ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ತೀವ್ರತೆ ಹೆಚ್ಚುತ್ತಿರುವ ನಡುವೆ, ಹೊಸ ವರ್ಷದ ಹೊತ್ತಲ್ಲೇ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ವರ್ಷದ ಕೊನೆಯ ದಿನವಾದ ಡಿಸೆಂಬರ್ 31 ಮತ್ತು ಹೊಸ ವರ್ಷದ ಮೊದಲ ದಿನವಾದ ಜನವರಿ 1ರಂದು ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಲಘು ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆಯ ಮಾಹಿತಿಯಂತೆ, ಬಂಗಾಳ ಕೊಲ್ಲಿಯ ಆಗ್ನೇಯ ಭಾಗದಲ್ಲಿ ಉಂಟಾಗಿರುವ ವಾಯುಭಾರ ಕುಸಿತವೇ ಮಳೆಯಾಗಲು ಕಾರಣ. ಇದು ಸರಾಸರಿ ಸಮುದ್ರ ಮಟ್ಟಕ್ಕಿಂತ ಸುಮಾರು 1.5 ಕಿಲೋಮೀಟರ್ ಎತ್ತರದಲ್ಲಿ ಚಲಿಸುತ್ತಿದೆ. ಜೊತೆಗೆ, ಉತ್ತರ ಕೇರಳ ಮತ್ತು ಅದರ ನೆರೆಹೊರೆಯ ಪ್ರದೇಶಗಳಲ್ಲಿ 1.5 ಕಿ.ಮೀ ಮತ್ತು 4.5 ಕಿ.ಮೀ ಎತ್ತರದಲ್ಲಿ ವಾಯು ಚಂಡಮಾರುತದ ಪರಿಚಲನೆ ಮುಂದುವರಿದಿರುವುದು ರಾಜ್ಯದ ಹವಾಮಾನ ಮೇಲೆ ಪ್ರಭಾವ ಬೀರುತ್ತಿದೆ.
ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಹಾಗೂ ರಾಮನಗರ ಜಿಲ್ಲೆಗಳಲ್ಲಿ ಡಿಸೆಂಬರ್ 31 ಮತ್ತು ಜನವರಿ 1ರಂದು ಲಘು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಹೊಸ ವರ್ಷದ ಸಂಭ್ರಮಾಚರಣೆಗಾಗಿ ಹೊರಡುವವರಿಗೆ ಹವಾಮಾನ ವ್ಯತ್ಯಯವಾಗುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ.
ಇನ್ನು ಉತ್ತರ ಒಳನಾಡಿನ ಕರ್ನಾಟಕದಲ್ಲಿ ಚಳಿಯ ತೀವ್ರತೆ ಮತ್ತಷ್ಟು ಹೆಚ್ಚಾಗಿದೆ. ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 4ರಿಂದ 5 ಡಿಗ್ರಿ ಸೆಲ್ಸಿಯಸ್‌ನಷ್ಟು ಇಳಿಕೆಯಾಗಿದೆ. ಹಲವೆಡೆ ದಟ್ಟ ಮಂಜು ಕವಿದ ವಾತಾವರಣ ಮುಂದುವರಿದಿದೆ.
ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಶೀತ ತೀವ್ರತೆ ಹೆಚ್ಚು ಕಂಡುಬಂದಿದೆ. ವಿಜಯಪುರದಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಬೀದರ್ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿ 9 ರಿಂದ 12 ಡಿಗ್ರಿ ಸೆಲ್ಸಿಯಸ್‌ವರೆಗೆ ತಾಪಮಾನ ದಾಖಲಾಗಿದೆ.
ಉತ್ತರ ಒಳ ಕರ್ನಾಟಕದ ಧಾರವಾಡ, ಗದಗ, ಹಾವೇರಿ, ವಿಜಯಪುರ, ಕಲಬುರ್ಗಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳ ಕರ್ನಾಟಕದ ಹಾಸನ, ಬೆಂಗಳೂರು, ಚಿತ್ರದುರ್ಗ, ದಾವಣಗೆರೆ, ಚಿಂತಾಮಣಿ, ಮಂಡ್ಯ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ ವರದಿಯಾಗಿದೆ. ಕರಾವಳಿ ಕರ್ನಾಟಕದ ಕಾರವಾರ ಮತ್ತು ಮಂಗಳೂರು ಭಾಗಗಳಲ್ಲೂ ಚಳಿಯ ಪ್ರಭಾವ ಕಂಡುಬಂದಿದೆ.
ಬೀದರ್ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನವು ಸಾಮಾನ್ಯಕ್ಕಿಂತ ಕಡಿಮೆಯಾಗಿದೆ. ರಾಯಚೂರು, ಗದಗ ಮತ್ತು ಬೆಳಗಾವಿ ವಿಮಾನ ನಿಲ್ದಾಣಗಳಲ್ಲಿಯೂ ತಾಪಮಾನ ಇಳಿಕೆಯಾಗಿದೆ. ಆದರೆ ಧಾರವಾಡ, ಹಾವೇರಿ, ಕೊಪ್ಪಳ, ಹಾಸನ ಹಾಗೂ ಬೆಂಗಳೂರು ನಗರದಲ್ಲಿ ಸಾಮಾನ್ಯಕ್ಕಿಂತ ಸ್ವಲ್ಪ ಹೆಚ್ಚಾದ ತಾಪಮಾನ ದಾಖಲಾಗಿದೆ.
ಮುಂದಿನ ಎರಡು ದಿನಗಳವರೆಗೆ ಉತ್ತರ ಒಳನಾಡಿನ ಬೀದರ್, ಕಲಬುರ್ಗಿ ಮತ್ತು ವಿಜಯಪುರ ಜಿಲ್ಲೆಗಳ ಪ್ರತ್ಯೇಕ ಪ್ರದೇಶಗಳಲ್ಲಿ ಶೀತಗಾಳಿ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ತಾಪಮಾನದಲ್ಲಿ ಹೆಚ್ಚಿನ ಬದಲಾವಣೆ ಇರುವುದಿಲ್ಲ. ನಂತರದ ದಿನಗಳಲ್ಲಿ ಕ್ರಮೇಣ 2–3 ಡಿಗ್ರಿ ಸೆಲ್ಸಿಯಸ್ ಏರಿಕೆಯಾಗುವ ನಿರೀಕ್ಷೆಯಿದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ಐದು ದಿನಗಳಲ್ಲಿ ಕನಿಷ್ಠ ತಾಪಮಾನದಲ್ಲಿ ನಿಧಾನವಾಗಿ ಏರಿಕೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.
ಬೆಂಗಳೂರು ಭಾಗದಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಕೆಲ ಪ್ರದೇಶಗಳಲ್ಲಿ ಬೆಳಗಿನ ಜಾವ ದಟ್ಟ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ನಗರದ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯಲಿದೆ.





