ಬೆಂಗಳೂರು, ಏಪ್ರಿಲ್ 11: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಹವಾಮಾನದಲ್ಲಿ ಬದಲಾವಣೆ ಕಂಡುಬರುತ್ತಿದ್ದು, ಬಹುತೇಕ ಪ್ರದೇಶಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಕೆಲವೆಡೆ ಸಾಧಾರಣ ಮಳೆಯಾಗುತ್ತಿದ್ದರೂ, ಇಂದಿನ ಹವಾಮಾನ ವರದಿ ಪ್ರಕಾರ ಕರಾವಳಿ ಭಾಗಗಳಲ್ಲಿ ತಾಪಮಾನ ಹೆಚ್ಚಳ ಕಂಡುಬರುವ ಸಾಧ್ಯತೆಯಿದ್ದು, ಹೀಟ್ ವೇವ್ (ಉಷ್ಣ ಅಲೆ) ಎಚ್ಚರಿಕೆ ನೀಡಲಾಗಿದೆ.
ಭಾರತೀಯ ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡಗಳಲ್ಲಿ ಇಂದು 35 ಡಿಗ್ರಿ ಸೆಲ್ಸಿಯಸ್‌ಗೂ ಅಧಿಕ ತಾಪಮಾನ ದಾಖಲಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ನಿನ್ನೆವರೆಗೆ ಕರಾವಳಿ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದರೂ, ಇಂದಿನ ಪರಿಸ್ಥಿತಿ ಸಂಪೂರ್ಣವಾಗಿ ಬದಲಾಗಿದ್ದು, ತಾಪಮಾನ ಏರಿಕೆಯಿಂದ ಜನರು ಉಷ್ಣತೆಯ ತೀವ್ರತೆಯನ್ನು ಅನುಭವಿಸಬೇಕಾಗಬಹುದು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಾತ್ರ ಒಣಹವೆಯೇ ಮುಂದುವರಿಯಲಿದೆ ಎಂದು ವರದಿಯಾಗಿದೆ.
ಇನ್ನು ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಒಣಹವೆಯೇ ಮುಂದುವರಿಯಲಿದೆ. ಈ ಭಾಗಗಳಲ್ಲಿ ಉಷ್ಣತೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ.
ದಕ್ಷಿಣ ಒಳನಾಡಿನ ಭಾಗಗಳಲ್ಲಿ ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗುವ ಸಾಧ್ಯತೆಯಿದೆ. ಚಾಮರಾಜನಗರ, ಮೈಸೂರು, ಮಂಡ್ಯ, ಕೊಡಗು, ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಒಣಹವೆಯೇ ಇರಲಿದೆ.
ಈ ನಡುವೆ, ಹೀಟ್ ವೇವ್ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆಯು ಸಾರ್ವಜನಿಕರಿಗೆ ಕೆಲವು ಪ್ರಮುಖ ಸೂಚನೆಗಳನ್ನು ನೀಡಿದೆ. ಉಷ್ಣಾಘಾತದ ಅಪಾಯ ಹೆಚ್ಚಾಗಿರುವುದರಿಂದ ಮಧ್ಯಾಹ್ನ 12 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಸೂರ್ಯನ ತಾಪಕ್ಕೆ ನೇರವಾಗಿ ಒಳಪಡುವುದನ್ನು ತಪ್ಪಿಸಿಕೊಳ್ಳಬೇಕು. ಅಗತ್ಯವಿದ್ದರೆ ಮಾತ್ರ ಹೊರಗೆ ತೆರಳಬೇಕು ಎಂದು ಸೂಚಿಸಲಾಗಿದೆ.
ರಾಜ್ಯದ ಬಹುತೇಕ ಭಾಗಗಳಲ್ಲಿ ಈಗ ಒಣಹವೆಯೇ ಮುಂದುವರಿಯಲಿದ್ದು, ಕರಾವಳಿಯಲ್ಲಿ ಮಾತ್ರ ತಾಪಮಾನ ಏರಿಕೆಯಿಂದ ಜನರು ಎಚ್ಚರಿಕೆಯಿಂದ ಇರಬೇಕಾಗಿದೆ. ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ನಿವಾಸಿಗಳು ಹೀಟ್ ವೇವ್ ಪರಿಣಾಮವನ್ನು ಲಘುವಾಗಿ ತೆಗೆದುಕೊಳ್ಳದೇ ಮುಂಜಾಗ್ರತಾ ಕ್ರಮಗಳನ್ನು ಕಟ್ಟುನಿಟ್ಟಾಗಿ ಅನುಸರಿಸುವುದು ಅಗತ್ಯವಾಗಿದೆ.





