ಶಿವಮೊಗ್ಗ, ಚಿಕ್ಕಮಗಳೂರು ಸೇರಿ ಹಲವು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ

Untitled design 2026 07 28T074832.570

ಬೆಂಗಳೂರು, ಜುಲೈ 28: ರಾಜ್ಯದಲ್ಲಿ ಮುಂಗಾರು ಮಳೆ ಮತ್ತೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಹಾಗೂ ಮಲೆನಾಡಿನ ಹಲವು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ (IMD) ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಜುಲೈ 28 ಮತ್ತು 29ರಂದು ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳ ಒಂದೆರಡು ಭಾಗಗಳಲ್ಲಿ  ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಈ ಹಿನ್ನೆಲೆ ಜನರು ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

ಕರಾವಳಿ ಭಾಗದಲ್ಲಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯೊಂದಿಗೆ ಗಂಟೆಗೆ 30ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಕಾರಣದಿಂದ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಸಮುದ್ರ ತೀರ ಪ್ರದೇಶಗಳಲ್ಲಿ ವಾಸಿಸುವವರು ಹಾಗೂ ಮೀನುಗಾರರು ಹವಾಮಾನ ಇಲಾಖೆಯ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸಲಹೆ ನೀಡಲಾಗಿದೆ.

ಮಲೆನಾಡಿನ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಕೊಡಗು ಮತ್ತು ಹಾಸನ ಜಿಲ್ಲೆಗಳ ಕೆಲವೆಡೆ ಉತ್ತಮ ಮಳೆಯಾಗುವ ಸಾಧ್ಯತೆಯಿದೆ. ಬೆಟ್ಟ ಪ್ರದೇಶಗಳಲ್ಲಿ ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ಪ್ರವಾಸಿಗರು ಹಾಗೂ ಸ್ಥಳೀಯರು ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಸೂಚಿಸಲಾಗಿದೆ.

ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಮಂಡ್ಯ, ರಾಮನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ ಹಾಗೂ ವಿಜಯನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆಯಿದೆ.

ಜುಲೈ 29ರಂದೂ ಇದೇ ಪರಿಸ್ಥಿತಿ ಮುಂದುವರಿಯುವ ನಿರೀಕ್ಷೆಯಿದೆ. ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮತ್ತೊಮ್ಮೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಮಳೆಯ ಅಬ್ಬರ ಮುಂದುವರಿಯಲಿದೆ. ಜೊತೆಗೆ ಬೆಳಗಾವಿ, ಧಾರವಾಡ, ಯಾದಗಿರಿ, ರಾಯಚೂರು ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕೊಪ್ಪಳ ಹಾಗೂ ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯೊಂದಿಗೆ ಬಲವಾದ ಗಾಳಿ ಬೀಸಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕಳೆದ 24 ಗಂಟೆಗಳ ಅವಧಿಯಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಹಲವೆಡೆ ಉತ್ತಮ ಮಳೆಯಾಗಿದೆ. ಉಡುಪಿ ಜಿಲ್ಲೆಯ ಕೊಲ್ಲೂರಿನಲ್ಲಿ ಅತಿ ಹೆಚ್ಚು 7 ಸೆಂಟಿಮೀಟರ್ ಮಳೆಯಾಗಿದ್ದು, ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ 5 ಸೆಂಟಿಮೀಟರ್ ಮಳೆ ದಾಖಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ, ಸುಳ್ಯ ಮತ್ತು ಉಪ್ಪಿನಂಗಡಿಯಲ್ಲಿ ತಲಾ 4 ಸೆಂಟಿಮೀಟರ್ ಮಳೆಯಾಗಿದೆ. ಕೊಡಗು ಜಿಲ್ಲೆಯ ಭಾಗಮಂಡಲ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ತಲಾ 3 ಸೆಂಟಿಮೀಟರ್ ಮಳೆ ದಾಖಲಾಗಿದೆ.

ಮಳೆಯ ತೀವ್ರತೆ ಹೆಚ್ಚಾಗುವ ಸಾಧ್ಯತೆ ಇರುವ ಹಿನ್ನೆಲೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ಮೇಲ್ವಿಚಾರಣಾ ಕೇಂದ್ರ ಸಾರ್ವಜನಿಕರಿಗೆ ಹಲವು ಮುನ್ನೆಚ್ಚರಿಕೆ ಸೂಚನೆಗಳನ್ನು ನೀಡಿದೆ. ನದಿ, ಹಳ್ಳ ಹಾಗೂ ತಗ್ಗು ಪ್ರದೇಶಗಳ ಬಳಿ ಅನಗತ್ಯವಾಗಿ ಹೋಗದಿರುವುದು, ಮಳೆಯಿಂದ ನೀರು ತುಂಬಿದ ರಸ್ತೆಗಳನ್ನು ದಾಟುವಾಗ ಎಚ್ಚರಿಕೆ ವಹಿಸುವುದು, ಬಿರುಗಾಳಿ ಬೀಸುವ ಸಮಯದಲ್ಲಿ ಮರಗಳು ಹಾಗೂ ದುರ್ಬಲ ಕಟ್ಟಡಗಳ ಸಮೀಪ ನಿಲ್ಲದಿರುವುದು ಸುರಕ್ಷಿತ ಎಂದು ತಿಳಿಸಲಾಗಿದೆ.

 

Exit mobile version