ಕರ್ನಾಟಕದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರಿ ಮಳೆ ಮುನ್ಸೂಚನೆ

Untitled design (90)

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಇನ್ನೂ ಎರಡು ದಿನ ಮುಂದುವರಿಯುವ ಸಾಧ್ಯತೆಯಿದೆ. ಅಕ್ಟೋಬರ್ 23 ಮತ್ತು 24ರಂದು ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ (IMD) ನೀಡಿದೆ.

ಬೆಂಗಳೂರು ನಗರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಜನರು ಹವಾಮಾನ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯೂ ಇದೆ.

ಹವಾಮಾನ ಇಲಾಖೆ ಬೆಂಗಳೂರು ಕೇಂದ್ರದ ಮುನ್ಸೂಚನೆಯ ಪ್ರಕಾರ, ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕೆಲವು ಪ್ರದೇಶಗಳಲ್ಲಿ ಗಂಟೆಗೆ 30ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿಯೂ ಅಕ್ಟೋಬರ್ 23 ಮತ್ತು 24ರಂದು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕರಾವಳಿ ಕರ್ನಾಟಕದಲ್ಲಿ ಹೇಗಿರಲಿದೆ ಹವಾಮಾನ?

ಅಕ್ಟೋಬರ್ 23ರಂದು ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಡುಪಿ ಜಿಲ್ಲೆಯ ಹಲವು ಪ್ರದೇಶಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಬಹುದು. ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ.

ಅಕ್ಟೋಬರ್ 24ರಂದು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಹಲವು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿಯೂ ಕೆಲವು ಪ್ರದೇಶಗಳಲ್ಲಿ ಹಗುರ ಮಳೆಯಾಗಬಹುದು.

ಉತ್ತರ ಒಳನಾಡಿನ ಯಾವ ಜಿಲ್ಲೆಗಳಲ್ಲಿ ಮಳೆ?

ಉತ್ತರ ಒಳನಾಡಿನಲ್ಲಿ ಅಕ್ಟೋಬರ್ 23ರಂದು ಗದಗ, ಹಾವೇರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಈ ಸಂದರ್ಭದಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು.

ಇನ್ನು ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಮುಖ್ಯವಾಗಿ ಒಣ ಹವಾಮಾನ ಇರಲಿದೆ ಎಂದು ಮುನ್ಸೂಚನೆ ತಿಳಿಸಿದೆ.

ಅಕ್ಟೋಬರ್ 24ರಂದು ಧಾರವಾಡ ಮತ್ತು ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಹಗುರ ಮಳೆಯಾಗಬಹುದು. ಉಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಣ ಹವಾಮಾನ ಮುಂದುವರಿಯುವ ಸಾಧ್ಯತೆಯಿದೆ.

ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆಯ ಎಚ್ಚರಿಕೆ

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ. ಅಕ್ಟೋಬರ್ 23ರಂದು ಚಾಮರಾಜನಗರ, ಮಂಡ್ಯ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಬಹುದು. ಈ ಜಿಲ್ಲೆಗಳಲ್ಲಿ ಗಂಟೆಗೆ 30ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯೂ ಇದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಗುಡುಗು ಸಹಿತ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.

ಅಕ್ಟೋಬರ್ 24ರಂದು ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ ಮತ್ತೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ ಮತ್ತು ರಾಮನಗರ ಜಿಲ್ಲೆಗಳ ಹಲವು ಕಡೆಗಳಲ್ಲಿ ಸಾಧಾರಣದಿಂದ ಮಧ್ಯಮ ಮಳೆಯಾಗಬಹುದು. ಚಿತ್ರದುರ್ಗ, ದಾವಣಗೆರೆ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ. 

ಬೆಂಗಳೂರಿನಲ್ಲಿ ಮಳೆ 

ಬೆಂಗಳೂರಿನಲ್ಲಿ ಮುಂದಿನ ಎರಡು ದಿನ ಮೋಡ ಕವಿದ ವಾತಾವರಣದೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ನಗರ ಮತ್ತು ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಇರುವುದರಿಂದ ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವುದು ಉತ್ತಮ. 

ಗುರುವಾರ ಸಂಜೆ ಅಂತ್ಯಗೊಂಡ 24 ಗಂಟೆಗಳ ಅವಧಿಯಲ್ಲಿ ಬೆಂಗಳೂರು ಸೇರಿದಂತೆ ಒಳನಾಡು ಕರ್ನಾಟಕದ ಒಂದೆರಡು ಕಡೆಗಳಲ್ಲಿ ಮಳೆಯಾಗಿತ್ತು. ಇದೇ ವೇಳೆ ಕರಾವಳಿ ಕರ್ನಾಟಕದಲ್ಲಿ ಒಣ ಹವಾಮಾನ ಮುಂದುವರಿದಿತ್ತು.

 

Exit mobile version