ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ರೂಪುಗೊಂಡಿರುವ ದಿತ್ವಾ ಚಂಡಮಾರುತದ ಪ್ರಭಾವ ಇನ್ನೂ ಪೂರ್ತಿಯಾಗಿ ಕಡಿಮೆಯಾಗಿಲ್ಲ. ಈ ಚಂಡಮಾರುತದ ಆರ್ಭಟದಿಂದಾಗಿ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸಾಧಾರಣ ಮಳೆಯಾಗಿದೆ. ಇಂದು ಬೆಳಗ್ಗೆಯಿಂದಲೂ ಮಂಜು ಕವಿದ ವಾತಾವರಣ ಮುಂದುವರೆದಿದೆ.
ಭಾರತೀಯ ಹವಾಮಾನ ಇಲಾಖೆ (IMD) ನೀಡಿರುವ ಮುನ್ಸೂಚನೆಯಂತೆ, ಮುಂದಿನ 24 ಗಂಟೆಗಳಲ್ಲಿಯೂ ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ವಿಶೇಷವಾಗಿ ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡದ ಕೆಲವು ಭಾಗಗಳಲ್ಲಿ ಗುಡುಗು-ಗಾಳಿ ಸಹಿತ ಮಳೆಯಾಗುವ ನಿರೀಕ್ಷೆ ಇದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.
ದಕ್ಷಿಣ ಒಳನಾಡಿನ ಪ್ರಮುಖ ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಮತ್ತು ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ. ಕೊಡಗು ಮತ್ತು ಚಿಕ್ಕಮಗಳೂರಿನಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎನ್ನಲಾಗಿದೆ. ಈ ಜಿಲ್ಲೆಗಳಲ್ಲಿ ಈಗಾಗಲೇ ಕಾಫಿ, ಏಲಕ್ಕಿ ತೋಟಗಳು ತೇವಾಂಶದಿಂದ ತುಂಬಿ ಹಸಿರಾಗಿವೆ. ಆದರೆ ಅತಿಯಾದ ಮಳೆಯಿಂದ ಭೂಕುಸಿತದ ಅಪಾಯವೂ ಇದ್ದು, ಸ್ಥಳೀಯರು ಎಚ್ಚರ ವಹಿಸಹಿಸಬೇಕಿದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳು ಒಣ ಹವೆ ಇರಲಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಧಾರವಾಡ, ಹಾವೇರಿ, ಕಲಬುರಗಿ, ಬೀದರ್, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಂಪೂರ್ಣ ಒಣ ಹವೆಯೇ ಇರಲಿದೆ. ಈ ಭಾಗಗಳಲ್ಲಿ ಗರಿಷ್ಠ ತಾಪಮಾನ 34-36 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಾತ್ರ ತುಂತುರು ಮಳೆಯ ಸಾಧ್ಯತೆ ಇದ್ದರೂ, ಒಟ್ಟಾರೆ ಒಣ ಹವೆಯೇ ಇರಲಿದೆ. ಬೆಂಗಳೂರಿನಲ್ಲಿ ಮಂಜಿನ ಮುಸುಕು ಮತ್ತು ತಂಪು ಗಾಳಿಯೊಂದಿಗೆ ಚಳಿಗಾಲದ ಆರಂಭಿಕ ಲಕ್ಷಣಗಳು ಕಂಡುಬರುತ್ತಿವೆ.
ದಿತ್ವಾ ಚಂಡಮಾರುತ ಈಗಾಗಲೇ ತಮಿಳುನಾಡು ಮತ್ತು ಆಂಧ್ರಪ್ರದೇಶದ ಕರಾವಳಿಯನ್ನು ಅಪ್ಪಳಿಸಿದ್ದು, ಕರ್ನಾಟಕದ ಮೇಲೆ ಇನ್ನೂ ತನ್ನ ಪರೋಕ್ಷ ಪ್ರಭಾವವನ್ನು ಬೀರುತ್ತಿದೆ. ಮುಂದಿನ ಎರಡು ದಿನಗಳಲ್ಲಿ ಈ ಪ್ರಭಾವ ಕ್ರಮೇಣ ಕಡಿಮೆಯಾಗುವ ನಿರೀಕ್ಷೆ ಇದೆ. ಆದರೂ ಡಿಸೆಂಬರ್ ಮೊದಲ ವಾರದಲ್ಲಿಯೇ ಇಂತಹ ಚಂಡಮಾರುತ ಮಳೆ ಕರ್ನಾಟಕಕ್ಕೆ ಅಪ್ಪಳಿಸುವ ಸಾಧ್ಯತೆ ಕಡಿಮೆ.
ಹವಾಮಾನ ಇಲಾಖೆಯು ಎಲ್ಲ ಜಿಲ್ಲಾಡಳಿತಗಳಿಗೆ ಎಚ್ಚರಿಕೆ ವಹಿಸಿ, ಕಡಿಮೆ ಎತ್ತರದ ಪ್ರದೇಶಗಳಲ್ಲಿ ನೀರು ನಿಲ್ಲುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.
