ಬೆಂಗಳೂರು, ಫೆಬ್ರವರಿ 27: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ತಾಪಮಾನ ಏರಿಕೆಯಾಗುತ್ತಿರುವ ಹಿನ್ನೆಲೆ, ಕೆಲವು ಭಾಗಗಳಲ್ಲಿ ಗುಡುಗು–ಸಿಡಿಲು ಸಹಿತ ಸಾಧಾರಣ ಮಳೆಯೂ ಕಾಣಿಸಿಕೊಂಡಿದೆ. ಇಂದೂ ಸಹ ರಾಜ್ಯದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳಲ್ಲಿ ಗುಡುಗು–ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಹೆಚ್ಚಿರುವ ಕಾರಣ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಈ ಭಾಗಗಳಲ್ಲಿ ಮಿಂಚು–ಸಿಡಿಲಿನ ಅಬ್ಬರ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆ ವಹಿಸಬೇಕು ಎಂದು ಇಲಾಖೆ ಸೂಚಿಸಿದೆ.
ಅಲ್ಲದೆ, ಮಾರ್ಚ್ ಎರಡನೇ ವಾರದ ನಂತರ ರಾಜ್ಯದಾದ್ಯಂತ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚಾಗಲಿದೆ ಎಂಬ ಮುನ್ಸೂಚನೆ ನೀಡಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ತಲುಪುವ ಸಾಧ್ಯತೆ ಇದೆ. ಹೀಗಾಗಿ ಬೇಸಿಗೆಯ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗುವ ಲಕ್ಷಣಗಳು ಗೋಚರಿಸುತ್ತಿವೆ.
ಆರೋಗ್ಯ ಇಲಾಖೆಯ ಎಚ್ಚರಿಕೆ
ಬಿಸಿಲಿನ ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಸಹ ಅಲರ್ಟ್ ಆಗಿದೆ. ವಿಶೇಷವಾಗಿ ಬೆಳಿಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸಾರ್ವಜನಿಕರಿಗೆ ಸೂಚಿಸಲಾಗಿದೆ. ಈ ಅವಧಿಯಲ್ಲಿ ಉಷ್ಣಾಘಾತ (ಹೀಟ್ ಸ್ಟ್ರೋಕ್) ಮತ್ತು ಡಿಹೈಡ್ರೇಶನ್ ಅಪಾಯ ಹೆಚ್ಚಿರುತ್ತದೆ.
ವೃದ್ಧರು, ಗರ್ಭಿಣಿಯರು, ಮಕ್ಕಳು ಹಾಗೂ ಹೃದಯ ಸಂಬಂಧಿತ ಕಾಯಿಲೆಗಳಿಂದ ಬಳಲುವವರು ಹೆಚ್ಚಿನ ಎಚ್ಚರಿಕೆ ವಹಿಸಬೇಕು. ಹೊರಗೆ ಹೋಗಲೇಬೇಕಾದರೆ ತಲೆ ಮುಚ್ಚಿಕೊಳ್ಳುವುದು, ನೀರು ಸಾಕಷ್ಟು ಕುಡಿಯುವುದು ಮತ್ತು ತಂಪಾದ ವಾತಾವರಣದಲ್ಲಿ ಇರಲು ಪ್ರಯತ್ನಿಸುವುದು ಸೂಕ್ತ ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಹೆಚ್ಚಾಗಿ ನೀರು, ತೆಂಗಿನಕಾಯಿ ನೀರು, ಹಣ್ಣುಗಳು ಹಾಗೂ ತಂಪು ಪಾನೀಯಗಳನ್ನು ಸೇವಿಸುವ ಮೂಲಕ ದೇಹದ ತಾಪಮಾನ ನಿಯಂತ್ರಿಸಬಹುದು.
ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಒಣ ಹವೆ?
ರಾಜ್ಯದ ಕರಾವಳಿ ಭಾಗಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿಗೆ ಒಣ ಹವೆಯಿರಲಿದೆ. ಮಳೆಯ ಸಾಧ್ಯತೆ ಕಡಿಮೆಯಿದ್ದು, ಸಾಮಾನ್ಯ ಬಿಸಿಲು ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನ ಯಾದಗಿರಿ, ರಾಯಚೂರು, ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಹಲವು ದಿನಗಳಿಂದ ಒಣ ಹವೆಯ ವಾತಾವರಣ ಮುಂದುವರಿದಿದ್ದು, ಇಂದೂ ಸಹ ಅದೇ ಸ್ಥಿತಿ ಇರಲಿದೆ.
ದಕ್ಷಿಣ ಒಳನಾಡಿನ ಚಾಮರಾಜನಗರ, ಮಂಡ್ಯ, ಶಿವಮೊಗ್ಗ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ರಾಮನಗರ, ಚಿತ್ರದುರ್ಗ, ದಾವಣಗೆರೆ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಸಾಮಾನ್ಯವಾಗಿ ಒಣಹವೆ ಇರಲಿದ್ದರೂ, ಕೆಲವೆಡೆ ಗುಡುಗು–ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ.
