ಬೆಂಗಳೂರು, ಆಗಸ್ಟ್ 1: ರಾಜ್ಯದ ವಿವಿಧ ಭಾಗಗಳಲ್ಲಿ ನೈಋತ್ಯ ಮುಂಗಾರು ಮತ್ತೆ ಚುರುಕುಗೊಂಡಿದ್ದು, ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದೆ. ಭಾರತೀಯ ಹವಾಮಾನ ಇಲಾಖೆ (IMD) ಬೆಂಗಳೂರು ಕೇಂದ್ರವು ಆಗಸ್ಟ್ 1 ಮತ್ತು 2ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಮಳೆ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಕೊಡಗು, ಚಿಕ್ಕಮಗಳೂರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಭಾಗಗಳಲ್ಲಿ ಶಾಲೆ-ಅಂಗನವಾಡಿಗಳಿಗೆ ರಜೆ ಘೋಷಿಸಲಾಗಿದೆ.
ರಾಜ್ಯದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚಿಸಿದೆ. ಕೆಲವೆಡೆ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ.
ಯಾವೆಲ್ಲ ಜಿಲ್ಲೆಗಳಲ್ಲಿ ಶಾಲೆಗಳಿಗೆ ರಜೆ?
ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯ ಹಿನ್ನೆಲೆ ಮಡಿಕೇರಿ ಹಾಗೂ ಸೋಮವಾರಪೇಟೆ ತಾಲೂಕುಗಳ ಎಲ್ಲಾ ಅಂಗನವಾಡಿ ಮತ್ತು ಶಾಲೆಗಳಿಗೆ ಇಂದು ರಜೆ ಘೋಷಿಸಲಾಗಿದೆ. ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಆಯಾ ತಾಲೂಕುಗಳ ತಹಶೀಲ್ದಾರ್‌ಗಳು ಈ ಆದೇಶ ಹೊರಡಿಸಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಅಂಗನವಾಡಿ ಹಾಗೂ ಶಾಲೆಗಳಿಗೂ ಇಂದು ರಜೆ ಘೋಷಿಸಲಾಗಿದೆ. ಮಳೆಯ ಕಾರಣದಿಂದ ರಸ್ತೆ ಸಂಪರ್ಕ ಮತ್ತು ಸಂಚಾರದಲ್ಲಿ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರ ಕೈಗೊಳ್ಳಲಾಗಿದೆ.
ಇದೇ ವೇಳೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆ ಹಿನ್ನೆಲೆ ಪಿಯುಸಿ ತನಕದ ಎಲ್ಲಾ ಶಾಲೆ ಹಾಗೂ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಆಗಸ್ಟ್ 1ರಂದು ಎಲ್ಲೆಲ್ಲಿ ಭಾರಿ ಮಳೆ?
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಮತ್ತು ಉತ್ತರ ಕನ್ನಡದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.
ಉತ್ತರ ಒಳನಾಡಿನ ಬೆಳಗಾವಿ ಹಾಗೂ ಧಾರವಾಡ ಜಿಲ್ಲೆಗಳ ಕೆಲವೆಡೆ ಭಾರಿ ಮಳೆಯಾಗಲಿದ್ದು, 50 ರಿಂದ 60 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ರಾಮನಗರ, ಕೋಲಾರ, ಚಿತ್ರದುರ್ಗ, ದಾವಣಗೆರೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಆಗಸ್ಟ್ 2ರ ಹವಾಮಾನ ಹೇಗಿರಲಿದೆ?
ಆಗಸ್ಟ್ 2ರಂದು ಕೂಡ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ಮುಂದುವರಿದಿದೆ. ಶಿವಮೊಗ್ಗದಲ್ಲಿ ಭಾರಿ ಮಳೆಯ ಸಾಧ್ಯತೆ ಇದ್ದು, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರಿನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ.
ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿಯೂ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ಹವಾಮಾನ ವೈಪರೀತ್ಯದ ಹಿನ್ನೆಲೆ ನದಿ, ಹಳ್ಳ ಹಾಗೂ ಗುಡ್ಡ ಪ್ರದೇಶಗಳಿಗೆ ಅನಗತ್ಯವಾಗಿ ತೆರಳದಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.
ರಾಜ್ಯದಲ್ಲಿ ಹೆಚ್ಚು ಮಳೆ ದಾಖಲಾದ ಪ್ರದೇಶಗಳು
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗಿದೆ. ಹೆಚ್ಚು ಮಳೆ ದಾಖಲಾಗಿರುವ ಪ್ರಮುಖ ಪ್ರದೇಶಗಳು ಹೀಗಿವೆ.
ಕೊಲ್ಲೂರು (ಉಡುಪಿ) – 9 ಸೆಂ.ಮೀ.
ಭಾಗಮಂಡಲ (ಕೊಡಗು) – 7 ಸೆಂ.ಮೀ.
ಆಗುಂಬೆ (ಶಿವಮೊಗ್ಗ) – 7 ಸೆಂ.ಮೀ.
ಔರಾದ್ (ಬೀದರ್) – 6 ಸೆಂ.ಮೀ.
ಶೃಂಗೇರಿ (ಚಿಕ್ಕಮಗಳೂರು) – 6 ಸೆಂ.ಮೀ.
ವಿರಾಜಪೇಟೆ (ಕೊಡಗು) – 6 ಸೆಂ.ಮೀ.
ಹವಾಮಾನ ಇಲಾಖೆ ಮುಂದಿನ ಎರಡು ದಿನಗಳ ಕಾಲ ಮಳೆಯ ತೀವ್ರತೆ ಮುಂದುವರಿಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದು, ಪ್ರವಾಹ ಪೀಡಿತ ಪ್ರದೇಶಗಳಲ್ಲಿ ವಾಸಿಸುವವರು ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸಿ ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸಲಹೆ ನೀಡಿದೆ.





