ಬೆಂಗಳೂರು, ಮಾರ್ಚ್ 13: ಕರ್ನಾಟಕದಲ್ಲಿ ಕಳೆದ ಹಲವು ದಿನಗಳಿಂದ ತಾಪಮಾನ ಏರಿಕೆಯಾಗಿದ್ದು, ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಶುಷ್ಕ ವಾತಾವರಣ ಮುಂದುವರಿದಿದೆ. ಹವಾಮಾನ ಇಲಾಖೆ ನೀಡಿರುವ ಮಾಹಿತಿ ಪ್ರಕಾರ, ಮುಂದಿನ ಕೆಲವು ದಿನಗಳ ಕಾಲವೂ ಇದೇ ರೀತಿಯ ಬಿಸಿಲಿನ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಬೇಸಿಗೆ ತೀವ್ರವಾಗುತ್ತಿದ್ದು, ತಾಪಮಾನ 39 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಈಗಾಗಲೇ ಉರಿ ಬಿಸಿಲು ಕಂಡುಬರುತ್ತಿದ್ದು, ಜನರು ಮಧ್ಯಾಹ್ನ ವೇಳೆಯಲ್ಲಿ ಹೊರಗೆ ಹೋಗುವಾಗ ಹೆಚ್ಚಿನ ಎಚ್ಚರಿಕೆ ವಹಿಸಬೇಕಾಗಿದೆ. ಬೆಂಗಳೂರಿನಲ್ಲಿ ಹೀಟ್‌ಸ್ಟ್ರೋಕ್ ಭೀತಿ ಹಿನ್ನೆಲೆ ಆರೋಗ್ಯ ಇಲಾಖೆ ಕೂಡ ಎಚ್ಚರಿಕೆ ನೀಡಿದ್ದು, ಬೆಳಗ್ಗೆ 11 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಅನಗತ್ಯವಾಗಿ ಹೊರಗೆ ಹೋಗದಂತೆ ಸೂಚಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲಿ ಒಣ ಹವಾಮಾನ
ಹವಾಮಾನ ಇಲಾಖೆಯ ಪ್ರಕಾರ, ದಕ್ಷಿಣ ಒಳನಾಡಿನ ಹಲವಾರು ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಒಣ ಹವಾಮಾನ ಮುಂದುವರಿಯಲಿದೆ. ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ರಾಮನಗರ, ತುಮಕೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ.
ಇದರ ಜೊತೆಗೆ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿಯೂ ಇದೇ ರೀತಿಯ ಶುಷ್ಕ ವಾತಾವರಣ ಕಂಡುಬರುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ ಮಧ್ಯಾಹ್ನ ವೇಳೆಯಲ್ಲಿ ಬಿಸಿಲಿನ ತೀವ್ರತೆ ಹೆಚ್ಚು ಕಂಡುಬರುವ ಸಾಧ್ಯತೆ ಇರುವುದರಿಂದ ಜನರು ಆರೋಗ್ಯದ ಕಡೆ ಹೆಚ್ಚಿನ ಗಮನ ಕೊಡಬೇಕಾಗಿದೆ.
ಕರಾವಳಿ ಜಿಲ್ಲೆಗಳಲ್ಲಿಯೂ ಬಿಸಿಲಿನ ತಾಪಮಾನ
ಕರಾವಳಿ ಭಾಗಗಳಲ್ಲಿಯೂ ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿಯೂ ಇಂದು ಹಾಗೂ ಮುಂದಿನ ದಿನಗಳಲ್ಲಿ ಒಣಹವೆ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಒಳನಾಡಿನಲ್ಲಿ ಬಿಸಿಲಿನ ಪ್ರಭಾವ
ಉತ್ತರ ಒಳನಾಡಿನ ಜಿಲ್ಲೆಗಳಾದ ಬೆಳಗಾವಿ, ಬೀದರ್, ವಿಜಯಪುರ, ಬಾಗಲಕೋಟೆ, ಹಾವೇರಿ, ಗದಗ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಮತ್ತು ವಿಜಯನಗರ ಜಿಲ್ಲೆಗಳಲ್ಲಿಯೂ ಕಳೆದ ಕೆಲವು ದಿನಗಳಿಂದ ಒಣಹವೆಯ ವಾತಾವರಣ ಮುಂದುವರಿದಿದೆ.
ಆರೋಗ್ಯ ಇಲಾಖೆಯ ಎಚ್ಚರಿಕೆ
ಮಾರ್ಚ್ ತಿಂಗಳ ಎರಡನೇ ವಾರದ ನಂತರ ಬೆಂಗಳೂರಿನಲ್ಲಿ ಬಿಸಿಲಿನ ತೀವ್ರತೆ ಇನ್ನಷ್ಟು ಹೆಚ್ಚುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ಕೂಡ ಅಲರ್ಟ್ ಆಗಿದ್ದು, ಹೀಟ್‌ಸ್ಟ್ರೋಕ್ ಹಾಗೂ ಡಿಹೈಡ್ರೇಶನ್ ಅಪಾಯದಿಂದ ಜನರು ಜಾಗ್ರತೆ ವಹಿಸಬೇಕೆಂದು ಸೂಚಿಸಿದೆ.
ವೃದ್ಧರು, ಗರ್ಭಿಣಿಯರು, ಮಕ್ಕಳು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿರುವವರು ಹೆಚ್ಚು ಎಚ್ಚರಿಕೆಯಿಂದ ಇರಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ. ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು ಕೆಲ ಆರೋಗ್ಯ ಸಲಹೆಗಳನ್ನು ನೀಡಿದ್ದಾರೆ. ದಿನದ ವೇಳೆ ಹೆಚ್ಚು ನೀರು ಕುಡಿಯುವುದು, ತಂಪು ಪಾನೀಯಗಳು ಹಾಗೂ ಹಣ್ಣುಗಳನ್ನು ಸೇವಿಸುವುದು ದೇಹದ ತಾಪಮಾನ ನಿಯಂತ್ರಿಸಲು ಸಹಕಾರಿಯಾಗುತ್ತದೆ.





