ಬೆಂಗಳೂರು, ಆಗಸ್ಟ್ 24: ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆಯಂತೆ, ಆಗಸ್ಟ್ 24 ಮತ್ತು 25ರಂದು ಕರಾವಳಿ ಕರ್ನಾಟಕ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ನಿರೀಕ್ಷೆಯಿದೆ. ಕೆಲವು ಪ್ರದೇಶಗಳಲ್ಲಿ ಭಾರಿ ಮಳೆಯ ಜೊತೆಗೆ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಆಗಸ್ಟ್ 24ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವುದು ಅಗತ್ಯ.
ಮಲೆನಾಡಿನಲ್ಲೂ ಭಾರಿ ಮಳೆ ಸಾಧ್ಯತೆ
ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಮಳೆಯ ಅಬ್ಬರ ಮುಂದುವರಿಯುವ ಸಾಧ್ಯತೆಯಿದೆ. ಶಿವಮೊಗ್ಗ ಜಿಲ್ಲೆಯಲ್ಲಿ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳ ಒಂದೆರಡು ಕಡೆ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ತುಮಕೂರು ಮತ್ತು ಮಂಡ್ಯ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ಈಗಾಗಲೇ ಮಳೆಯಾಗುತ್ತಿರುವ ಹಿನ್ನೆಲೆ ತಗ್ಗು ಪ್ರದೇಶಗಳಲ್ಲಿ ವಾಸಿಸುವವರು ಹೆಚ್ಚಿನ ಎಚ್ಚರಿಕೆ ವಹಿಸುವುದು ಸೂಕ್ತವಾಗಿದೆ.
ಬೆಂಗಳೂರಿಗೂ ಮಳೆ ಮುನ್ಸೂಚನೆ
ರಾಜಧಾನಿ ಬೆಂಗಳೂರಿಗೂ ಮಳೆಯ ಮುನ್ಸೂಚನೆ ಮುಂದುವರಿದಿದೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದರ ಜೊತೆಗೆ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ ಮತ್ತು ವಿಜಯನಗರ ಜಿಲ್ಲೆಗಳಲ್ಲೂ ಕೆಲವೆಡೆ ಮಳೆಯಾಗಬಹುದು.
ಮಳೆ ಹಿನ್ನೆಲೆಯಲ್ಲಿ ನಗರ ಪ್ರದೇಶಗಳಲ್ಲಿ ಸಂಚಾರ ದಟ್ಟಣೆ, ರಸ್ತೆಗಳಲ್ಲಿ ನೀರು ನಿಲ್ಲುವುದು ಹಾಗೂ ಕೆಲವು ತಗ್ಗು ಪ್ರದೇಶಗಳಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆಯಿರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಒಳಿತು.
ಉತ್ತರ ಒಳನಾಡಿನಲ್ಲೂ ಮಳೆ
ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಮಳೆಯ ಸಾಧ್ಯತೆಯನ್ನು ಹವಾಮಾನ ಇಲಾಖೆ ಸೂಚಿಸಿದೆ. ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವು ಕಡೆ ಗಂಟೆಗೆ 40ರಿಂದ 50 ಕಿ.ಮೀ. ವೇಗದ ಗಾಳಿಯೊಂದಿಗೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ.
ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ಗಂಟೆಗೆ 30ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಮಳೆಯಾಗುವ ಮುನ್ಸೂಚನೆ ಇದೆ.
ಆಗಸ್ಟ್ 25ರಂದು ಮಳೆ ಎಲ್ಲೆಲ್ಲಿ?
ಆಗಸ್ಟ್ 25ರಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಭಾರಿ ಮಳೆಯಾಗಬಹುದು. ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲೂ ಭಾರಿ ಮಳೆಯ ಮುನ್ಸೂಚನೆ ಮುಂದುವರಿಯಲಿದೆ.
ಉತ್ತರ ಒಳನಾಡಿನ ವಿಜಯಪುರ, ರಾಯಚೂರು, ಧಾರವಾಡ, ಗದಗ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ಬೀದರ್, ಹಾವೇರಿ, ಕೊಪ್ಪಳ ಮತ್ತು ಯಾದಗಿರಿಯಲ್ಲೂ ಮಳೆಯ ನಿರೀಕ್ಷೆಯಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳ ಕೆಲವೆಡೆ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು.
