ಬೆಂಗಳೂರು: ರಾಜ್ಯದಲ್ಲಿ ಚಳಿಗಾಲದ ವಾತಾವರಣ ಆರಂಭವಾಗುವ ಮುನ್ಸೂಚನೆಯ ನಡುವೆಯೇ ಕರ್ನಾಟಕದಲ್ಲಿ ಮತ್ತೆ ಮಳೆ ಅಬ್ಬರಿಸುವ ಸಾಧ್ಯತೆ ಇದೆ. ಬಂಗಾಳಕೊಲ್ಲಿಯ ವಾತಾವರಣದಲ್ಲಿನ ಬದಲಾವಣೆಗಳ ಪರಿಣಾಮವಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ, ಗುಡುಗು ಹಾಗೂ ಮಿಂಚಿನ ವಾತಾವರಣ ನಿರ್ಮಾಣವಾಗುವ ನಿರೀಕ್ಷೆಯಿದೆ. ಇಂದು (ನವೆಂಬರ್ 2) ಬೆಂಗಳೂರು ನಗರ ಮತ್ತು ಗ್ರಾಮಾಂತರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇದರೊಂದಿಗೆ ನವೆಂಬರ್ 5ರವರೆಗೆ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಮತ್ತು ಮಿಂಚು ಕಾಣಿಸಿಕೊಳ್ಳುವ ನಿರೀಕ್ಷೆಯಿರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ
ಕರ್ನಾಟಕದ ಕರಾವಳಿ ಭಾಗದಲ್ಲಿ ಮುಂದಿನ ದಿನಗಳಲ್ಲಿ ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ. ಕೆಲವು ಪ್ರದೇಶಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ.
ಉತ್ತರ ಕರ್ನಾಟಕದ ಜಿಲ್ಲೆಗಳಲ್ಲೂ ಮಳೆ ಮುನ್ಸೂಚನೆ
ಉತ್ತರ ಒಳನಾಡು ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯ ವಾತಾವರಣ ನಿರ್ಮಾಣವಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಗಳ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯನ್ನೂ ಹವಾಮಾನ ಇಲಾಖೆ ಸೂಚಿಸಿದೆ.
ಇನ್ನು ಬಾಗಲಕೋಟೆ, ವಿಜಯಪುರ, ಬೆಳಗಾವಿ, ಧಾರವಾಡ, ಗದಗ, ಹಾವೇರಿ ಹಾಗೂ ಕೊಪ್ಪಳ ಜಿಲ್ಲೆಗಳ ಕೆಲವು ಭಾಗಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರು ಸೇರಿ 8 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ
ದಕ್ಷಿಣ ಒಳನಾಡು ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗುವ ಮುನ್ಸೂಚನೆ ನೀಡಲಾಗಿದೆ. ಅದರಲ್ಲೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾದರೆ ವಾಹನ ಸಂಚಾರದ ಮೇಲೆ ಪರಿಣಾಮ ಬೀರುವ ಸಾಧ್ಯತೆಯೂ ಇದೆ.
ಇದಲ್ಲದೆ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ನವೆಂಬರ್ 5ರವರೆಗೆ ಬಿರುಗಾಳಿ, ಗುಡುಗು-ಮಿಂಚಿನ ಎಚ್ಚರಿಕೆ
ರಾಜ್ಯದಲ್ಲಿ ನವೆಂಬರ್ 1ರಿಂದ 5ರವರೆಗೆ ಹವಾಮಾನದಲ್ಲಿ ಏರಿಳಿತ ಮುಂದುವರಿಯುವ ನಿರೀಕ್ಷೆಯಿದೆ. ಈ ಅವಧಿಯಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಅಲ್ಲಲ್ಲಿ ಗುಡುಗು ಮತ್ತು ಮಿಂಚು ಸಂಭವಿಸಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಭಾನುವಾರ ಸಂಜೆಗೆ ಕೊನೆಗೊಂಡ 24 ಗಂಟೆಗಳ ಅವಧಿಯಲ್ಲಿ ದಕ್ಷಿಣ ಒಳನಾಡು ಕರ್ನಾಟಕದ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಆದರೆ ಕರಾವಳಿ ಹಾಗೂ ಉತ್ತರ ಒಳನಾಡು ಕರ್ನಾಟಕದ ಬಹುತೇಕ ಭಾಗಗಳಲ್ಲಿ ಒಣಹವೆ ಮುಂದುವರಿದಿತ್ತು.
