ಕರ್ನಾಟಕದ ಕರಾವಳಿ, ಮಲೆನಾಡಿನ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ

Untitled Design 2026 11 08T103948.062

ಬೆಂಗಳೂರು, ನವೆಂಬರ್ 8: ರಾಜ್ಯದಲ್ಲಿ ಹವಾಮಾನ ಮತ್ತೆ ಕೊಂಚ ಬದಲಾವಣೆಯಾಗುವ ಮುನ್ಸೂಚನೆ ಇದೆ. ನವೆಂಬರ್ 8 ಮತ್ತು 9ರಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅದರಲ್ಲೂ ಉಡುಪಿ, ದಕ್ಷಿಣ ಕನ್ನಡ, ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಮತ್ತೊಂದೆಡೆ ರಾಜಧಾನಿ ಬೆಂಗಳೂರು ಸೇರಿದಂತೆ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

ಕಳೆದ ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಒಣಹವೆಯ ವಾತಾವರಣ ಕಂಡುಬರುತ್ತಿದೆ. ಇದೀಗ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯ ಮುನ್ಸೂಚನೆ ದೊರೆತಿದೆ. ಆದರೆ ರಾಜ್ಯದ ಎಲ್ಲ ಜಿಲ್ಲೆಗಳಿಗೂ ಮಳೆಯ ಮುನ್ಸೂಚನೆ ಇಲ್ಲ. ಕೆಲವು ನಿರ್ದಿಷ್ಟ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರಾವಳಿ ಕರ್ನಾಟಕದಲ್ಲಿ ತುಂತುರು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳಲ್ಲಿ ಅಲ್ಲಲ್ಲಿ ಹಗುರ ಮಳೆಯಾಗುವ ಮುನ್ಸೂಚನೆ ಇದೆ. ನವೆಂಬರ್ 8ರಂದು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಆದರೆ ಉತ್ತರ ಕನ್ನಡ ಜಿಲ್ಲೆಯಲ್ಲಿ ಮುಖ್ಯವಾಗಿ ಒಣಹವೆಯ ವಾತಾವರಣ ಮುಂದುವರಿಯಲಿದೆ.

ನವೆಂಬರ್ 9ರಂದು ದಕ್ಷಿಣ ಕನ್ನಡ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. 

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಇಲ್ಲ!

ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಸದ್ಯಕ್ಕೆ ಮಳೆಯ ಆತಂಕವಿಲ್ಲ. ನವೆಂಬರ್ 8 ಮತ್ತು 9ರಂದು ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆಯಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ಮುಖ್ಯವಾಗಿ ಒಣಹವೆಯ ವಾತಾವರಣ ಇರಲಿದೆ. 

ದಕ್ಷಿಣ ಒಳನಾಡಿನ 5 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆಯಿದೆ. ನವೆಂಬರ್ 8ರಂದು ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ ಮತ್ತು ರಾಮನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ನವೆಂಬರ್ 9ರಂದು ಕೊಡಗು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆಯ ವಾತಾವರಣ ಇರಲಿದೆ.

ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ ಮಳೆಯ ಸಾಧ್ಯತೆ ಕಡಿಮೆಯಿದೆ. ಈ ಭಾಗಗಳಲ್ಲಿ ಒಣಹವೆ ಮುಂದುವರಿಯುವ ನಿರೀಕ್ಷೆಯಿದೆ.

ಬೆಂಗಳೂರಿನ ಹವಾಮಾನ ಹೇಗಿರಲಿದೆ?

ರಾಜಧಾನಿ ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮಳೆಯಾಗುವ ಸಾಧ್ಯತೆ ತೀರಾ ಕಡಿಮೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣಹವೆಯ ವಾತಾವರಣ ಮುಂದುವರಿಯಲಿದೆ.

 

Exit mobile version