ ಹಗುರವಾದ ಉಡುಪು ಧರಿಸುವುದು ಸೂಕ್ತ ಎಂದು ವೈದ್ಯರು ಸೂಚಿಸಿದ್ದಾರೆ.

ಇದರ ನಡುವೆಯೇ ಏಪ್ರಿಲ್ 20ರಿಂದ 24ರವರೆಗೆ ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಭಾಗಗಳಾದ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಪ್ರದೇಶಗಳಲ್ಲಿ ಗಂಟೆಗೆ 40ರಿಂದ 50 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.

ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಕೂಡ ಏಪ್ರಿಲ್ 24ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಗಾಳಿಯ ವೇಗವು ಗಂಟೆಗೆ 30ರಿಂದ 40 ಕಿಲೋಮೀಟರ್ ಇರಬಹುದು ಎಂದು ಅಂದಾಜಿಸಲಾಗಿದೆ.

ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆಯ ಮುನ್ಸೂಚನೆ ಇದೆ.

ಹವಾಮಾನ ಇಲಾಖೆಯು ಮಳೆ ಮತ್ತು ಗುಡುಗು ಸಮಯದಲ್ಲಿ ಕೆಲವು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿದೆ. ಮರಗಳ ಕೆಳಗೆ ನಿಲ್ಲಬಾರದು, ಬಯಲು ಪ್ರದೇಶಗಳಲ್ಲಿ ಆಶ್ರಯ ಪಡೆಯಬಾರದು ಎಂದು ಎಚ್ಚರಿಸಲಾಗಿದೆ. ಬಿರುಗಾಳಿಯ ಸಮಯದಲ್ಲಿ ಹಳೆಯ ಕಟ್ಟಡಗಳು ಅಥವಾ ದುರ್ಬಲ ಮರಗಳ ಬಳಿ ವಾಹನಗಳನ್ನು ನಿಲ್ಲಿಸುವುದನ್ನು ತಪ್ಪಿಸುವುದು ಉತ್ತಮ.

Exit mobile version