ರಾಜ್ಯದಲ್ಲಿ ಬಿರು ಬೇಸಿಗೆಯ ನಡುವೆಯೇ ಹವಾಮಾನ ಇಲಾಖೆ ತಂಪನೆಯ ಸುದ್ದಿ ನೀಡಿದೆ. ರಾಜ್ಯದ ಒಳನಾಡಿನಲ್ಲಿ ದಿಢೀರ್ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ (ಏಪ್ರಿಲ್ 25) ರಾಜ್ಯದ ಹಲವೆಡೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
20 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ :
ಮಳೆಯ ತೀವ್ರತೆಯನ್ನು ಪರಿಗಣಿಸಿ ಹವಾಮಾನ ಇಲಾಖೆಯು ರಾಜ್ಯದ 5 ಜಿಲ್ಲೆಗಳಿಗೆ ‘ಆರೆಂಜ್ ಅಲರ್ಟ್’ ಹಾಗೂ 15 ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್’ ಘೋಷಿಸಿದೆ. ವಿಶೇಷವಾಗಿ ಮಲೆನಾಡು ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ವರುಣನ ಆರ್ಭಟ ಜೋರಾಗಿರಲಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?
ಮಲೆನಾಡು ಭಾಗ : ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ರಾತ್ರಿಯಿಂದಲೇ ಮಳೆ ಆರಂಭವಾಗಲಿದ್ದು, ನಾಳೆ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಉತ್ತರ ಒಳನಾಡು : ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ಕರಾವಳಿ : ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲೂ ಹಗುರ ಮಳೆಯ ಮುನ್ಸೂಚನೆ ಇದೆ.
ಉಷ್ಣಾಂಶದ ಏರಿಕೆ ಹಾಗೂ ಒಣಹವೆ :
ಒಂದೆಡೆ ಮಳೆಯ ಮುನ್ಸೂಚನೆ ಇದ್ದರೂ, ಬೆಂಗಳೂರು ಸೇರಿದಂತೆ ಹಲವೆಡೆ ಬಿಸಿಲಿನ ಧಗೆ ಮುಂದುವರಿಯಲಿದೆ. ಕಲಬುರ್ಗಿಯಲ್ಲಿ ಗರಿಷ್ಠ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದ್ದರೆ, ಬೆಂಗಳೂರಿನಲ್ಲಿ 36 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ತಾಪಮಾನವು 41 ರಿಂದ 43 ಡಿಗ್ರಿ ಸೆಲ್ಸಿಯಸ್‌ವರೆಗೆ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
