ಬೆಂಗಳೂರು, ಜುಲೈ 13: ಕರ್ನಾಟಕದಲ್ಲಿ ಮುಂಗಾರು ಮಳೆ ಸಂಪೂರ್ಣವಾಗಿ ಚುರುಕುಗೊಂಡಿಲ್ಲವಾದರೂ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಐದು ದಿನಗಳ ಕಾಲ ಸಾಧಾರಣ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಹವಾಮಾನ ಕೇಂದ್ರ ಬಿಡುಗಡೆ ಮಾಡಿರುವ ಇತ್ತೀಚಿನ ಮುನ್ಸೂಚನೆ ಪ್ರಕಾರ, ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ
ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲಿ ಗಾಳಿ ವೇಗ ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಮುದ್ರಕ್ಕೆ ತೆರಳುವ ಮೀನುಗಾರರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕಡಲ ತೀರ ಪ್ರದೇಶಗಳಲ್ಲಿ ವಾಸಿಸುವವರು ಸಹ ಗಾಳಿಯ ತೀವ್ರತೆ ಹಾಗೂ ಹವಾಮಾನ ಬದಲಾವಣೆಯ ಬಗ್ಗೆ ಗಮನಹರಿಸುವುದು ಅಗತ್ಯವಾಗಿದೆ.
ಮಲೆನಾಡಿನಲ್ಲಿ ಮಳೆ, ಗಾಳಿ ಎರಡೂ ಸಾಧ್ಯ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಜೊತೆಗೆ ಮೊದಲ ದಿನ ಬಿರುಗಾಳಿ ಬೀಸುವ ಸಾಧ್ಯತೆಯಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಿಗೆ ಎಚ್ಚರಿಕೆ
ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದರ ಜೊತೆಗೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಬಾಗಲಕೋಟೆ, ಕೊಪ್ಪಳ ಹಾಗೂ ಗದಗ ಜಿಲ್ಲೆಗಳಲ್ಲಿ ಇಂದು ಬಿರುಗಾಳಿ ಬೀಸುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಗಾಳಿ ಪರಿಣಾಮ
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮೈಸೂರು, ಮಂಡ್ಯ, ಚಾಮರಾಜನಗರ, ಬಳ್ಳಾರಿ, ವಿಜಯನಗರ, ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಗಳಲ್ಲಿ ಸಹ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಕೆಲವು ಕಡೆ ತುಂತುರು ಮಳೆಯೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯುವ ನಿರೀಕ್ಷೆಯಿದೆ.
ಮುಂದಿನ ಐದು ದಿನಗಳಲ್ಲಿ ರಾಜ್ಯದ ಯಾವುದೇ ಭಾಗದಲ್ಲಿ ವ್ಯಾಪಕ ಭಾರೀ ಮಳೆಯ ಮುನ್ಸೂಚನೆ ಇಲ್ಲ. ಆದರೆ ಕರಾವಳಿ, ಮಲೆನಾಡು ಹಾಗೂ ಆಯ್ದ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಗಾಳಿ ಬೀಸುವ ಸಾಧ್ಯತೆ ಹೆಚ್ಚಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಮನವಿ ಮಾಡಿದೆ.
